ಬೆಂಗಳೂರ: ಕುಟುಂಬದ ಮಹಿಳೆಗೆ ಪ್ರತಿ ತಿಂಗಳು ೨ ಸಾವಿರ ನೀಡುವ ಗೃಹಲಕ್ಷ್ಮೀ ಯೋಜನೆ ನೋಂದಣಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ಈ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಟ್ವೀಟ್ ಮಾಡಿ ಮಾಹಿತಿ ನೀಡಿದೆ. ಗೃಹಲಕ್ಷ್ಮೀ ಯೋಜನೆಗೆ ನೋಂದಾಯಿತ ಫಲಾನುಭವಿಗಳ ಖಾತೆಗೆ ಈಗಾಗಲೇ ೨ ಸಾವಿರ ರೂ. ಜಮೆ ಮಾಡುವ ಪ್ರಕ್ರಿಯೆ ಜಾರಿಯಲ್ಲಿದೆ. ಗೊಂದಲವಾಗದಿರಲಿ ಎಂದು ರಾಜ್ಯ ಸರ್ಕಾರ ನೋಂದಣಿ ಪ್ರಕ್ರಿಯೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ರಾಜ್ಯದ ಈಗಾಗಲೇ ನೋಂದಾಯಿತ ಫಲಾನುಭವಿಗಳಿಗೆ ೨ ಸಾವಿರ ರೂ. ಜಮೆ ಆದ ನಂತರ ಗೃಹಲಕ್ಷ್ಮೀ ಯೋಜನೆಗೆ ನೋಂದಣಿ ಪ್ರಕ್ರಿಯೆ ಪುನಾರಂಭಗೊಳ್ಳಲಿದೆ.
ಆಗಸ್ಟ್ ೩೦ರಂದು ಮೈಸೂರಿನಲ್ಲಿ ಅದ್ಧೂರಿ ಕಾರ್ಯಕ್ರಮ ಮಾಡಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ನೀಡಲಾಗಿತ್ತು. ಆದರೆ ಯೋಜನೆ ಜಾರಿಯಾಗಿ ಒಂದೇ ವಾರಕ್ಕೆ ಗೃಹಲಕ್ಷ್ಮೀ ಯೋಜನೆ ನೋಂದಣಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಇನ್ನು ಶೀಘ್ರದಲ್ಲಿಯೇ ನೋಂದಣಿ ಪುನರಾರಂಭಗೊಳ್ಳಲಿದೆ ಎಂದು ತಿಳಿಸಿದೆ.
ಇದುವರೆಗೂ ನೋಂದಾಯಿತ ಫಲಾನುಭವಿಗಳ ಖಾತೆಗೆ ರೂ.೨೦೦೦ ಜಮಾಗೊಳಿಸುವ ಪ್ರಕ್ರಿಯೆ ನಡೆಯುತ್ತಿದ್ದು ಗೊಂದಲವಾಗದಿರಲೆಂದು, ಗೃಹಲಕ್ಷ್ಮೀ ಯೋಜನೆಯ ಹೊಸ ನೋಂದಣಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಸದ್ಯ ಈ ಹಿಂಎದಯೇ ನೋಂದಣಿಯಾದ ಎಲ್ಲ ಫಲಾನುಭವಿಗಳಿಗೆ ಮೊದಲ ಕಂತಿನ ಹಣ ಜಮಾಗೊಂಡ ಬಳಿಕ ಮತ್ತೆ ಹೊಸ ನೋಂದಣಿ ಪ್ರಕ್ರಿಯೆ ಪುನರಾರಂಭವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ತನ್ನ ಎಕ್ಸ್ ಖಾತೆಯಲ್ಲಿ ತಿಳಿಸಿದೆ.