ಚಾಮರಾಜನಗರ: ಯುವಜನತೆಯು ಏಡ್ಸ್ ನಂತಹ ಮಾರಕ ಕಾಯಿಲೆಗಳಿಗೆ ಬಲಿಯಾಗದಂತೆ ಎಚ್ಚರ ವಹಿಸಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಧ್ಯಕ್ಷರು ಹಾಗೂ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಬಿ.ಎಸ್. ಭಾರತಿ ಅವರು ತಿಳಿಸಿದರು.
ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿಂದು ಕರ್ನಾಟಕ ರಾಜ್ಯ ಏಡ್ಸ್‍ಪ್ರಿವೆನ್‍ಷನ್ ಸೊಸೈಟಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಘಟಕ ಹಾಗೂ ವಿವಿಧ ಇಲಾಖೆಗಳು, ಸ್ವಯಂ ಸೇವಾ ಸಂಸ್ಥೆಗಳ ಸಹಯೋಗದಲ್ಲಿ ಏಡ್ಸ್ ವಿರೋಧಿ ಜಾಗೃತಿಗಾಗಿ ಹಮ್ಮಿಕೊಳ್ಳಲಾಗಿದ್ದ ಮ್ಯಾರಾಥಾನ್ ಸ್ಪರ್ಧೆಗೆ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.
ಅಸುರಕ್ಷಿತ ಲೈಂಗಿಕ ಸಂಪರ್ಕ ಹಾಗೂ ಇತರ ಮಾರ್ಗಗಳಿಂದ ಏಡ್ಸ್ ಹರಡುವ ಸಾಧ್ಯತೆ ಇರುತ್ತದೆ. ಏಡ್ಸ್ ನಿಂದ ಉಂಟಾಗುವ ತೊಂದರೆಗಳ ಬಗ್ಗೆ ಸಂಪೂರ್ಣವಾಗಿ ತಿಳಿದುಕೊಳ್ಳಬೇಕು. ಇದರಿಂದ ರೋಗ ಹರಡದಂತೆ ನಿಗಾ ವಹಿಸಬಹುದು ಎಂದರು.
ಆರೋಗ್ಯ ಇಲಾಖೆಯು ಹಲವಾರು ಕಾರ್ಯಕ್ರಮಗಳ ಮುಖಾಂತರ ಯುವಜನತೆಗೆ ಹೆಚ್.ಐ.ವಿ ಏಡ್ಸ್ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ತೊಡಗಿಕೊಂಡಿದೆ. ಮ್ಯಾರಾಥಾನ್ ಓಟದ ಜಾಗೃತಿ ಮೂಲಕ ಏಡ್ಸ್ ನಿರ್ಮೂಲನೆ ಹಾಗೂ ಅರಿವು ಕುರಿತು ಕಾರ್ಯಕ್ರಮ ಹಮ್ಮಿಕೊಂಡಿರುವುದು ವಿಶೇಷವಾಗಿದೆ. ಯುವಜನತೆಯು ಎಚ್ಚರಗೊಳ್ಳಬೇಕು ಎಂದು ಜಿಲ್ಲಾ ನ್ಯಾಯಾಧೀಶ ಬಿ.ಎಸ್. ಭಾರತಿ ಅವರು ತಿಳಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ.ಎಂ. ವಿಶ್ವೇಶ್ವರಯ್ಯ ಅವರು ಮಾತನಾಡಿ ಹೆಚ್.ಐ.ವಿ ಏಡ್ಸ್ ವಿರುದ್ದದ ಅರಿವು ಮೂಡಿಸುವ ನಿಟ್ಟಿನಲ್ಲಿ ರಸಪ್ರಶ್ನೆ, ರೀಲ್ಸ್ ತಯಾರಿಕೆ, ನಾಟಕ ಹಾಗೂ ಮ್ಯಾರಾಥಾನ್ ಓಟ ಹಮ್ಮಿಕೊಂಡಿದ್ದೇವೆ. ಈ ರೀತಿಯ ಕಾರ್ಯಕ್ರಮಗಳಿಂದ ಯುವ ಜನರಲ್ಲಿ ಏಡ್ಸ್ ಬಗೆಗಿನ ಜಾಗೃತಿ ಉಂಟು ಮಾಡುವುದು ಗುರಿಯಾಗಿದೆ ಎಂದರು.
ಜಿಲ್ಲಾ ಏಡ್ಸ್ ಪ್ರತಿಬಂಧಕ ಹಾಗೂ ನಿಯಂತ್ರಣ ಘಟಕದ ಕಾರ್ಯಕ್ರಮ ಅಧಿಕಾರಿ ಡಾ. ರವಿಕುಮಾರ್ ಅವರು ಮಾತನಾಡಿ ಹೆಚ್.ಐ.ವಿ ಬಗ್ಗೆ ಜನರಲ್ಲಿ ಅದರಲ್ಲೂ ಯುವ ಸಮುದಾಯ, ಮುಂದಿನ ಪೀಳಿಗೆಯ ಜನರಿಗೆ ಪರಿಣಾಮಕಾರಿಯಾಗಿ ಅರಿವು ಮೂಡಿಸುವ ಉದ್ದೇಶದಿಂದ ನಾನಾ ಜಾಗೃತಿ ಚಟುವಟಿಕೆಗಳನ್ನು ನಡೆಸುತ್ತಿದ್ದೇವೆ. ನಮ್ಮ ಕಾರ್ಯಕ್ರಮಗಳಿಗೆ ವಿವಿಧ ಇಲಾಖೆಗಳು ಸಹಕಾರ ನೀಡಿವೆ ಎಂದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಎಂ. ಶ್ರೀಧರ, ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, ತಾಲೂಕು ಆರೋಗ್ಯಾಧಿಕಾರಿ ಡಾ. ಶ್ರೀನಿವಾಸ್, ಬಸವರಾಜೇಂದ್ರ ಆಸ್ಪತ್ರೆಯ ಡಾ. ಶ್ವೇತ ಹಾಗೂ ಇತರರು ಇದ್ದರು.
