ಧಾರವಾಡ : ಸಾರ್ವಜನಿಕರಿಗೆ ಉತ್ತಮ ಆಡಳಿತ ವ್ಯವಸ್ಥೆ ಮತ್ತು ಅವರಲ್ಲಿ ರಾಜ್ಯ ಸರಕಾರದ ಸೌಲಭ್ಯಗಳ ಅರಿವು ಮೂಡಿಸಿ, ಯೋಜನೆಗಳನ್ನು ತಲುಪಿಸಲು ಜನತಾ ದರ್ಶನ ಕಾರ್ಯಕ್ರಮ ಅತ್ಯಂತ ಮಹತ್ವದ ಮಾಧ್ಯಮವಾಗಿದೆ. ಇದರಿಂದ ಸರಕಾರ ಹೆಚ್ಚು ಹೆಚ್ಚು ಜನಪರವಾಗಿ ಕೆಲಸ ಮಾಡಲು ಅನುಕೂಲವಾಗುತ್ತಿದೆ ಎಂದು ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಹೇಳಿದರು.
ಇಂದು ಸೋಮವಾರ ಕೆಸಿಡಿ ಆವರಣದ ಸೃಜನಾ ರಂಗಮಂದಿರದಲ್ಲಿ ಜಿಲ್ಲಾಡಳಿತ ಆಯೋಜಿಸಿದ್ದ ಜನತಾ ದರ್ಶನ ಕಾರ್ಯಕ್ರಮಕ್ಕೆ ಸಸಿಗೆ ನೀರುಣಿಸುವ ಮೂಲಕ ಜನತಾ ದರ್ಶನವನ್ನು ಉದ್ಘಾಟಿಸಿ, ಮಾತನಾಡಿದರು ಮುಖ್ಯಮಂತ್ರಿಗಳ ಸೂಚನೆಯಂತೆ ಜರುಗುತ್ತಿರುವ ಜನತಾ ದರ್ಶನವು ನಮ್ಮ ಜಿಲ್ಲೆಯೂ ಸೇರಿದಂತೆ ಎಲ್ಲ ಜಿಲ್ಲೆಗಳಲ್ಲಿಯೂ ಅತ್ಯಂತ ಯಶಸ್ವಿಯಾಗಿ ನಡೆಯುತ್ತಿದೆ.
ಕಳೆದ ತಿಂಗಳ ಜಿಲ್ಲಾಮಟ್ಟದ ಜನತಾ ದರ್ಶನದಲ್ಲಿ ಸ್ವೀಕರಿಸಿದ್ದ ಸಾರ್ವಜನಿಕರ ಅಹವಾಲುಗಳಲ್ಲಿ ಶೇ.೯೦ ರಷ್ಟು ಅರ್ಜಿಗಳನ್ನು ಈಗಾಗಲೇ ನಿಯಮಾನುಸಾರ ಪರಿಶೀಲಿಸಿ, ವಿಲೇವಾರಿ ಮಾಡಲಾಗಿದೆ. ಸಂಬಂಧಿಸಿದ ಅರ್ಜಿದಾರರಿಗೆ ಎಸ್.ಎಂ.ಎಸ್. ಮೂಲಕ ಮಾಹಿತಿ ಹಾಗೂ ಸದರಿ ಅರ್ಜಿಗಳಿಗೆ ಹಿಂಬರಹ ನೀಡಲಾಗಿದೆ. ಉಳಿದ ಅರ್ಜಿಗಳನ್ನು ಇಲಾಖೆ ಹಿರಿಯ ಅಧಿಕಾರಿಗಳು ಪರಿಶೀಲಿಸುತ್ತಿದ್ದು, ಅವುಗಳನ್ನು ಸಹ ಕಾಲಮಿತಿಯಲ್ಲಿ ವಿಲೇವಾರಿ ಮಾಡಲಾಗುವುದು ಎಂದು ಸಚಿವರು ತಿಳಿಸಿದರು.
ಜನತಾ ದರ್ಶನ ಕಾರ್ಯಕ್ರಮದಿಂದ ಬಡವರ ಸಮಸ್ಯೆ, ನೋವುಗಳನ್ನು ಹತ್ತಿರದಿಂದ ತಿಳಿಯಲು ಜನಪ್ರತಿನಿಧಿಗಳಿಗೆ ಮತ್ತು ಅಧಿಕಾರಿಗಳಿಗೆ ಅವಕಾಶವಾಗುತ್ತದೆ. ಸಮಸ್ಯೆ ಆಲಿಸಿದ ಅಧಿಕಾರಿಗಳು ಸಂಯಮದಿಂದ ಪರಿಶೀಲಿಸಿ, ಪರಿಹಾರ ಕ್ರಮ ಕೈಗೊಳ್ಳುತ್ತಾರೆ ಎಂದು ಸಚಿವರು ಹೇಳಿದರು.
ಜನತಾ ದರ್ಶನದಲ್ಲಿ ಸ್ವೀಕರಿಸಿರುವ ಅರ್ಜಿಗಳನ್ನು ಕಾಲಮಿತಿಯಲ್ಲಿ ಪರಿಹರಿಸುತ್ತೇವೆ. ಅರ್ಜಿದಾರರು ಅವಸರ ಮಾಡದೇ, ತಾಳ್ಮೆಯಿಂದ ಇರಬೇಕು. ಅರ್ಜಿಗಳ ಕಾನೂನಾತ್ಮಕತೆಯನ್ನು ಪರಿಶೀಲನೆ ಮಾಡಲಾಗುತ್ತದೆ. ಎಲ್ಲ ಸ್ವೀಕೃತ ಅಹವಾಲುಗಳನ್ನು ನಿಯಮಾನುಸಾರ ಇತ್ಯರ್ಥ ಪಡಿಸಲಾಗುತ್ತದೆ ಎಂದು ಸಚಿವ ಸಂತೋಷ ಲಾಡ್ ಅವರು ತಿಳಿಸಿದರು. ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಜನತಾ ದರ್ಶನ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ., ಅವರು ಸ್ವಾಗತಿಸಿದರು.
