ಶಿವಮೊಗ್ಗ: ಝಿಕಾ ಎಂಬುದು ಒಂದು ವೈರಸ್ ಸೋಂಕು. ಡೆಂಗೀ, ಚಿಕೂನ್‌ಗುನ್ಯ ರೋಗ ಹರಡುವ ಈಡಿಸ್ ಜಾತಿಯ ಸೊಳ್ಳೆಗಳು ಝಿಕಾ ವೈರಸ್ ಸೋಂಕನ್ನು ಸಹ ಹರಡುತ್ತವೆ. ಈ ರೋಗದ ಬಗ್ಗೆ ಭಯ ಬೇಡ. ಆದರೆ ಎಚ್ಚರಿಕೆಯಿಂದ ಇರಬೇಕೆಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ತಿಳಿದ್ದಾರೆ.
ಜ್ವರ, ತಲೆನೋವು, ಕಣ್ಣು ಕೆಂಪಾಗುವಿಕೆ, ಗಂಧೆಗಳು(ದದ್ದುಗಳು), ಕೀಲು ಮತ್ತು ಸ್ನಾಯುಗಳಲ್ಲಿ ನೋವು ಹಾಗೂ ಇತರೆ ಲಕ್ಷಣಗಳು ಕಾಣಿಸಿಕೊಳ್ಳುತ್ತದೆ. ಬಹುತೇಕ ಝಿಕಾ ಸೋಂಕಿತರಿಗೆ ರೋಗ ಲಕ್ಷಣಗಳು ಕಂಡುಬರುವುದಿಲ್ಲ. ಉಳಿದಂತೆ ರೋಗಲಕ್ಷಣಗಳ ಸೌಮ್ಯ ಹಾಗೂ ಸಾಧಾರಣ ಸ್ವರೂಪವಾಗಿದ್ದು, ೨ ರಿಂದ ೭ ದಿನಗಳವರೆಗೆ ಇರುತ್ತದೆ.
ಗರ್ಭಾವಸ್ಥೆಯಲ್ಲಿ ಝಿಕಾ ಸೋಂಕು ಕಾಣಿಸಿಕೊಂಡಲ್ಲಿ ಜನಿಸಿದ ಶಿಶುವಿನ ತಲೆಯ ಗಾತ್ರದಲ್ಲಿ ಕಡಿಮೆ(ಮೈಕ್ರೊಸೆಫಾಲಿ) ಬೆಳವಣಿಗೆ ದೋಷ ಕಂಡು ಬರಬಹುದು. ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಝಿಕಾ ವೈರಸ್ ಪರೀಕ್ಷೆ ಹಾಗೂ ಚಿಕಿತ್ಸೆ ಸಂಪೂರ್ಣ ಉಚಿತವಾಗಿದ್ದು, ಜಿಕಾ ವೈರಸ್ ಸೋಂಕಿನ ಬಗ್ಗೆ ಭಯಬೇಡ, ಎಚ್ಚರವಿರಲಿ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಝಿಕಾ: ಭಯಬೇಡ, ಎಚ್ಚರವಿರಲಿ
ಶಿವಮೊಗ್ಗ ಜಿಲ್ಲೆಯಲ್ಲಿ ಯಾವುದೇ ಝಿಕಾ ವೈರಸ್ ಪ್ರಕರಣಗಳು ವರದಿಯಾಗಿರುವುದಿಲ್ಲ. ಸಾರ್ವಜನಿಕರು ಆತಂಕಪಡುವ ಅವಶ್ಯಕತೆಯಿಲ್ಲ. ಆದರೆ ಜಾಗೃತರಾಗಿರಬೇಕು. ಈ ಖಾಯಿಲೆಯು ಡೆಂಗೀ ಹರಡುವ ಈಡೀಸ್ ಈಜಿಪ್ಟೈ ಸೊಳ್ಳೆಗಳಿಂದ ಹರಡುವುದರಿಂದ ಸೊಳ್ಳೆಗಳ ನಿಯಂತ್ರಣದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿಯೊಂದಿಗೆ ಸಹಕರಿಸಬೇಕು. ಝಿಕಾ ರೋಗಲಕ್ಷಣಗಳಾದ ಜ್ವರ, ತಲೆನೋವು, ಕಣ್ಣು ಕೆಂಪಾಗುವಿಕೆ, ಗಂಧೆಗಳು(ದದ್ದುಗಳು), ಕೀಲು ಮತ್ತು ಸ್ನಾಯುಗಳಲ್ಲಿ ನೋವು ಕಂಡುಬಂದರೆ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರ ಸಲಹೆ ಮತ್ತು ಚಿಕಿತ್ಸೆ ಪಡೆಯಬೇಕು.
-ಡಾ.ಗುಡದಪ್ಪ ಕಸಬಿ, ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ