ಮೈಸೂರು: ಜಗದ್ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ನಾಳೆ ಚಾಲನೆ ನೀಡಲಾಗುತ್ತದೆ. ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನಾಳೆ ಬೆಳಿಗ್ಗೆ 10-15 ರಿಂದ 10.30 ರೊಳಗೆ ಸಲ್ಲುವ ಶುಭ ವೃಶ್ಚಿಕ ಲಗ್ನದಲ್ಲಿ ನಾದಬ್ರಹ್ಮ ಡಾ. ಹಂಸಲೇಖ ಅವರು ನಾಡ ಹಬ್ಬ ದಸರಾಕ್ಕೆ ಚಾಲನೆ ನೀಡಲಿದ್ದಾರೆ.
ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್, ಪ್ರಹ್ಲಾದ ಜೋಶಿ, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್ ಸಿ ಮಹದೇವಪ್ಪ, ಸಂಸದ ಪ್ರತಾಪ್ ಸಿಂಹ ಸೇರಿದಂತೆ ಮತ್ತಿತರ ಗಣ್ಯರು ಉಪಸ್ಥಿತರಿರುವರು.
ಈ ಸಮಾರಂಭದ ಅಧ್ಯಕ್ಷತೆಯನ್ನು ಶಾಸಕ ಜಿಟಿ ದೇವೇಗೌಡ ಅವರು ವಹಿಸಲಿದ್ದಾರೆ.
ನಾಳೆ ಸಂಜೆ ಅರಮನೆ ಆವರಣದಲ್ಲಿ 7 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ದಸರಾ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಇದೇ ಸಂದರ್ಭದಲ್ಲಿ ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತದೆ. ಬೆಳಿಗ್ಗೆ ದಸರಾ ಚಲನಚಿತ್ರೋತ್ಸವ, ವಸ್ತು ಪ್ರದರ್ಶನ, ಕುಸ್ತಿ ಪಂದ್ಯಾವಳಿ, ಫಲಪುಷ್ಪ ಪ್ರದರ್ಶನ ಉದ್ಘಾಟನಾ ಕಾರ್ಯಕ್ರಮ ನೆರವೇರಲಿದೆ.
ಮುಂಜಾಗ್ರತಾ ಕ್ರಮವಾಗಿ ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.