ಬಳ್ಳಾರಿ: ಉದ್ಯಮ ಆರಂಭ ಮಾಡುವುದರಿಂದ ಆರ್ಥಿಕ ಸ್ವಾವಲಂಬನೆ ಜೀವನ ಹೊಂದಿ, ಇತರರಿಗೂ ಉದ್ಯೋಗ ನೀಡುವಂತರಾಗಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಅಭಿಪ್ರಾಯ ವ್ಯಕ್ತಪಡಿಸಿದರು.
ಕೌಶಲ್ಯಾಭಿವೃದ್ಧಿ ಉದ್ಯಮಶೀಲತಾ ಮತ್ತು ಜೀವನೋಪಾಯ ಇಲಾಖೆ ಇವರ ಪ್ರಾಯೋಜಕತ್ವದಲ್ಲಿ, ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ(ಸಿಡಾಕ್) ಮತ್ತು ಜಿಲ್ಲಾ ಕೈಗಾರಿಕಾ ಕೇಂದ್ರ ಇವರ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಕೈಗಾರಿಕಾ ಕೇಂದ್ರ ಸಭಾಂಗಣದಲ್ಲಿ ನಡೆದ 10 ದಿನಗಳ ಉದ್ಯಮಶೀಲತಾ ಅಭಿವೃದ್ಧಿ ತರಬೇತಿಯ ಸಮಾರೋಪ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಸರ್ಕಾರದ ಯೋಜನೆಗಳು ಮತ್ತು ಕಾರ್ಯಕ್ರಮಗಳ ಬಗ್ಗೆ ಪ್ರತಿಯೊಬ್ಬರೂ ತಿಳಿದುಕೊಂಡು, ಇತರರಿಗೂ ತಿಳಿಸಿಕೊಡಬೇಕು ಹಾಗೂ ಇಲಾಖೆಯ ಯೋಜನೆಗಳನ್ನು ಸದುಪಯೋಗ ಪಡಿಸಿಕೊಂಡು ಸಮಾಜದಲ್ಲಿ ಗೌರವಯುತ ಜೀವನ ನಡೆಸಬೇಕು ಎಂದು ಕಿವಿಮಾತು ಹೇಳಿದರು.
ಇದೇ ಸಂದರ್ಭದಲ್ಲಿ ಭಾಗವಹಿಸಿದ್ದ ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ಶ್ರೀನಿವಾಸರಾವ್, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಸೋಮಶೇಖರ.ಬಿ, ಸಿಡಾಕ್‍ನ ಜಂಟಿ ನಿರ್ದೇಶಕ ಜಿ.ಯು.ಹುಡೆದ್, ಜಿಲ್ಲಾ ಕೈಗಾರಿಕಾ ಕೇಂದ್ರದ ಸಹಾಯಕ ನಿರ್ದೇಶಕ ವಿಜಯಕುಮಾರ, ಸಿಡಾಕ್‍ನ ತರಬೇತಿ ಅಧಿಕಾರಿ ವಿನೋದಕುಮಾರ.ಕೆ, ಪದ್ಮಾವತಿ ಸೇರಿದಂತೆ ಶಿಬಿರಾರ್ಥಿಗಳು ಉಪಸ್ಥಿತರಿದ್ದರು.