ಚಿತ್ರದುರ್ಗ: ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಇರುವುದರಿಂದ ಬರುವ ದಿನಗಳಲ್ಲಿ ಕುಡಿಯುವ ನೀರಿಗೆ ತೊಂದರೆ ಉಂಟಾಗಬಹುದಾದ ಸಮಸ್ಯಾತ್ಮಕ ಗ್ರಾಮಗಳನ್ನು ಗುರುತಿಸಿ, ಮುಂದಿನ ಆರು ತಿಂಗಳವರೆಗೆ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸದಂತೆ ಕ್ರಿಯಾ ಯೋಜನೆ ತಯಾರಿಸಿ ಅಗತ್ಯ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಬರದ ಹಿನ್ನಲೆಯಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರು, ಮೇವು, ಕೃಷಿ ಕೈಗಾರಿಕೆಗಳಿಗೆ ನೀರು, ಬೆಳೆ ಹಾನಿ, ಜನರ ಉದ್ಯೋಗ ಸ್ಥಿತಿ, ಬರ ಪರಿಹಾರ ವಿತರಣೆ ಮುಂತಾದ ಬರ ನಿರ್ವಹಣೆ ಕುರಿತು ಹಮ್ಮಿಕೊಂಡಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಕೊರತೆಯಾಗದಂತೆ ಗ್ರಾಮ ಪಂಚಾಯಿತಿವಾರು ಪ್ರಸ್ತುತ ಕುಡಿಯುವ ನೀರಿನ ಸಮಸ್ಯೆಯಾತ್ಮಕ ಗ್ರಾಮಗಳು, ಜನವರಿ ಹಾಗೂ ಫೆಬ್ರವರಿ, ಮಾರ್ಚ್-ಏಪ್ರಿಲ್ ಮಾಹೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗಬಹುದಾಂತಹ ಗ್ರಾಮಗಳನ್ನು ಗುರುತಿಸಿ, ಮುಂಜಾಗ್ರತಾ ಕ್ರಮವಾಗಿ ಬರ ಪರಿಹಾರ ಕಾರ್ಯಕ್ರಮಗಳನ್ನು ಕೈಗೊಳ್ಳಬೇಕು ಎಂದು ತಾಕೀತು ಮಾಡಿದರು.
ಸದ್ಯಕ್ಕೆ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇಲ್ಲ. ಮಳೆಯ ಕೊರತೆ ಕಾರಣ ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡು ಬರುವ ಸಾಧ್ಯತೆ ಇರುವುದರಿಂದ ಮುಂಜಾಗ್ರತಾ ಕ್ರಮವಾಗಿ ಯೋಜನೆ ರೂಪಿಸಬೇಕು. ತೀವ್ರ ಸಮಸ್ಯೆ ಉಂಟಾದಾಗ ಸಿದ್ಧತೆ ಮಾಡಿಕೊಳ್ಳಲು ಸಮಯ ವ್ಯರ್ಥ ಮಾಡುವುದು ಸರಿಯಲ್ಲ, ಅದರ ಬದಲಿಗೆ ಮುಂಜಾಗ್ರತಾ ಕ್ರಮವಾಗಿ ಈಗಲೇ ಎಲ್ಲ ಅಗತ್ಯ ಸಿದ್ಧತೆಗಳನ್ನು ಮಾಡಿಟ್ಟುಕೊಳ್ಳಬೇಕು. ಕುಡಿಯುವ ನೀರಿನ ಸಮಸ್ಯೆ ಕಂಡು ಬಂದ ತಕ್ಷಣ ಕೊಳವೆಬಾವಿ ಅವಶ್ಯಕತೆ ಇದ್ದರೆ ತಕ್ಷಣ ಕೊರೆಸಬೇಕು. ಎಲ್ಲೆಲ್ಲಿ ಕೊಳವೆಬಾಯಿ ಕೊರೆಸಬೇಕು ಎಂಬ ಮಾಹಿತಿ ತಹಶೀಲ್ದಾರ್‍ಗಳ ಬಳಿ ಇರಬೇಕು. ಸಮಸ್ಯಾತ್ಮಕ ಗ್ರಾಮಗಳಲ್ಲಿ ಕೊಳವೆ ಬಾವಿ ಕೊರೆಸಲು ಈಗಲೇ ಪಾಯಿಂಟ್ ಮಾಡಿಕೊಳ್ಳಬೇಕು.
ಜನಪ್ರತಿನಿಧಿಗಳೊಂದಿಗೆ ಸಮಾಲೋಚಿಸಿ, ಜಲಜೀವನ್ ಮಿಷನ್, ಗ್ರಾಮ ಪಂಚಾಯಿತಿ ೧೫ನೇ ಹಣಕಾಸು ಯೋಜನೆಯಡಿ ಅನುದಾನ ಬಳಸಿಕೊಂಡು ಕೊಳವೆ ಬಾವಿ ಕೊರೆಸಲು ವ್ಯವಸ್ಥೆ ಮಾಡಿಕೊಳ್ಳಬೇಕು. ಜಿಲ್ಲೆಯ ಜನ-ಜಾನುವಾರುಗಳಿಗೆ ನೀರಿನ ಸಮಸ್ಯೆಯಾಗದಂತೆ ಕ್ರಮವಹಿಸಬೇಕು. ಬರ ಹಿನ್ನಲೆಯಲ್ಲಿ ಕುಡಿಯುವ ನೀರಿನ ಪೂರೈಕೆಗೆ ಆದ್ಯತೆ ನೀಡಬೇಕು ಎಂದು ಸೂಚನೆ ನೀಡಿದರು.
ಆರ್.ಓ ಘಟಕ ಸರಿಪಡಿಸಿ: ಜಿಲ್ಲೆಯಲ್ಲಿ ದುರಸ್ಥಿಯಲ್ಲಿರುವ ಎಲ್ಲಾ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸರಿಪಡಿಸಬೇಕು ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ ಅವರು ಗ್ರಾಮೀಣ ಕುಡಿಯುವ ನೀರು ಸರಬರಾಜು ಅಧಿಕಾರಿಗಳಿಗೆ, ತಾ.ಪಂ ಇಒ ಹಾಗೂ ಸ್ಥಳೀಯ ಸಂಸ್ಥೆಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.