Saturday, April 19, 2025
Google search engine

Homeರಾಜಕೀಯಅನ್ನ ಕೊಡುವ ರೈತರನ್ನು, ತೆರಿಗೆ ತೆರುವ ನಾಗರಿಕರನ್ನು ಕಾಲ ಕಸದಂತೆ ಕಡೆಗಣಿಸಲಾಗಿದೆ: ಹೆಚ್.ಡಿ.ಕುಮಾರಸ್ವಾಮಿ

ಅನ್ನ ಕೊಡುವ ರೈತರನ್ನು, ತೆರಿಗೆ ತೆರುವ ನಾಗರಿಕರನ್ನು ಕಾಲ ಕಸದಂತೆ ಕಡೆಗಣಿಸಲಾಗಿದೆ: ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಮುಂಬರುವ ಲೋಕಸಭೆ, ಜಿಲ್ಲಾ, ತಾಲ್ಲೂಕು ಪಂಚಾಯಿತಿ, ಬಿಬಿಎಂಪಿ ಚುನಾವಣೆ ಹಾಗೂ ಪಕ್ಷ ಸಂಘಟನೆಗೆ ಸಂಬಂಧಿಸಿದಂತೆ ಇದೇ ಸೆ.10ರಂದು ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಜೆಡಿಎಸ್ ಸಮಾವೇಶ ನಡೆಯಲಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ನೀಡಿರುವ ಅವರು, ಮಾಜಿ ಪ್ರಧಾನಿಗಳು, ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಆಗಿರುವ ಹೆಚ್.ಡಿ.ದೇವೇಗೌಡರು, ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ, ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡರು ಸೇರಿದಂತೆ ಪಕ್ಷದ ಎಲ್ಲಾ ಶಾಸಕರು, ಮಾಜಿ ಶಾಸಕರು, ಹಿರಿಯ ಮುಖಂಡರು, ಸಾವಿರಾರು ಕಾರ್ಯಕರ್ತರು ಸಭೆಯಲ್ಲಿ ಭಾಗಿಯಾಗಲಿದ್ದಾರೆ ಎಂದಿದ್ದಾರೆ.

ಅರಮನೆ ಮೈದಾನದ ನಲಪಾಡ್ ಪೆವಿಲಿಯನ್ ನಲ್ಲಿ ಭಾನುವಾರ ಬೆಳಗ್ಗೆ 10.30 ಗಂಟೆಯಿಂದ ಸಭೆ ಆರಂಭವಾಗಲಿದೆ ಎಂದಿರುವ ಮಾಜಿ ಮುಖ್ಯಮಂತ್ರಿಗಳು, ಎಲ್ಲರೂ ತಪ್ಪದೇ ಭಾಗವಹಿಸಬೇಕು ಎಂದು ಮನವಿ ಮಾಡಿದ್ದಾರೆ.

ದೃಢ ಸಂಕಲ್ಪ ಮಾಡೋಣ, ದೃಢ ಹೆಜ್ಜೆ ಇಡೋಣ:

ಈ ನಡುವೆ ಕಾರ್ಯಕರ್ತರು ಹಾಗೂ ಮುಖಂಡರಿಗೆ ಸಂದೇಶ ನೀಡಿರುವ ಮಾಜಿ ಮುಖ್ಯಮಂತ್ರಿಗಳು; ನಿಮ್ಮೆಲ್ಲರ ಪ್ರೀತಿ, ಹಾರೈಕೆ, ದೈವದ ಕರುಣೆ, ತಂದೆ ತಾಯಿಯವರ ಆಶೀರ್ವಾದದಿಂದ ನನ್ನ ಆರೋಗ್ಯ ಅತ್ಯುತ್ತಮವಾಗಿ ಸುಧಾರಿಸಿದೆ. ಜೆಡಿಎಸ್ ಪಕ್ಷದ ಚಟುವಟಿಕೆಗಳಲ್ಲಿ ಮತ್ತೆ ಸಕ್ರಿಯವಾಗಿ ಭಾಗಿಯಾಗುತ್ತಿದ್ದೇನೆ. ನಾವೆಲ್ಲರೂ ಪಣತೊಟ್ಟು ಹೊರಡೋಣ, ಪಕ್ಷವನ್ನು ಚೈತನ್ಯಶೀಲವಾಗಿ ಮರಳಿ ಕಟ್ಟೋಣ ಎಂದು ತಿಳಿಸಿದ್ದಾರೆ.

ಕರ್ನಾಟಕ ಸಂಕಷ್ಟದಲ್ಲಿದೆ. ತೀವ್ರ ಬರ-ನೆರೆ, ಅನಧಿಕೃತ ಲೋಡ್ ಶೆಡ್ಡಿಂಗ್, ಕಾವೇರಿ ಬಿಕ್ಕಟ್ಟಿನಿಂದ ತತ್ತರಿಸುತ್ತಿದೆ. ಅನ್ನ ಕೊಡುವ ರೈತರನ್ನು, ತೆರಿಗೆ ತೆರುವ ನಾಗರಿಕರನ್ನು ಕಾಲ ಕಸದಂತೆ ಕಡೆಗಣಿಸಲಾಗಿದೆ. ಈ ದುರಿತ ದಿನಗಳಲ್ಲಿ ನಾವು ಜನರ ಜತೆ ಬದ್ಧತೆಯಿಂದ ನಿಲ್ಲಬೇಕು. ಜನಪರ ನಿಲುವು, ಹೋರಾಟ ನಮ್ಮೆಲ್ಲರ ಹೊಣೆ, ನೈತಿಕ ಜವಾಬ್ದಾರಿ ಎಂದು ಕಾರ್ಯಕರ್ತರು, ಮುಖಂಡರಿಗೆ ಒತ್ತಿ ಹೇಳಿದ್ದಾರೆ.

ಸೋತಿದ್ದೇವೆ, ನಿಜ.ಸೋಲೇ ಕೊನೆಯಲ್ಲ. ಹೋರಾಟದ ಹಾದಿಯಲ್ಲಿ ನಾವೆಲ್ಲರೂ ಸ್ಥೈರ್ಯ,ಅರ್ಪಣಾಭಾವದಿಂದ ಹೆಜ್ಜೆ ಹಾಕಲೇಬೇಕು.ಈ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿಗಳು,ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ.ದೇವೆಗೌಡರ ಸಾನ್ನಿಧ್ಯದಲ್ಲಿ ಬೆಂಗಳೂರು ಅರಮನೆ ಮೈದಾನದಲ್ಲಿ ಸೆ.10ರ ಭಾನುವಾರ ಬೆಳಗ್ಗೆ 10.30ಗಂಟೆಗೆ ಮಹತ್ವದ ಸಭೆ ಕರೆದಿದ್ದೇವೆ. ಆ ಸಭೆಗೆ ಎಲ್ಲರೂ ಬರಬೇಕು ಎಂದಿದ್ದಾರೆ.

ನಾನೂ ಸೇರಿ ಪ್ರತಿಯೊಬ್ಬರೂ ಪಕ್ಷದ ಕಟ್ಟಾಳುಗಳೇ ಎನ್ನವುದನ್ನು ಯಾರೂ ಮರೆಯುವಂತಿಲ್ಲ. ಪಕ್ಷದ ಉಳಿವು, ಗೆಲುವಿಗಾಗಿ ಅವಿರತವಾಗಿ ಶ್ರಮಿಸೋಣ. ತಪ್ಪದೇ ಸಭೆಗೆ ಬನ್ನಿ, ಮುಕ್ತವಾಗಿ ಮಾತನಾಡೋಣ. ಮುಂದಿನ ಹೆಜ್ಜೆಗಳನ್ನು ದೃಢವಾಗಿ ಇಡೋಣ. “ಏಳಿ ಎದ್ದೇಳಿ, ಗುರಿ ಮುಟ್ಟುವ ತನಕ ನಿಲ್ಲದಿರಿ..”

ಈ ವಿವೇಕವಾಣಿಯೇ ನಮ್ಮ ಪಾಲಿನ ಮೂಲಮಂತ್ರ ಎಂದು ಕಾರ್ಯಕರ್ತರನ್ನು ಮಾಜಿ ಮುಖ್ಯಮಂತ್ರಿಗಳು ಹುರಿದುಂಬಿಸಿದ್ದಾರೆ.

RELATED ARTICLES
- Advertisment -
Google search engine

Most Popular