ವಿಜಯಪುರ: ನೇಕಾರರಿಗೆ ೧೦ ಹೆಚ್‌ಪಿವರೆಗೆ ಉಚಿತ ವಿದ್ಯುತ್ ಘೋಷಿಸಲಾಗಿದೆ ಎಂದು ಜವಳಿ ಸಚಿವ ಶಿವಾನಂದ ಪಾಟೀಲ್ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ೧೦ ಹೆಚ್‌ಪಿವರೆಗೆ ೨೫೦ ಯೂನಿಟ್ ಉಚಿತ ವಿದ್ಯುತ್ ನೀಡಲು ಆದೇಶ ಹೊರಡಿಸಿದ ಸಿಎಂ ಸಿದ್ದರಾಮಯ್ಯಗೆ ಅಭಿನಂದನೆ ಸಲ್ಲಿಸಿದ್ದಾರೆ. ನೇಕಾರರಿಗೆ ಇದರಿಂದ ದೊಡ್ಡ ಅನುಕೂಲವಾಗಲಿದೆ. ಚುನಾವಣೆಯಲ್ಲಿ ಘೋಷಿಸಿರುವುದನ್ನು ಕಾರ್ಯರೂಪಕ್ಕೆ ತಂದಿದ್ದೇವೆ ಎಂದು ಹೇಳಿದ್ದಾರೆ.
ಸುಮಾರು ೩೫ರಿಂದ ೪೦ ಸಾವಿರ ಕುಟುಂಬಗಳಿಗೆ ಅನುಕೂಲವಾಗಲಿದೆ. ಒಟ್ಟು ೧೨೦ರಿಂದ ೧೪೦ ಕೋಟಿ ರೂ. ವೆಚ್ಚ ತಗುಲುತ್ತದೆ. ನ.೨೦ರಂದು ವಿಜಯಪುರದಲ್ಲಿ ಸಹಕಾರಿ ಸಪ್ತಾಹ ಮಾಡಲಾಗುವುದು. ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರ್ಯಕ್ರಮ ಉದ್ಘಾಟನೆ ಮಾಡಲಿದ್ದಾರೆ ಎಂದು ತಿಳಿಸಿದರು. ಸಹಕಾರಿ ರತ್ನ ಪ್ರಶಸ್ತಿ ವಿಜಯಪುರದಲ್ಲೇ ಪ್ರದಾನ ಮಾಡಲಾಗುವುದು. ಬರಗಾಲ ಹಿನ್ನೆಲೆ ಸಾಂಪ್ರದಾಯಿಕವಾಗಿ ಕಾರ್ಯಕ್ರಮ ನಡೆಯಲಿದೆ. ಕೇಂದ್ರ ಸಚಿವ ಗಡ್ಕರಿಗೂ ಕಾರ್ಯಕ್ರಮಕ್ಕೆ ಆಹ್ವಾನ ನೀಡಲಾಗಿದೆ ಎಂದು ಹೇಳಿದ್ದಾರೆ.