ಮೈಸೂರು: ಅತ್ತಿಬೆಲೆ ಗಡಿಯ ಬಾಲಾಜಿ ಕ್ರ್ಯಾಕರ್ಸ್ ಪಟಾಕಿ ದಾಸ್ತಾನು ಮಳಿಗೆಯಲ್ಲಿ ಶನಿವಾರ ಸಂಭವಿಸಿದ ಬೆಂಕಿ ಅನಾಹುತದಲ್ಲಿ ೧೪ ಮಂದಿ ಸಾವನ್ನಪ್ಪಿದ್ದಾರೆ. ಗೋದಾಮು ಮಾಲೀಕನ ವಿರುದ್ಧ ಕ್ರಮ ಕೈಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.
ಈ ಕುರಿತಂತೆ ಮೈಸೂರಿನ ತಮ್ಮ ನಿವಾಸದ ಬಳಿ ಜನತಾ ದರ್ಶನದ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಸಿಎಂ, ಪಟಾಕಿ ದುರಂತದಲ್ಲಿ ನನಗಿರುವ ಮಾಹಿತಿ ಪ್ರಕಾರ ೧೪ ಮಂದಿ ಸಾವನ್ನಪ್ಪಿದ್ದಾರೆ. ಕಾರ್ಖಾನೆಯ ಮಾಲೀಕನ ಮೇಲೆ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದೇನೆ. ಘಟನಾ ಸ್ಥಳಕ್ಕೆ ಇಂದು ಭೇಟಿ ನೀಡುತ್ತಿದ್ದೇನೆ. ಘಟನೆ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯುತ್ತೇನೆ. ಆನಂತರ ಪಟಾಕಿ ಕಾರ್ಖಾನೆ ಹಾಗೂ ದಾಸ್ತಾನಿನ ಪರವಾನಗಿ ಪಡೆದಿದ್ದಾರೆಯೇ ಎಂಬ ಬಗ್ಗೆ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಸಿಎಂ ಸಂತಾಪ: ಅತ್ತಿಬೆಲೆ ಘಟನೆ ಸಂಬಂಧ ನಿನ್ನೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದ ಸಿಎಂ,ಬೆಂಗಳೂರು ನಗರ ಜಿಲ್ಲೆ ಆನೇಕಲ್ ಸಮೀಪ ಅತ್ತಿಬೆಲೆಯ ಪಟಾಕಿ ಸಂಗ್ರಹ ಮಳಿಗೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ೧೨ ಮಂದಿ ಮೃತಪಟ್ಟ ಸುದ್ದಿ ತಿಳಿದು ಅತೀವ ನೋವಾಯಿತು. ದುರ್ಘಟನೆ ನಡೆದ ಸ್ಥಳಕ್ಕೆ ನಾಳೆ ಭೇಟಿ ನೀಡಿ, ಪರಿಶೀಲನೆನಡೆಸಲಿದ್ದೇನೆ. ಮೃತ ಕಾರ್ಮಿಕರ ಕುಟುಂಬಕ್ಕೆ ನನ್ನ ಸಂತಾಪಗಳು ಎಂದಿದ್ದಾರೆ.