ರಾಮನಗರ: ನಾಯಿಯಿಂದ ಹರಡುವ ರೇಬಿಸ್ ನಿರ್ಮೂಲನೆಗೆ ರಚಿಸಿರುವ ಜಂಟಿ ಚಾಲನಾ ಸಮಿತಿಯು ಸಂಬಂಧಿಸಿದ ಎಲ್ಲಾ ಇಲಾಖೆಗಳು ಹಾಗೂ ತಜ್ಞರ ಸಲಹೆ ಆಧರಿಸಿ ಪರಿಣಾಮಕಾರಿಯಾದ ಕ್ರಿಯಾಯೋಜನೆ ರೂಪಿಸಿ,ಅನುಷ್ಠಾನಕ್ಕೆ ತರಬೇಕು ಎಂದು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ಶಾಲಿನಿ ರಜನೀಶ್ ಸೂಚನೆ ನೀಡಿದರು.ವಿಕಾಸಸೌಧಧಲ್ಲಿ ಇಂದು ರೇಬಿಸ್ ನಿರ್ಮೂಲನೆಗಾಗಿ ರಚಿಸಿರುವ ಜಂಟಿ ಚಾಲನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ರೇಬಿಸ್ ನಿರ್ಮೂಲನೆಗಾಗಿ ರಾಜ್ಯ ಹಾಗೂ ಜಿಲ್ಲಾ ಮಟ್ಟದಲ್ಲಿ ರಚಿಸುವ ಸಮಿತಿಗಳಲ್ಲಿನ ವಿವಿಧ ಇಲಾಖೆಗಳ ಅಧಿಕಾರಿಗಳು ಪರಸ್ಪರ ಸಮನ್ವಯದೊಂದಿಗೆ ತಮ್ಮ ಕರ್ತವ್ಯ,ಜವಾಬ್ದಾರಿಗಳನ್ನು ಸಮರ್ಥವಾಗಿ ನಿರ್ವಹಿಸಬೇಕು.ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪಶುಸಂಗೋಪನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ, ಬೃಹತ್ ಬೆಂಗಳೂರು ಮಹಾನಗರಪಾಲಿಕೆ, ನಗರಾಭಿವೃದ್ಧಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತರಾಜ್, ಅರಣ್ಯ ಇಲಾಖೆಗಳು, ವನ್ಯಜೀವಿ ಸಂರಕ್ಷಣಾ ಮಂಡಳಿಗಳು ಹಾಗೂ ಸರ್ಕಾರೇತರ ಸಂಸ್ಥೆಗಳ ಸಮನ್ವಯದೊಂದಿಗೆ ನಿಯಂತ್ರಣ ಕ್ರಮಗಳನ್ನು ಜಾರಿಗೊಳಿಸಬೇಕು ಎಂದು ತಿಳಿಸಿದರು. ಕೃಷಿ, ತೋಟಗಾರಿಕೆ, ಪಶುಸಂಗೋಪನೆ, ರಾಜೀವಗಾಂಧಿ ಆರೋಗ್ಯ ವಿಜ್ಞಾನ ವಿವಿಗಳ ತಜ್ಞರು ಕೂಡ ಈ ಕ್ರಿಯಾಯೋಜನೆಯ ಭಾಗವಾಗಿ ತಮ್ಮ ಕರ್ತವ್ಯಗಳನ್ನು ನಿರ್ವಹಿಸಬೇಕು ಎಂದರು.
ಸಭೆಗೆ ಆಹ್ವಾನಿತರಾಗಿ ಆಗಮಿಸಿದ್ದ ಎಂ.ಕೆ.ಸುದರ್ಶನ ಮಾತನಾಡಿ, ಮನೆ ಹಾಗೂ ಹಾಸ್ಟೇಲುಗಳಲ್ಲಿ ಇಲಿಗಳ ಮೂತ್ರವಿಸರ್ಜನೆಯಿಂದ ವಾತಾವರಣ,ನೀರು ಕಲುಷಿತವಾಗಿ ರೋಗ ಹರಡುವ ಸಾಧ್ಯತೆಗಳಿರುತ್ತವೆ.ಪಶುವೈದ್ಯಕೀಯ ಪ್ರಯೋಗಾಲಯಗಳ ಸಂಖ್ಯೆ ಹೆಚ್ಚಿಸಬೇಕು.ಶಾಲಾ ಮಕ್ಕಳಿಗೆ ಹೆಚ್ಚಿನ ಪ್ರಮಾಣದಲ್ಲಿ ತಿಳುವಳಿಕೆ ನೀಡುವುದು ಅಗತ್ಯವಾಗಿದೆ ಎಂದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಟಿ.ಕೆ.ಅನಿಲಕುಮಾರ್,ಪಶುಸಂಗೋಪನೆ ಹಾಗೂ ಮೀನುಗಾರಿಕೆ ಇಲಾಖೆಯ ಕಾರ್ಯದರ್ಶಿ ಸಲ್ಮಾ ಕೆ.ಫಾಹಿಮ್,ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತ ಡಿ.ರಂದೀಪ್,ಬಿಬಿಎಂಪಿ ಆಯುಕ್ತ ಡಾ.ಕೆ.ವಿ.ತ್ರಿಲೋಕಚಂದ್ರ ಸೇರಿದಂತೆ ಸರ್ಕಾರದ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು, ವಿಶ್ವವಿದ್ಯಾಲಯಗಳ ತಜ್ಞರು ಸಭೆಯಲ್ಲಿ ಉಪಸ್ಥಿತರಿದ್ದರು.