ಹೈದರಾಬಾದ್: ಸ್ಕಿಲ್ ಡೆವಲಪ್ ಮೆಂಟ್ ಹಗರಣದಲ್ಲಿ ಜೈಲು ಪಾಲಾಗಿದ್ದ ಆಂಧ್ರಪ್ರದೇಶದ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಅವರಿಗೆ ಹೈಕೋರ್ಟ್ ಇಂದು ಮಂಗಳವಾರ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಜಾಮೀನಿನ ಅವಧಿ ಮುಂದಿನ ನಾಲ್ಕು ವಾರಗಳವರೆಗೆ ಇರಲಿದೆ.
ವೈದ್ಯಕೀಯ ಚಿಕಿತ್ಸೆಗಾಗಿ ಜಾಮೀನು ಕೋರಿ ನಾಯ್ಡು ಅವರು ಸಲ್ಲಿಸಿದ್ದ ಅರ್ಜಿಯನ್ನು ಸೋಮವಾರ ವಿಚಾರಣೆ ನಡೆಸಿದ್ದ ಹೈಕೋರ್ಟ್ ತೀರ್ಪನ್ನು ಕಾಯ್ದಿರಿಸಿತ್ತು. ನ್ಯಾಯಮೂರ್ತಿ ತಲ್ಲಪ್ರಗಡ ಮಲ್ಲಿಕಾರ್ಜುನ ರಾವ್ ಅವರು ಇಂದು ತೀರ್ಪು ಪ್ರಕಟಿಸಿದ್ದು, ೪ ವಾರಗಳ ಕಾಲ ಜಾಮೀನನ್ನು ಮಂಜೂರು ಮಾಡಿದ್ದಾರೆ. ಕೋರ್ಟ್ ಜಾಮೀನು ನೀಡಿದ ಬಳಿಕ ಈ ಬಗ್ಗೆ ಮಾಧ್ಯಮಗಳಿಗೆ ಹೇಳಿಕೆ ನೀಡಿದ ನಾಯ್ಡು ಪರ ವಕೀಲರು, ಚಂದ್ರಬಾಬು ಅವರ ಆರೋಗ್ಯದ ದೃಷ್ಟಿಯಿಂದ ಜಾಮೀನು ನೀಡಲಾಗಿದೆ. ಕಳೆದ ೫೦ ದಿನಗಳಿಂದ ಜೈಲಿನಲ್ಲಿರುವ ಬಾಬು ಅವರು ವೈದ್ಯಕೀಯ ತಪಾಸಣೆಗೆ ಒಳಗಾಗಲಿದ್ದಾರೆ ಎಂದು ತಿಳಿಸಿದರು.