ಬಳ್ಳಾರಿ: ಎಲ್ಲ ಸರಕಾರಿ ಆಸ್ಪತ್ರೆ, ಶಾಲೆ, ಧಾರ್ಮಿಕ ಹಾಗೂ ಸಾರ್ವಜನಿಕ ಸ್ಥಳಗಳು ಸೇರಿದಂತೆ ಉದ್ಯಾನವನಗಳಲ್ಲಿ ಸ್ವಚ್ಛತೆ ಕಾಪಾಡುವುದರಿಂದ ರೋಗ, ಕ್ರಿಮಿಕೀಟಗಳನ್ನು ನಿಯಂತ್ರಿಸಬಹುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವೈ.ರಮೇಶ್ ಬಾಬು ಅಭಿಪ್ರಾಯಪಟ್ಟರು.
ಪ್ರಧಾನಮಂತ್ರಿಗಳ ಕರೆಯಂತೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆಸ್ಪತ್ರೆ, ಜಿಲ್ಲಾ ಸರ್ವೇಕ್ಷಣಾ ಘಟಕದ ಆವರಣದಲ್ಲಿ ‘ಸ್ವಚ್ಛತಾ ಹಿ ಸೇವಾ’ ಅಭಿಯಾನದಡಿ ಭಾನುವಾರ ನಡೆದ ಸ್ವಚ್ಛತಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎನ್.ಬಸರೆಡ್ಡಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಸರಕಾರಿ ಆಸ್ಪತ್ರೆಗಳು ಯಾವುದೇ ಖಾಸಗಿ ಆಸ್ಪತ್ರೆಗಳಿಗೆ ಕಡಿಮೆ ಇಲ್ಲದಂತೆ ಸ್ವಚ್ಛತೆ ಕಾಪಾಡುವ ಮೂಲಕ ಸಾರ್ವಜನಿಕರಿಗೆ ಆರೋಗ್ಯ ಸೇವೆ ನೀಡುತ್ತಿವೆ. ಆಸ್ಪತ್ರೆಗಳ ಹೊರ ಆವರಣದಲ್ಲಿರುವ ತ್ಯಾಜ್ಯವನ್ನು ತೆರವುಗೊಳಿಸುವುದರಿಂದ ಶುದ್ಧ ಗಾಳಿ, ಹುಳು ಕೀಟಗಳಿಂದ ಉಲ್ಲಾಸದಾಯಕ ವಾತಾವರಣ, ಸೊಳ್ಳೆ ನಿಯಂತ್ರಣವನ್ನು ಕಾಣಬಹುದು. ಈ ನಿಟ್ಟಿನಲ್ಲಿ ಸಾರ್ವಜನಿಕರು ಸರಕಾರಿ ಆಸ್ಪತ್ರೆಗಳಿಗೆ ಭೇಟಿ ನೀಡುವಾಗ ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಆಸ್ಪತ್ರೆ ಆವರಣ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಆವರಣದಲ್ಲಿ ಎಲ್ಲ ತಜ್ಞ ವೈದ್ಯರು, ವೈದ್ಯ ಸಿಬ್ಬಂದಿ ಯಾವುದೇ ತಾರತಮ್ಯವಿಲ್ಲದೆ ಕಸ, ಗಿಡ-ಗಂಟೆಗಳನ್ನು ತೆಗೆದು ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಸ್ವಚ್ಛಗೊಳಿಸಿದರು.
ಕಾರ್ಯಕ್ರಮದಲ್ಲಿ ಸ್ಥಳೀಯ ವೈದ್ಯಾಧಿಕಾರಿ ಡಾ. ಎಚ್.ವಿಶ್ವನಾಥ, ಅಪರ ಮುಖ್ಯ ವೈದ್ಯಾಧಿಕಾರಿ ಡಾ.ಗುರುನಾಥ ಬಿ.ಚೌವ್ಹಾಣ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಮರಿಯಂಬಿ ವಿ.ಕೆ., ಜಿಲ್ಲಾ ಕುಟುಂಬ ಕಲ್ಯಾಣ ಕಾರ್ಯಕ್ರಮದ ಅನುಷ್ಠಾನಾಧಿಕಾರಿ ಡಾ.ಪೂರ್ಣಿಮಾ ಕಟ್ಟಿಮನಿ, ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ.ಅನಿಲ್‌ಕುಮಾರ್, ತಾಲೂಕು ಆರೋಗ್ಯಾಧಿಕಾರಿ ಡಾ.ಮೋಹನಕುಮಾರಿ, ಡಾ. ಯಾರು ಪರಿಣಿತರು. ಮಲ್ಲಿಕಾರ್ಜುನ, ಡಾ.ಶ್ರೀಧರ, ಡಾ.ಉದಯಶಂಕರ, ಡಾ.ವಿಶಾಲಾಕ್ಷಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ಎಚ್.ದಾಸಪ್ಪ, ಪಾಲನಾ ಅಧಿಕಾರಿ ಸೆಲೀನಾ, ಆಡಳಿತಾಧಿಕಾರಿ ದೇಸಾಯಿ ಸೇರಿದಂತೆ ಡಾ.ತಜ್ಞರು ಹಾಗೂ ಸಿಬ್ಬಂದಿ ಹಾಜರಿದ್ದರು.
