ಗುಂಡ್ಲುಪೇಟೆ: ತಾಲೂಕಿನ ಬಂಡೀಪುರ ಅಭಯಾರಣ್ಯದಲ್ಲಿ ಚಾಲಕನ ಅಜಾಗರೂಕತೆಯಿಂದ ಪಶ್ಚಿಮ ಬಂಗಾಳ ಮೂಲದ ಲಾರಿ ಪಲ್ಪಿ ಘಟನೆಯಲ್ಲಿ ಗಾಯಗೊಂಡವರ ಪೈಕಿ 6 ಮಂದಿ ಹೊರತು ಉಳಿದೆಲ್ಲರೂ ಚೇತರಿಸಿಕೊಂಡಿದ್ದು, ಇವರನ್ನು ಬೆಂಗಳೂರಿಗೆ ಕಳುಹಿಸಲಾಗಿದೆ.
ಬಂಡೀಪುರ ರಾಷ್ಟ್ರೀಯ ಉದ್ಯಾನದ ಮೂಲಕ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ 67 ರಲ್ಲಿ ಅ.24ರ ರಾತ್ರಿ ದಕ್ಷಿಣ ಭಾರತದ ಪ್ರವಾಸದ ಭಾಗವಾಗಿ ತಮಿಳುನಾಡಿನ ಊಟಿಯಿಂದ ಮೈಸೂರಿಗೆ ಪಶ್ಚಿಮ ಬಂಗಾಳದ ಬಸ್ ನಲ್ಲಿ 72 ಮಂದಿ ಪ್ರಯಾಣಿಸುತ್ತಿದ್ದರು. ಆ ವೇಳೆ ಚಾಲಕನ ನಿಯಂತ್ರಣ ತಪ್ಪಿ ಬಸ್ ಹಳ್ಳಕ್ಕೆ ಮುಗಿಚಿತ್ತು. ಘಟನೆಯಲ್ಲಿ 28 ಮಂದಿ ಗಾಯಗೊಂಡಿದ್ದರು. ಇವರಲ್ಲಿ 19 ಮಂದಿಯನ್ನು ಜಿಲ್ಲಾಸ್ಪತ್ರೆಗೆ ಮತ್ತು 9 ಮಂದಿಯನ್ನು ಗುಂಡ್ಲುಪೇಟೆ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಈ ಪೈಕಿ ತೀವ್ರವಾಗಿ ಗಾಯಗೊಂಡಿದ್ದ ಒಬ್ಬರನ್ನು ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿತ್ತು. ಯಾವುದೇ ಗಾಯಗಳಾಗದ 44 ಮಂದಿ ಪಟ್ಟಣದ ಅಂಬೇಡ್ಕರ್ ಭವನದಲ್ಲಿ ತಂಗಿದ್ದರು. ಈಗ ಜಿಲ್ಲಾಸ್ಪತ್ರೆಯಲ್ಲಿರುವ 6 ಮಂದಿ ಹೊರತು ಎಲ್ಲರೂ ಚೇತರಿಸಿಕೊಂಡಿದ್ದು, ಇವರನ್ನು ಬೆಂಗಳೂರಿಗೆ ಕಳುಹಿಸಲಾಗುತ್ತಿದೆ. ಆರೋಗ್ಯ ತಪಾಸಣೆ ನಂತರ ಅಲ್ಲಿಂದ ಅವರ ಸ್ವಸ್ಥಾನ ಪಶ್ಚಿಮ ಬಂಗಾಳಕ್ಕೆ ಕಳುಹಿಸುವ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.