ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಸ್ಪತ್ರೆಗೆ ತೆರಳಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಭೇಟಿಯಾಗಿ ಆರೋಗ್ಯ ವಿಚಾರಿಸಿದರು. ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅನಾರೋಗ್ಯದ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಜಿ. ಪರಮೇಶ್ವರ್ ಅವರು ಇಂದು ಬನ್ನೇರುಘಟ್ಟ ರಸ್ತೆಯ ಫೋರ್ಟಿಸ್ ಆಸ್ಪತ್ರೆಗೆ ಭೇಟಿ ನೀಡಿ ಬಸವರಾಜ ಬೊಮ್ಮಾಯಿ ಅವರ ಆರೋಗ್ಯ ವಿಚಾರಿಸಿ ಬೇಗ ಗುಣಮುಖರಾಗುವಂತೆ ಹಾರೈಸಿದರು.
ಹಲವು ದಿನಗಳಿಂದ ಮಂಡಿ ನೋವಿನಿಂದ ಬಳಲುತ್ತಿದ್ದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಬನ್ನೇರುಘಟ್ಟ ರಸ್ತೆಯ ಫೋರ್ಟಿಸ್ ಆಸ್ಪತ್ರೆಗೆ ದಾಖಲಾಗಿದ್ದು, ಇತ್ತೀಚೆಗೆ ಮಂಡಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರು. ಯಶಸ್ವಿ ಶಸ್ತ್ರಚಿಕಿತ್ಸೆಯ ಬಳಿಕ ವೈದ್ಯರು ವಿಶ್ರಾಂತಿಗೆ ಸೂಚಿಸಿದ್ದರು. ಇದೇ ವೇಳೆ ಬೊಮ್ಮಾಯಿಗೆ ಹೃದಯ ಸಂಬಂಧ ಶಸ್ತ್ರಚಿಕಿತ್ಸೆಗೂ ಒಳಗಾಗಿದ್ದಾರೆ ಎಂದು ತಿಳಿದು ಬಂದಿದೆ.