ಮಡಿಕೇರಿ : ಪರಿಸರ ಸಮತೋಲನ ಕಾಪಾಡಲು ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆ ಬಹಳ ಅಗತ್ಯವಾಗಿದ್ದು, ಜೀವ ಸಂಕುಲ ವ್ಯವಸ್ಥೆಯಲ್ಲಿ ವನ್ಯಜೀವಿಗಳ ಪಾತ್ರ ಬಹಳ ಮುಖ್ಯವಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ವರ್ಣಿತ್ ನೇಗಿ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕರ್ನಾಟಕ ಅರಣ್ಯ ಇಲಾಖೆಯ ಕೊಡಗು ಅರಣ್ಯ ವೃತ್ತ ಹಾಗೂ ಮಡಿಕೇರಿ ವನ್ಯಜೀವಿ ವಿಭಾಗದ ವತಿಯಿಂದ ಶನಿವಾರ ಮಡಿಕೇರಿ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ರಾಷ್ಟ್ರೀಯ ಹಸಿರು ಪಡೆಯ ಇಕೋ ಕ್ಲಬ್ ಘಟಕ, ಕಾಲೇಜಿನ ಎನ್.ಸಿ.ಸಿ.,ಘಟಕದ ಸಂಯುಕ್ತಾಶ್ರಯದಲ್ಲಿ “ವನ್ಯಜೀವಿಗಳ ಸಂರಕ್ಷಣೆಗಾಗಿ ಪಾಲುಗಾರಿಕೆ” ಎಂಬ ಘೋಷ ವಾಕ್ಯದೊಂದಿಗೆ ಹಮ್ಮಿಕೊಂಡಿದ್ದ 69 ನೇ ವನ್ಯಜೀವಿ ಸಪ್ತಾಹ: 2023 ದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪ್ರತಿಯೊಬ್ಬರೂ ಅರಣ್ಯ ಹಾಗೂ ವನ್ಯಜೀವಿಗಳನ್ನು ಸಂರಕ್ಷಿಸುವುದರೊಂದಿಗೆ ಜೀವ ವೈವಿಧ್ಯವನ್ನು ಸಂರಕ್ಷಿಸುವ ಮೂಲಕ ಮುಂದಿನ ಪೀಳಿಗೆಗಾಗಿ ಉತ್ತಮ ಪರಿಸರವನ್ನು ಕಾಪಾಡುವುದು ಎಲ್ಲರ ಜವಾಬ್ದಾರಿಯಾಗಿದೆ ಎಂದರು.
ವನ್ಯಜೀವಿಗಳು ಮತ್ತು ಮಾನವನ ನಡುವೆ ಉಂಟಾಗುತ್ತಿರುವ ಸಂಘರ್ಷವನ್ನು ತಡೆಯುವ ಮೂಲಕ ವನ್ಯಜೀವಿಗಳ ಸಂರಕ್ಷಣೆಗೆ ಪಣ ತೊಡಬೇಕಿದೆ ಎಂದರು. ಅರಣ್ಯ ಇಲಾಖೆಯು ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆಗಾಗಿ ವಹಿಸಿರುವ ವಿಶೇಷ ಕಾಳಜಿ ಶ್ಲಾಘನೀಯವಾದುದು. ಈ ದಿಸೆಯಲ್ಲಿ ನಾವೆಲ್ಲರೂ ಸೇರಿ ಅರಣ್ಯ ಹಾಗೂ ವನ್ಯಜೀವಿಗಳ ಸಂರಕ್ಷಣೆಗೆ ಅರಣ್ಯ ಇಲಾಖೆಯೊಂದಿಗೆ ಕೈಜೋಡಿಸೋಣ ಎಂದು ಸಿಇಒ ವರ್ಣಿತ್ ನೇಗಿ ಅವರು ಮನವಿ ಮಾಡಿದರು.
ವನ್ಯಜೀವಿಗಳ ಸಂರಕ್ಷಣೆಯ ಮಹತ್ವದ ಕುರಿತು ಮಾಹಿತಿ ನೀಡಿದ ಕಾಲೇಜಿನ ಪ್ರಾಂಶುಪಾಲ ಮೇಜರ್ ಡಾ ಬಿ.ರಾಘವ ಮಾತನಾಡಿ, ಅರಣ್ಯ ಮತ್ತು ಜೀವಿ ಸಂಕುಲದ ಉಳಿವು ನಮ್ಮೆಲ್ಲರ ಉಳಿವು. ಹಾಗಾಗಿ, ನಾವೆಲ್ಲರೂ ಅರಣ್ಯ ಇಲಾಖೆಯೊಂದಿಗೆ ಕೈಜೋಡಿಸುವ ಮೂಲಕ ಉತ್ತಮ ಭವಿಷ್ಯಕ್ಕಾಗಿ ಅರಣ್ಯ ಮತ್ತು ಪರಿಸರ ಸಂರಕ್ಷಣೆಗೆ ಬದ್ಧರಾಗಬೇಕು ಎಂದರು.
ಮುಂದಿನ ಪೀಳಿಗೆಗಾಗಿ ನಾವು ಅಳಿವಿನಂಚಿನಲ್ಲಿರುವ ಜೀವ ಪ್ರಭೇದಗಳನ್ನು ಸಂರಕ್ಷಿಸುವ ಮೂಲಕ ಅರಣ್ಯ ಮತ್ತು ವನ್ಯಜೀವಿಗಳನ್ನು ಸಂರಕ್ಷಿಸುವುದು ನಮ್ಮ ಆದ್ಯ ಕರ್ತವ್ಯ ಆಗಿದೆ ಎಂದರು. ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆ ಕುರಿತು ಪ್ರತಿಜ್ಞಾ ವಿಧಿ ಬೋಧಿಸಿ ಮಾತನಾಡಿದ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ (ಕರಾವಿಪ) ಕೊಡಗು ಜಿಲ್ಲಾ ಸಮಿತಿ ಅಧ್ಯಕ್ಷರೂ ಆದ ರಾಷ್ಟ್ರೀಯ ಹಸಿರು ಪಡೆಯ ಜಿಲ್ಲಾ ನೋಡಲ್ ಅಧಿಕಾರಿ ಟಿ.ಜಿ.ಪ್ರೇಮಕುಮಾರ್, ಅಮೂಲ್ಯ ಸಸ್ಯ ಮತ್ತು ಪ್ರಾಣಿ ಸಂಪತ್ತು ಹೊಂದಿರುವ ಪಶ್ಚಿಮಘಟ್ಟ ಸಂರಕ್ಷಣೆ ಹಾಗೂ ವನ್ಯಜೀವಿಗಳ ಸಂರಕ್ಷಣೆಗಾಗಿ ನಾವು ಪಣ ತೊಡಬೇಕಿದೆ ಎಂದರು.
ನಗರದ ಎಫ್‍ಎಂಸಿ ಕಾಲೇಜಿನ ಎನ್.ಸಿ.ಸಿ.ಕೆಡೆಟ್ ಗಳು, ವಿದ್ಯಾರ್ಥಿಗಳು, ನಗರದ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಎನ್.ಎಸ್.ಎಸ್.ಘಟಕದ ವಿದ್ಯಾರ್ಥಿಗಳು ಹಾಗೂ ಕಾಲೇಜಿನ ಉಪನ್ಯಾಸಕ ವೃಂದ ಮತ್ತು ವಿದ್ಯಾರ್ಥಿಗಳು, ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಭಾಗವಹಿಸಿದ್ದರು.
