ಚಾಮರಾಜನಗರ : ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ತಮ್ಮ ಕ್ರೀಡಾ ಪ್ರತಿಭೆಗಳನ್ನು ಹೊರಸೂಸಲು ದಸರಾ ಕ್ರೀಡಾಕೂಟ ಉತ್ತಮ ವೇದಿಕೆಯಾಗಿದೆ ಎಂದು ಶಾಸಕ ಸಿ. ಪುಟ್ಟರಂಗಶೆಟ್ಟಿ ಅಭಿಪ್ರಾಯಪಟ್ಟರು.
ನಗರದ ಡಾ. ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟವನ್ನು ಉದ್ಘಾಟಿಸಿ, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ ಈ ಹಿಂದೆ ದಸರಾ ಕ್ರೀಡಾಕೂಟವನ್ನು ಮೈಸೂರಿನಲ್ಲಿ ಮಾತ್ರ ಆಯೋಜಿಸಲಾಗುತ್ತಿತ್ತು. ದಸರಾ ಕಾರ್ಯಕ್ರಮಗಳನ್ನು ಮೈಸೂರು ಭಾಗದ ಎಲ್ಲಾ ಜಿಲ್ಲೆಗಳಲ್ಲಿ ಪಸರಿಸುವ ಉದ್ದೇಶದಿಂದ ೨೦೧೩ರಿಂದೀಚೆಗೆ ದಸರಾ ಕಾರ್ಯಕ್ರಮಗಳನ್ನು ಮೈಸೂರು ಸುತ್ತಮುತ್ತಲಿನ ಜಿಲ್ಲೆಗಳಲ್ಲಿಯೂ ನಡೆಸಲಾಗುತ್ತಿದೆ. ಹಾಗೆಯೇ ಚಾಮರಾಜನಗರ ಜಿಲ್ಲೆಯಲ್ಲಿಯೂ ಸಹ ತಾಲೂಕು ಹಾಗೂ ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟವನ್ನು ಏರ್ಪಡಿಸಲಾಗಿದೆ.
ದಸರಾ ಕ್ರೀಡಾಕೂಟದಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಹೆಚ್ಚಾಗಿ ಪಾಲ್ಗೊಳ್ಳುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ. ತಾಲೂಕು ಮಟ್ಟದಲ್ಲಿ ವಿಜೇತರಾದ ವಿದ್ಯಾರ್ಥಿಗಳು ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟವನ್ನು ವೇದಿಕೆಯಾಗಿ ಬಳಸಿಕೊಳ್ಳಬೇಕು. ಈ ಮೂಲಕ ಜಿಲ್ಲೆಗೆ, ರಾಜ್ಯಕ್ಕೆ ಹಾಗೂ ದೇಶಕ್ಕೆ ಕೀರ್ತಿ ತರಬೇಕು ಎಂದು ಅವರು ಹಾರೈಸಿದರು. ಜಿಲ್ಲಾ ಕ್ರೀಡಾಂಗಣ ಸಮಿತಿ ಸದಸ್ಯರಾದ ಶ್ರೀನಿವಾಸಪ್ರಸಾದ್ ಮಾತನಾಡಿ ಚಾಮರಾಜನಗರ ಜಿಲ್ಲಾ ಕೇಂದ್ರವಾಗಿ ೨೫ ವರ್ಷಗಳಾಗಿದ್ದರೂ ನಗರದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣ ಮೂಲ ಸೌಕರ್ಯಗಳೊಂದಿಗೆ ಸುಸಜ್ಜಿತ ಕ್ರೀಡಾಂಗಣವಾಗಿ ಅಭಿವೃದ್ಧಿ ಹೊಂದಬೇಕಾಗಿದೆ. ಈ ನಿಟ್ಟಿನಲ್ಲಿ ಎಲ್ಲರ ಸಹಕಾರ ಅಗತ್ಯವಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ನಗರಸಭಾ ಸದಸ್ಯ ಸಿ.ಜಿ. ಚಂದ್ರಶೇಖರ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಶಿವಸ್ವಾಮಿ, ತಾಲೂಕು ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷರಾದ ನಾಗಣ್ಣ, ಗ್ರೇಡ್-೨ ಅಧ್ಯಕ್ಷರಾದ ಶಿವಬಸವಯ್ಯ, ರಾಜ್ಯ ದೈಹಿಕ ಶಿಕ್ಷಕರ ಸಂಘದ ಉಪಾಧ್ಯಕ್ಷರಾದ ಜೋಸೆಫ್, ದೈಹಿಕ ಶಿಕ್ಷಣ ಪರಿವೀಕ್ಷಕರಾದ ಮೋಹನ್‌ಕುಮಾರ್, ಇತರರು ಕಾರ್ಯಕ್ರಮದಲ್ಲಿ ಇದ್ದರು.