
ಮಂಡ್ಯ: ಮಕ್ಕಳಿಗೆ ಸರ್ಕಾರ ಕಡ್ಡಾಯ ಉಚಿತ ಶಿಕ್ಷಣ ಜಾರಿಗೆ ತರಲಾಗಿದೆ. ಪ್ರತಿಯೊಬ್ಬ ಮಗುವಿಗೆ ಶಿಕ್ಷಣ ನೀಡುವುದರಿಂದ ಬಾಲ ಕಾರ್ಮಿಕ ಪದ್ಧತಿ ವಿರೋಧಿ ಚಟುವಟಿಕೆಯನ್ನು ತಡೆಗಟ್ಟಬಹುದು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್ ಅವರು ತಿಳಿಸಿದರು.
ಅವರು ಇಂದು ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೂಸೈಟಿ(ರಿ) ವಕೀಲರ ಸಂಘ, ಡಾನ್ ಬಾಸ್ಕೋ ಇವರ ಸಂಯುಕ್ತಾಶ್ರಯದಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನವನ್ನು ಕರ್ನಾಟಕ ಸಂಘದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಬಾಲಕಾರ್ಮಿಕರನ್ನಾ ಹೆಚ್ಚಾಗಿ ಕೃಷಿ ಚಟುವಟಿಕೆಗಳಲ್ಲಿ, ಕಾರ್ಖಾನೆ, ಹೋಟೆಲ್ ಈಗೆ ಹಲವು ಕ್ಷೇತ್ರಗಳಲ್ಲಿ ತೊಡಗಿಸಿರುವುದನ್ನು ನಾವು ಕಾಣಬಹುದು. ಅಂತಹ ಬಾಲ ಕಾರ್ಮಿಕರನ್ನು ಗುರುತಿಸಿ ಸರಿಯಾದ ರೀತಿಯಲ್ಲಿ ಶಿಕ್ಷಣ ಸೌಲಭ್ಯವನ್ನು ಒದಗಿಸುವುದು ನಮ್ಮ ಆದ್ಯ ಕರ್ತವ್ಯ ಎಂದು ಅವರು ಹೇಳಿದರು.
ಕಾನೂನಿನ ಸ್ವರೂಪ ಮತ್ತು ಕಾನೂನಿನ ಚೌಕಟ್ಟಿನಲ್ಲಿ ಅದಕ್ಕೆ ಸಂರಕ್ಷತೆ ತರುವ ನಿಟ್ಟಿನಲ್ಲಿ ನಮ್ಮ ಭಾರತದ ಸಂವಿಧಾನದ ೨೪ ನೇ ವಿಧಿ ಅನ್ವಯ ಬಾಲಕಾರ್ಮಿಕ ಪದ್ಧತಿಯನ್ನು ಸಂಪೂರ್ಣವಾಗಿ ನಿಷೇಧಿಸಿದೆ ಅದನ್ನು ಎಲ್ಲರೂ ಅನುಸರಿಸಬೇಕು ಎಂದರು.
ದೇಶದಾದ್ಯಂತ ಅನೇಕ ಮಕ್ಕಳು ಬಾಲ ಕಾರ್ಮಿಕರಾಗಿಯೇ ಉಳಿದಿದ್ದಾರೆ ಹಾಗೇ ಅನೇಕ ಮಕ್ಕಳು ಪ್ರಾಣವನ್ನು ಕಳೆದುಕೊಂಡಿದ್ದಾರೆ ಇದನ್ನು ತಡೆಗಟ್ಟಲು ಎಲ್ಲರೂ ಕೈ ಜೋಡಿಸಬೇಕು ಎಂದರು.
ಅಪಾಯಕಾರಿ ಕೆಲಸಗಳಲ್ಲಿ ೧೮ ವರ್ಷಕ್ಕಿಂತ ಕೆಳಪಟ್ಟ ಮಕ್ಕಳನ್ನು ಬಳಸಿಕೊಳ್ಳಬಾರದು ಆ ರೀತಿ ಏನಾದರೂ ಬಳಸಿಕೊಂಡಿದ್ದರೆ ಕಾನೂನು ರೀತಿಯ ಕ್ರಮವನ್ನು ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್ ರವರು ಮಾತನಾಡಿದರು.
ಡಾನ್ ಬಾಸ್ಕೋ ಸೇರಿದಂತೆ ಅನೇಕ ಇನ್ಸ್ಟಿಟ್ಯೂಟ್ ಗಳ ಸಹಾಯದಿಂದ ಬಾಲಕಾರ್ಮಿಕ ಪದ್ಧತಿಗೆ ಒಳಪಟ್ಟ ಮಕ್ಕಳ ರಕ್ಷಣೆ ಮಾಡಲಾಗಿದೆ. ಬಾಲಕಾರ್ಮಿಕ ಪದ್ಧತಿಗೆ ಒಳಪಟ್ಟ ಮಕ್ಕಳು ಕಂಡುಬಂದರೆ ಅಧಿಕಾರಿಗಳ ಗಮನಕ್ಕೆ ತಂದು ಸಂಬಂಧ ಪಟ್ಟ ವ್ಯಕ್ತಿಗೆ ಕಾನೂನು ರೀತ್ಯಾ ಕಠಿಣ ಕ್ರಮವನ್ನು ಜರುಗಿಸಲಾಗುವುದು ಎಂದು ಹೇಳಿದರು.
ಈ ಸಂದರ್ಭದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿಯಾದ ವಾಣಿ ಎ. ಶೆಟ್ಟಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಟಿ.ಎನ್ ಧನಂಜಯ, ನಗರ ಸಭಾ ಆಯುಕ್ತರಾದ ಆರ್. ಮಂಜುನಾಥ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ನಾಗರಾಜು, ಡಾನ್ ಬಾಸ್ಕೋ ನಿರ್ದೇಶಕ ಫಾದರ್ ಸಜೀಜಾರ್ಜ್, ಬಡ್ರ್ಸ್ ಸಂಸ್ಥೆಯ ನಿರ್ದೇಶಕ ವೆಂಕಟೇಶ್ ಹಾಗೂ ಇನ್ನಿತರರಿದ್ದರು.