ಬೆಳಗಾವಿ: ರಾಜ್ಯದಲ್ಲಿ ಕೋಮು ಗಲಭೆಯನ್ನು ತಕ್ಷಣ ಹತ್ತಿಕ್ಕುವ ಕೆಲಸವನ್ನು ನಮ್ಮ ಸರ್ಕಾರ ಮಾಡುತ್ತದೆ. ಒಂದು ವೇಳೆ ಯಾರೇ ಕೋಮು ಗಲಭೆ ಸೃಷ್ಟಿಸಿ ಸಮಾಜದಲ್ಲಿ ಶಾಂತಿ ಕದಡಲು ಯತ್ನಿಸಿದರೆ ಅಂತಹವರ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು.
ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗದ ಗಲಭೆ ಕುರಿತು ಪ್ರತಿಕ್ರಿಯಿಸಿ, ಪೊಲೀಸರು ಕಲ್ಲು ತೂರಾಟ ಮಾಡಿದ ದುಷ್ಕರ್ಮಿಗಳನ್ನು ಬಂಧಿಸಿ ಕಾನೂನು ಕ್ರಮ ತೆಗೆದುಕೊಳ್ಳುತ್ತಿದ್ದಾರೆ ಎಂದರು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ರಾಜ್ಯದಲ್ಲಿ ಕೋಮು ಗಲಭೆಗಳು ಹೆಚ್ಚಾಗುತ್ತಿವೆ ಎಂದು ಬಿಜೆಪಿ ಮುಖಂಡರು ಆರೋಪಿಸುತ್ತಿರುವ ವಿಚಾರವಾಗಿ ಮಾತನಾಡಿ, ಅವರಿಗೆ ಆರೋಪ ಮಾಡುವುದನ್ನು ಬಿಟ್ಟು ಇನ್ನೇನು ಕೆಲಸ ಇದೆ. ಆರೋಪ ಎಲ್ಲ ಸತ್ಯ ಅಲ್ಲ, ಇವೆಲ್ಲ ಸುಳ್ಳು ಆರೋಪಗಳು ಎಂದು ಬಿಜೆಪಿನಾಯಕರ ಹೇಳಿಕೆಗೆ ತಿರುಗೇಟು ನೀಡಿದರು.
ಶಿವಮೊಗ್ಗ ಗಲಭೆ ಖಂಡಿಸಿ ಬಿಜೆಪಿ ಪ್ರತಿಭಟನೆ ನಡೆಸುತ್ತಿರುವ ಬಗ್ಗೆ ಮಾತನಾಡಿ, ಪ್ರತಿಭಟನೆ ಮಾಡಲಿ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇದಕ್ಕೆ ನಾವು ಯಾವುದೇ ರೀತಿ ಅಡ್ಡಿ ಮಾಡುವುದಿಲ್ಲ. ಆದರೆ, ಪ್ರತಿಭಟನೆಗೆ ಸಕಾರಣವಿರಬೇಕು ಮತ್ತು ಶಾಂತಿಯುತವಾಗಿರಬೇಕು ಎಂದು ಹೇಳಿದರು.