ಬೆಳಗಾವಿ: ಜಾತ್ಯತೀತ ತತ್ವದ ಮೇಲೆ ನಂಬಿಕೆ ಇಟ್ಟಿರುವ ಕಾಂಗ್ರೆಸ್ ಪಕ್ಷದ ಪ್ರತಿನಿಧಿಯಾದ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪನವರು ಒಂದು ಜಾತಿಯ ಪಕ್ಷದ ಪ್ರತಿನಿಧಿಯಂತೆ ಮಾತನಾಡುತ್ತಿರುವುದನ್ನು ನಾನು ಖಂಡಿಸುತ್ತೇನೆ ಎಂದು ವಿಧಾನ ಪರಿಷತ್ ಸದಸ್ಯ, ಮಾಜಿ ಸಚಿವ ಹೆಚ್.ವಿಶ್ವನಾಥ್ ಹೇಳಿದರು.
ಅಖಿತ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷರೂ ಆದ ಶಾಮನೂರು ಶಿವಶಂಕರಪ್ಪ, ರಾಜ್ಯ ಸರ್ಕಾರದಲ್ಲಿ ಲಿಂಗಾಯತರನ್ನು ಕಡೆಗಣಿಸಲಾಗಿದೆ ಹಾಗೂ ಸಮಾಜದ ಅಧಿಕಾರಿಗಳಿಗೆ ತೊಂದರೆಯಾಗಿದೆ ಎಂದು ದೂರಿದ್ದರು. ಈ ಹೇಳಿಕೆಯ ಬಗ್ಗೆ ಬೆಳಗಾವಿಯಲ್ಲಿಂದು ಪ್ರತಿಕ್ರಿಯಿಸಿದ ವಿಶ್ವನಾಥ್, ನಮ್ಮಲ್ಲಿ ಜಾತಿ ಆಧರಿಸಿ ಯಾರಿಗೂ ಹುದ್ದೆ ಕೊಡುವುದಿಲ್ಲ. ಬೇರೆ-ಬೇರೆ ಜಾತಿಯವರಿಗೆ ಎಲ್ಲೆಲ್ಲಿ ಅವಕಾಶ ಮಾಡಿಕೊಡಬೇಕೋ, ಅಲ್ಲಿ ಮಾಡಿಕೊಡಲಾಗಿದೆ. ಲಿಂಗಾಯತರಿಗೆ ಏಳು ಸಚಿವ ಸ್ಥಾನ ಕೊಡಲಾಗಿದೆ. ನಿಮಗೆ ಮುಖ್ಯಮಂತ್ರಿ ಸ್ಥಾನ ಬೇಕಿದ್ದರೆ ನಾಯಕತ್ವವನ್ನು ನೀವೇ ವಹಿಸಿಕೊಳ್ಳಿ ಎಂದು ತೀಕ್ಷ್ಣವಾಗಿ ಹೇಳಿದರು.
ಮುಂದುವರಿದು ಮಾತನಾಡಿದ ವಿಶ್ವನಾಥ್, ಕುರುಬ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ಮತ ಹಾಕಿ ಕಾಂಗ್ರೆಸ್ ಪಕ್ಷವನ್ನು ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲಿಸಿದ್ದಾರೆ. ಲಿಂಗಾಯತರು ಸೇರಿದಂತೆ ಎಲ್ಲ ಸಮುದಾಯದವರು ಕೂಡ ಮತ ಹಾಕಿದ್ದಾರೆ. ಜಾತಿಯ ಆಧಾರದ ಮೇಲೆ ಅಧಿಕಾರ ನೀಡಲಾಗುತ್ತಿದ್ದರೆ, ಸಿದ್ದರಾಮಯ್ಯ ಅವರಿಗೆ ಬಹಳ ಹತ್ತಿರವಿದ್ದವರು ನೀವೇ, ಅದನ್ನು ಸರಿಪಡಿಸಲು ಹೇಳಿ. ಈ ವಿಷಯವನ್ನೇಕೆ ಬೀದಿಗೆ ಬಂದು ದೊಡ್ಡ ರಂಪಾಟ ಮಾಡುತ್ತಿದ್ದೀರಾ?. ಅಧಿಕಾರಶಾಹಿ ಆಡಳಿತವನ್ನು ಬೀದಿಗೆ ತಂದು ಮಾತನಾಡುತ್ತಿದ್ದೀರಾ ಎಂದು ಪ್ರಶ್ನಿಸಿದರು.