ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ರೈತನ ಸಂಕಷ್ಟ ಹೇಳತೀರದಾಗಿದೆ. ಮುಂಗಾರು ಮಳೆ ಇಲ್ಲದೇ ಬರಗಾಲ ಪರಿಸ್ಥಿತಿ ಎದುರಾಗಿದೆ. ಹಾಗಾಗಿ ಬರ ಸಮೀಕ್ಷೆಗಾಗಿ ನಾಳೆ ರಾಜ್ಯಕ್ಕೆ ಕೇಂದ್ರ ಸರ್ಕಾರದ ಮೂರು ತಂಡ ಭೇಟಿ ನೀಡಲಿದೆ.
ನಾಳೆಯಿಂದ ಅ.೯ರವರೆಗೆ ಬೆಳಗಾವಿ, ವಿಜಯಪುರ, ಬಾಗಲಕೋಟೆ, ಧಾರವಾಡ, ಚಿತ್ರದುರ್ಗ, ಹಾವೇರಿ, ಗದಗ, ಕೊಪ್ಪಳ, ವಿಜಯನಗರ, ಚಿಕ್ಕಬಳ್ಳಾಪುರ, ತುಮಕೂರು, ದಾವಣಗೆರೆ ಒಟ್ಟು ೧೨ ಜಿಲ್ಲೆಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಲಿದ್ದಾರೆ. ಆದರೆ ಪ್ರವಾಸಕ್ಕೂ ಮುನ್ನ ನಾಳೆ ಕೇಂದ್ರ ತಂಡದ ಜತೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸಲಿದ್ದಾರೆ.
೩೪ ತಾಲೂಕುಗಳಲ್ಲಿ ಸಾಧಾರಣ ಬರದ ಪರಿಸ್ಥಿತಿ. ಒಟ್ಟು ೧೯೫ ತಾಲೂಕುಗಳಲ್ಲಿ ಬರದ ಪರಿಸ್ಥಿತಿ ಇದೆ. ಉಳಿದ ೪೦ ತಾಲೂಕುಗಳಲ್ಲಿ ಮಳೆ ಕೊರತೆ ಇದ್ದರೂ ಕೂಡ ತೇವಾಂಶ ಕೊರತೆ ಕಂಡು ಬರುತ್ತಿಲ್ಲ. ಮಾರ್ಗಸೂಚಿಗಳ ಪ್ರಕಾರ, ಮಧ್ಯಮ ಬರಕ್ಕೆ ಕೇಂದ್ರ ಸರ್ಕಾರ ಪರಿಹಾರ ಕೊಡಬಹುದು ಅಥವಾ ಇಲ್ಲದೇ ಇರಬಹುದು. ಬರ ಘೋಷಣೆ ಮನವಿಗೆ ಎಲ್ಲ ಸಿದ್ದತೆ ಮಾಡಿಕೊಂಡಿದ್ದೇವೆ. ಎಲ್ಲ ಬರ ಪೀಡಿತ ತಾಲೂಕುಗಳಲ್ಲಿ ಟಾಸ್ಕ್ ಫೋರ್ಸ್ ರಚನೆ ಮಾಡಲು ಸೂಚನೆ ನೀಡಿದ್ದೇವೆ ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದ್ದರು.
ಈ ಮುಂಚೆ ೧೧೩ ತಾಲೂಕುಗಳನ್ನು ಆಯ್ಕೆ ಮಾಡಿಕೊಂಡು ಬೆಳೆ ಸಮೀಕ್ಷೆಗೆ ಆದೇಶ ನೀಡಲಾಗಿತ್ತು. ೬೨ ತಾಲೂಕುಗಳಲ್ಲಿ ಬರಕ್ಕೆ ಅರ್ಹ ವಿವರ ಬಂದಿತ್ತು. ಸಚಿವ ಸಂಪುಟದಲ್ಲೂ ವಿಸ್ರೃತ ಚರ್ಚೆಯಾಗಿತ್ತು. ಆಗ ೬೨ ತಾಲೂಕುಗಳು ಮಾತ್ರವಲ್ಲ ಇನ್ನೂ ಹೆಚ್ಚಿನ ತಾಲೂಕುಗಳಲ್ಲಿ ಬರ ಸ್ಥಿತಿ ಇದೆ ಎಂದು ಚರ್ಚೆಯಾಗಿತ್ತು. ಹೀಗಾಗಿ ಉಳಿದ ೧೩೪ ತಾಲೂಕುಗಳಲ್ಲಿ ಸಮೀಕ್ಷೆ ಮಾಡಲು ಆದೇಶಿಸಲಾಗಿತ್ತು.