ಚಾಮರಾಜನಗರ: ಕೇರಳ ರಾಜ್ಯದಲ್ಲಿ ನಿಫಾ ಪ್ರಕರಣವು ವರದಿಯಾಗಿರುವ ಹಿನ್ನೆಲೆಯಲ್ಲಿ ಕೇರಳ ರಾಜ್ಯದ ಗಡಿ ಜಿಲ್ಲೆಯಾದ ಚಾಮರಾಜನಗರದಲ್ಲಿ ಆರೋಗ್ಯ ಇಲಾಖೆಯು ಪರಿಸ್ಥಿತಿ ಎದುರಿಸಲು ಸರ್ವ ಸನ್ನದ್ಧಾವಾಗಿದ್ದು ಸಾರ್ವಜನಿಕರು ಯಾವುದೇ ಆತಂಕ ವದಂತಿಗಳಿಗೆ ಕಿವಿಗೊಡದೆ ರೋಗದ ವಿರುದ್ದ ಅಗತ್ಯ ಮುನ್ನೆಚರಿಕಾ ಕ್ರಮ ವಹಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮನವಿ ಮಾಡಿದೆ.
ಹಂದಿ, ಕುದುರೆ, ನಾಯಿ, ಬೆಕ್ಕುಗಳಂತಹ ಸೋಂಕಿತ ಜಾನುವಾರುಗಳು ಮಧ್ಯಂತರ ಮೂಲಗಳಾಗಿರುವುದರಿಂದ ಇವುಗಳನ್ನು ಪ್ರತ್ಯೇಕವಾಗಿಡಬೇಕು. ಶಂಕಿತ ಮನುಷ್ಯ ಪ್ರಕರಣಗಳನ್ನು ಸಹ ಪ್ರತ್ಯೇಕವಾಗಿಡಬೇಕು. ಶಂಕಿತ ಪ್ರಕರಣಗಳಲ್ಲಿ ಬಳಸುವ ಬಟ್ಟೆ, ಪಾತ್ರೆಗಳು, ಮುಖ್ಯವಾಗಿ ಸ್ನಾನ ಮತ್ತು ಶೌಚಾಲಯದಲ್ಲಿ ಬಳಸುವ ವಸ್ತುಗಳನ್ನು ಪ್ರತ್ಯೇಕವಾಗಿ ಶುಚಿಗೊಳಿಸಬೇಕು. ನೈರ್ಮಲ್ಯ ಕಾಪಾಡಬೇಕು.
ಹಸ್ತಲಾಘವ ಕೊಡುವುದನ್ನು ತಪ್ಪಿಸಿ, ಸೋಂಕಿತ ಜನರ ಸಂಪರ್ಕಕ್ಕೆ ಬಂದ ನಂತರ ಕೈಗಳನ್ನು ಸರಿಯಾಗಿ ತೊಳೆದುಕೊಳ್ಳಬೇಕು. ರೋಗಿಗಳನ್ನು ಉಪಚರಿಸುವಾಗ ಮಾಸ್ಕ್ ಮತ್ತು ಕೈಗವಸುಗಳನ್ನು (ಗ್ಲೌಸ್) ಧರಿಸಬೇಕು. ಎಲ್ಲ ರೀತಿಯ ಹಣ್ಣುಗಳನ್ನು ಚೆನ್ನಾಗಿ ತೊಳೆದು ಸಿಪ್ಪೆ ಸುಲಿದು ಅಥವಾ ಬೇಯಿಸಿ ತಿನ್ನಬೇಕು. ಫ್ಲೂ ರೀತಿಯ ಲಕ್ಷಣಗಳು ಕಂಡು ಬಂದರೆ ಹತ್ತಿರದ ಆಸ್ಪÀತ್ರೆಗೆ ಭೇಟಿ ನೀಡಬೇಕು. ನೆರವಿಗಾಗಿ 104ಕ್ಕೆ ಕರೆ ಮಾಡಬೇಕು.
ಪ್ರಾಣಿ, ಪಕ್ಷಿಗಳು ಕಚ್ಚಿರುವ ಹಣ್ಣುಗಳನ್ನು ತಿನ್ನಬಾರದು. ಬಾವಲಿಗಳು ಅತಿ ಹೆಚ್ಚಾಗಿ ಕಂಡು ಬರುವ ಪ್ರದೇಶಗಳಿಂದ ಸಂಗ್ರಹಿಸಿದ ನೀರಾ, ಸೇಂದಿ ಸೇವಿಸಬಾರದು. ಸೋಂಕಿತ ಪ್ರದೇಶಗಳಿಗೆ ಭೇಟಿ ನೀಡುವಾಗ ಪ್ರತಿಬಂಧಕ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ರೋಗಿಯ ಶರೀರ ಸ್ರಾವದೊಂದಿಗೆ (ಜೊಲ್ಲು, ಬೆವರು, ಮೂತ್ರ, ಇತ್ಯಾದಿ) ಸಂಪರ್ಕ ತಪ್ಪಿಸಬೇಕು. ಹೋಟೆಲ್, ತಂಪು ಪಾನೀಯ ಅಂಗಡಿಗಳಲ್ಲಿ ಉಪಯೋಗಿಸುವ ಲೋಟ, ತಟ್ಟೆಗಳನ್ನು ಬಿಸಿ ನೀರಿನಲ್ಲಿ ತೊಳೆಯಬೇಕು. ಹಂದಿ ಸಾಕಾಣಿಕಾ ಕೇಂದ್ರಗಳಲ್ಲಿ ಸ್ವಚ್ಚತೆ ಕಾಪಾಡಬೇಕು ಹಾಗೂ ಅಲ್ಲಿನ ಸಿಬ್ಬಂದಿಯ ವೈಯಕ್ತಿಕ ರಕ್ಷಣಾ ಕ್ರಮಗಳನ್ನು ಅನುಸರಿಸಬೇಕು. ಹಂದಿ ಸಾಕಾಣಿಕಾ ವ್ಯಾಪ್ತಿಯಲ್ಲಿ ಬಾವಲಿಗಳು ಹಂದಿಗಳ ಸಂಪರ್ಕಕ್ಕೆ ಬಾರದಂತೆ ಜಾಗ್ರತೆ ವಹಿಸಬೇಕು.
ಜಿಲ್ಲಾ ಜನತೆ ಈ ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸುವ ಮೂಲಕ ರೋಗ ಹರಡದಂತೆ ಇಲಾಖೆಯೊಂದಿಗೆ ಸಹಕರಿಸಬೇಕೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ.ಎಂ. ವಿಶ್ವೇಶ್ವರಯ್ಯ ಪ್ರಕಟಣೆಯಲ್ಲಿ ಕೋರಿದ್ದಾರೆ.