ಮಂಡ್ಯ: ಜಿಲ್ಲೆಯಲ್ಲಿ ಕಾವೇರಿ ಹೋರಾಟ ಮುಂದುವರೆದಿದ್ದು, ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶ ವಿರೋಧಿಸಿ ರೈತ ಹಿತರಕ್ಷಣಾ ಸಮಿತಿ ನಡೆಸುತ್ತಿರುವ ಧರಣಿಗೆ ಕರವೇ ಬೆಂಬಲ ಸೂಚಿಸಿದೆ
ರೈತ ಹಿತರಕ್ಷಣಾ ಸಮಿತಿ ಹಾಗೂ ಕರವೇ ಕಾರ್ಯಕರ್ತರು ಇಂದು ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆಯ ಬೆಂ-ಮೈ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದಾರೆ.
ಕಾವೇರಿ ನೀರು ನಿಯಂತ್ರಣ ಸಮಿತಿ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನೀರಿಲ್ಲದಿದ್ರೂ ಅವೈಜ್ಞಾನಿಕ ಆದೇಶ ಮಾಡಲಾಗಿದೆ. ರಾಜ್ಯ ಸರ್ಕಾರ ವಾಸ್ತವ ಪರಿಸ್ಥಿತಿ ಮನವರಿಕೆ ಮಾಡಿಕೊಡುವಲ್ಲಿ ವಿಫಲವಾಗಿದೆ ಎಂದು ಕಿಡಿ ಕಾರಿದ ಪ್ರತಿಭಟನಾಕಾರರು, ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಬಿಡಬಾರದು. ನೀರು ಬಿಟ್ಟರೆ ರಾಜ್ಯಾದ್ಯಂತ ಕರವೇ ಕಾರ್ಯಕರ್ತರು ಪ್ರತಿಭಟನೆ ಮಾಡ್ತೀವಿ ಎಂದು ಎಚ್ಚರಿಕೆ ನೀಡಿದರು.
ರಾಜ್ಯದ ಸಂಸದರು ಕೂಡಲೇ ಕಾವೇರಿ ಹೋರಾಟಕ್ಕೆ ಮುಂದಾಗಬೇಕು ಎಂದು ಇದೇ ಸಂದರ್ಭದಲ್ಲಿ ಆಗ್ರಹಿಸಿದರು.
ರೈತ ನಾಯಕಿ ಸುನಂದಾ ಜಯರಾಂ ಮಾತನಾಡಿ, 21 ರಂದು ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಮತಷ್ಟು ಉಗ್ರ ಹೋರಾಟದ ಎಚ್ಚರಿಕೆ ನೀಡಿದರು.
ಹೆದ್ದಾರಿ ತಡೆಯಿಂದ ಸ್ವಲ್ಪ ಸಮಯ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು.