ಹುಬ್ಬಳ್ಳಿ: ಹೊಸ ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್ ವಿತರಣೆ ಪ್ರಕ್ರಿಯೆ ಶನಿವಾರದಿಂದ ಆರಂಭಿಸಲಾಗಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್ ಗೆ ಈವರೆಗೆ ೨ ಲಕ್ಷ ೯೦ ಸಾವಿರ ಅರ್ಜಿಗಳು ಬಂದಿವೆ. ಅರ್ಜಿ ಪರಿಷ್ಕರಣೆ ಮಾಡಿ ಅರ್ಹರಿಗೆ ಕಾರ್ಡ್ ವಿತರಣೆ ಮಾಡಲಾಗುವುದು. ಈಗಾಗಲೇ ಅರ್ಜಿ ಹಾಕಿಕೊಂಡು ಕಾಯುತ್ತಿರುವ ಜನರಿಗೆ ಆದಷ್ಟು ಬೇಗ ಕಾರ್ಡ್ ವಿತರಣೆ ಮಾಡುವುದು ನಮ್ಮ ಆದ್ಯತೆ ಎಂದು ಹೇಳಿದರು.
ಅನರ್ಹರು ಬಿಪಿಎಲ್ ಕಾರ್ಡ್ ಹೊಂದಿರುವವರ ಕಾರ್ಡ್ ರದ್ದತಿ ಪ್ರಕ್ರಿಯೆ ನಡೆಯುತ್ತಿದೆ. ಅದೇ ರೀತಿ ಪಡಿತರ ಅಕ್ಕಿ ಕಾಳಸಂತೆಯಲ್ಲಿ ಮಾರಾಟ ಜಾಲಕ್ಕೆ ಕಡಿವಾಣ ಹಾಕಲು ಅಧಿಕಾರಿಗಳ ತಂಡ ಕ್ರಮ ಜರುಗಿಸುತ್ತಿದೆ. ಪೂರ್ಣ ಪ್ರಮಾಣದಲ್ಲಿ ನಿಯಂತ್ರಣಕ್ಕೆ ಸ್ವಲ್ಪ ಸಮಯಾವಕಾಶ ತೆಗೆದುಕೊಳ್ಳುತ್ತದೆ ಎಂದರು.