ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಸೆ.15ರಂದು ಬೆಳಗ್ಗೆ 10 ಗಂಟೆಗೆ ಮೈಸೂರು ನಗರದ ಓವಲ್ ಮೈದಾನದಲ್ಲಿ ಆವರಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ ಹೆಚ್.ಸಿ.ಮಹದೇವಪ್ಪ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಸಂವಿಧಾನ ಓದು ಕಾರ್ಯಕ್ರಮ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ತಿಳಿಸಿದರು.
ಅವರು ಇಂದು ನೂತನ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, 3 ರಿಂದ 5 ಸಾವಿರ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಏಕಕಾಲದಲ್ಲಿ ಸಂವಿಧಾನ ಪೀಠಿಕೆ ಓದಲಿದ್ದಾರೆ ಎಂದು ಹೇಳಿದರು.
ಜಿಲ್ಲಾ ಮಟ್ಟದ ಅಧಿಕಾರಿಗಳು ಸಂವಿಧಾನ ಓದು ಕಾರ್ಯಕ್ರಮಕ್ಕೆ ಸಕಲ ರೀತಿಯಲ್ಲಿ ಸಿದ್ಧತೆ ಮಾಡಿಕೊಳ್ಳಬೇಕು. ಜಿಲ್ಲಾ, ತಾಲ್ಲೂಕು ಹಾಗೂ ಗ್ರಾಮ ಮಟ್ಟದಲ್ಲಿರುವ ಕಚೇರಿಗಳು ಹಾಗೂ ವಿದ್ಯಾಸಂಸ್ಥೆಗಳು ತಮ್ಮ ಕಚೇರಿ ಹಾಗೂ ವಿದ್ಯಾಸಂಸ್ಥೆಗಳಲ್ಲಿ ಸಾಮೂಹಿಕವಾಗಿ ಸಂವಿಧಾನ ಪೀಠಿಕೆ ಓದಬೇಕು ಎಂದು ನಿರ್ದೇಶನ ನೀಡಿದರು.
ಸಂವಿಧಾನದ ಪೀಠಿಕೆಯನ್ನು ಓದುವುದರೊಂದಿಗೆ ಎಲ್ಲರೂ ಸಂವಿಧಾನದ ಪೀಠಿಕೆಗೆ ಬದ್ಧರಾಗಿರಬೇಕು. ಸಂವಿಧಾನಿಕ ತತ್ವಗಳನ್ನು ತಮ್ಮ ಜೀವನ ಮತ್ತು ಕರ್ತವ್ಯಗಳಲ್ಲಿ ಅಳವಡಿಸಿಕೊಳ್ಳುವ ಪ್ರತಿಜ್ಞೆ ಕೈಗೊಳ್ಳಬೇಕೆಂದು ಅವರು ತಿಳಿಸಿದರು.
ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಸೆ.15ರಂದು ಬೆಳಗ್ಗೆ 10 ಗಂಟೆಗೆ ವಿಧಾನ ಸೌಧದ ಮುಂಭಾಗದಲ್ಲಿ 5 ಸಾವಿರ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸುವ ಕಾರ್ಯಕ್ರಮದಲ್ಲಿ ಮಾನ್ಯ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳಿಂದ ಸಂವಿಧಾನ ಪೀಠಿಕೆಯನ್ನು ಓದುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ರಾಜ್ಯದ ಎಲ್ಲಾ ವಿದ್ಯಾಸಂಸ್ಥೆಗಳು ಹಾಗೂ ಇಲಾಖೆಗಳು ಆನ್ ಲೈನ್ ಮೂಲಕ ಪಾಲ್ಗೊಳ್ಳುವರು. ಹಾಗಾಗಿ ಅದೇ ಸಂದರ್ಭಕ್ಕೆ ಜಿಲ್ಲೆಯಲ್ಲೂ ಕೂಡ ಸಂವಿಧಾನ ಪೀಠಿಕೆ ಓದುವ ಕಾರ್ಯಕ್ರಮ ನಡೆಯಲಿದೆ ಎಂದರು.
ಅಂದು ಎಲ್ಲಾ ಸರ್ಕಾರಿ ಕಛೇರಿ, ಶಾಲಾ-ಕಾಲೇಜು, ವಿದ್ಯಾರ್ಥಿ ನಿಲಯಗಳಲ್ಲಿ ಸಂವಿಧಾನ ಪೀಠಿಕೆ ಓದಬೇಕು. ಈ ಮೂಲಕ ಸಂವಿಧಾನ ಪೀಠಿಕೆಯ ಮಹತ್ವ ಹಾಗೂ ಸಂವಿಧಾನದ ಮೌಲ್ಯ ಮತ್ತು ತತ್ವಗಳನ್ನು ಜನರಿಗೆ ತಿಳಿಸಬೇಕು ಎಂದರು.
ತಾಲ್ಲೂಕು ಮಟ್ಟದಲ್ಲಿ ತಹಶಿಲ್ದಾರ್ ಹಾಗೂ ತಾಲ್ಲೂಕು ಪಂಚಾಯತ್ ಅಧಿಕಾರಿಗಳು ಸೇರಿ ತಾಲ್ಲೂಕು ಕ್ರೀಡಾಂಗಣಗಳಲ್ಲಿ ಕಾರ್ಯಕ್ರಮ ಆಯೋಜಿಸಿ ಯಶಸ್ವಿಗೊಳಿಸಬೇಕು ಎಂದರು.
ಶಾಲಾ ಶಿಕ್ಷಣ ಇಲಾಖೆ, ಕಾಲೇಜು ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಕೃಷಿ ಇಲಾಖೆ ಸೇರಿದಂತೆ ಜಿಲ್ಲೆಯ ವಿವಿಧ ಇಲಾಖೆಗಳಿಗೆ ಸಂವಿಧಾನ ಪೀಠಿಕೆ ಓದುವಲ್ಲಿ ನೋಂದಣಿ ಮಾಡಿಸುವುದಕ್ಕೆ ಗುರಿ ನಿಗದಿಪಡಿಸಿದ್ದು, ಇದನ್ನು ಸೂಕ್ತವಾಗಿ ಪಾಲಿಸಿ ಎಂದು ನಿರ್ದೇಶನ ನೀಡಿದರು.
ಜಿಲ್ಲಾ ಮತ್ತು ತಾಲ್ಲೂಕು ವ್ಯಾಪ್ತಿಯಲ್ಲಿ ಬರುವ ದಲಿತ ಸಂಘರ್ಷ ಸಮಿತಿಯ ಮುಖಂಡರುಗಳು, ಪರಿಶಿಷ್ಟ ಪಂಗಡದ ಮುಖಂಡರುಗಳು, ಹಿಂದುಳಿದ ವರ್ಗಗಳ ಮುಖಂಡರುಗಳು ಹಾಗೂ ಅಲ್ಪಸಂಖ್ಯಾತರ ಸಮಿತಿಯ ಮುಖಂಡರುಗಳು ಭಾಗವಹಿಸುವರು ಎಂದರು.
1 ಲಕ್ಷ ಮೀರಿ ಜನ ನೋಂದಣಿ
ಸಮಾಜ ಕಲ್ಯಾಣ ಇಲಾಖೆ ಯ ಜಂಟಿ ನಿರ್ದೇಶಕರಾದ ರಂಗೇಗೌಡ ಅವರು ಅವರು ಮಾತನಾಡಿ ಜಿಲ್ಲೆಯಲ್ಲಿ 1 ಲಕ್ಷ ಜನ ಮೀರಿ ನೋಂದಣಿ ಮಾಡಿಕೊಂಡಿದ್ದಾರೆ ಎಂದರು.ಹಾಗೂ ಇನ್ನೂ ನೋಂದಣಿ ಕಾರ್ಯ ನಡೆಯುತ್ತಿದೆ.ಎಲ್ಲಾ ಸಾರ್ವಜನಿಕರು ಹಾಗೂ ಸಂಘ ಸಂಸ್ಥೆಗಳು ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿ ಮಾಡಿಕೊಳ್ಳಬೇಕೆಂದು ಕೋರಿದರು..
ಸಮಾಜ ಕಲ್ಯಾಣ ಇಲಾಖೆಯ http://thepreamble-swdkar.in ವೆಬ್ ಸೈಟ್ ಮೂಲಕ ನೊಂದಾಯಿಸಿಕೊಂಡು ಪ್ರಜಾಪ್ರಭುತ್ವದ ಅಧಿಕೃತ ಆಚರಣೆಯಲ್ಲಿ ಭಾಗವಹಿಸಲು ಸಾರ್ವಜನಿಕರನ್ನು ಪ್ರೇರೇಪಿಸಲು ಅಗತ್ಯ ಕ್ರಮವಹಿಸಲಾಗಿದೆ ಎಂದು ಅವರು ತಿಳಿಸಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಕೆ.ಎಂ.ಗಾಯಿತ್ರಿ, ಮಹಾ ನಗರ ಪಾಲಿಕೆ ಆಯುಕ್ತರಾದ ಉರ್ ಅಸಾದ್ ಷರೀಫ್, ಅಪರ ಜಿಲ್ಲಾಧಿಕಾರಿ ಪಿ.ಶಿವರಾಜು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.