ಆನೇಕಲ್ (ಬೆಂಗಳೂರು): ಅತ್ತಿಬೆಲೆ ಪಟಾಕಿ ಗೋದಾಮಿನಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಈವರೆಗೆ ೧೪ ಜನ ಮೃತಪಟ್ಟಿರುವುದು ದೃಢಪಟ್ಟಿದ್ದು, ಎಲ್ಲರ ಮೃತದೇಹಗಳು ಪತ್ತೆಯಾಗಿವೆ. ಮೃತರೆಲ್ಲರೂ ತಮಿಳುನಾಡಿನವರಾಗಿದ್ದಾರೆ. ತೀವ್ರವಾಗಿ ಗಾಯಗೊಂಡಿರುವ ನವೀನ್, ರಾಜೇಶ್ ವೆಂಕಟೇಶ್, ಸಂಜಯ್, ರಾಜೇಶ್, ಚಂದ್ರು ಹಾಗೂ ಪಾಲ್ ಕಬೀರ್ ಎಂಬವರನ್ನು ಬೆಂಗಳೂರಿನ ಆಕ್ಸ್‌ಫರ್ಡ್ ಹಾಗೂ ಸೇಂಟ್ ಜಾನ್ಸ್ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ.
ಮೃತರಲ್ಲಿ ೯ ಜನರ ಗುರುತು ಸದ್ಯಕ್ಕೆ ಸಿಕ್ಕಿದೆ. ಇನ್ನೂ ಮೂರು ಜನ ಮೃತರ ಗುರುತು ಪತ್ತೆಯಾಗಿಲ್ಲ. ಗಾಯಾಳುಗಳ ಪೈಕಿ ವೆಂಕಟೇಶ್ ಎಂಬಾತನ ಪರಿಸ್ಥಿತಿ ಗಂಭೀರವಾಗಿದೆ. ಉಳಿದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಾಲಾಜಿ ಕ್ರ್ಯಾಕರ್ಸ್‌ನ ನಿರ್ಲಕ್ಷ್ಯದಿಂದ ಅವಘಡ ಸಂಭವಿಸಿರುವುದು ಮೇಲ್ನೋಟಕ್ಕೆ ಸ್ಪಷ್ಟವಾಗಿದೆ ಎಂದು ಹೇಳಿದರು.
ಮಿತಿಮೀರಿ ಪಟಾಕಿ ಸಂಗ್ರಹಿಸಲಾಗಿತ್ತಾ ಏನೆಲ್ಲಾ ನಿಯಮ ಉಲ್ಲಂಘನೆ ಮಾಡಲಾಗಿದೆ ಎಂಬುದರ ಕುರಿತು ಸಮಗ್ರ ತನಿಖೆ ನಡೆಸಲಾಗುತ್ತಿದೆ. ಈಗಾಗಲೇ ಅತ್ತಿಬೆಲೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಟಾಕಿ ಗೋದಾಮಿಗೆ ಪರವಾನಗಿ ಪಡೆದಿದ್ದ ರಾಮಸ್ವಾಮಿ ರೆಡ್ಡಿ ಎಂಬವರ ಮಗ ನವೀನ್ ನನ್ನು ವಶಕ್ಕೆ ಪಡೆಯಲಾಗಿದೆ.
ವಿಧಿವಿಜ್ಞಾನ ಪ್ರಯೋಗಾಲಯದ ಅಧಿಕಾರಿಗಳು, ಅಗ್ನಿಶಾಮಕ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಅವರ ವರದಿ ಆಧಾರದ ಮೇಲೆ ಕ್ರಮ ಕೈಗೊಳ್ಳಲಾಗುತ್ತದೆ. ಪರವಾನಗಿದಾರರ ವಿರುದ್ಧ ಮೊದಲು ಕ್ರಮ ಕೈಗೊಳ್ಳಲಾಗುತ್ತದೆ. ನಂತರ ಪಟಾಕಿ ಯಾರು ಕಳುಹಿಸಿದ್ದಾರೆ ಅವರ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು ಎಂದರು.