ಚಿತ್ರದುರ್ಗ: ಮಕ್ಕಳ ರಕ್ಷಣೆ, ಬೆಳವಣಿಗೆ ವಿಷಯದಲ್ಲಿ ಉತ್ತಮ ವಾತಾವರಣ ನಿರ್ಮಾಣ ಮಾಡುವುದು ಬಹಳ ಮುಖ್ಯವಾಗಿದ್ದು, ಈ ನಿಟ್ಟಿನಲ್ಲಿ ತಹಶೀಲ್ದಾರರು ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಹೆಚ್ಚಿನ ಜವಾಬ್ದಾರಿಯಿಂದ ತಾಲ್ಲೂಕು ಹಂತದಲ್ಲಿ ಮಕ್ಕಳ ರಕ್ಷಣೆಗೆ ಕ್ರಮವಹಿಸಬೇಕು ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ.ಕೆ.ಟಿ.ತಿಪ್ಪೇಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾ ಪಂಚಾಯಿತಿ ಮಿನಿ ಸಭಾಂಗಣದಲ್ಲಿ ಶನಿವಾರ ತಾಲ್ಲೂಕು ಹಂತದ ಮಕ್ಕಳ ಹಕ್ಕುಗಳು ಹಾಗೂ ರಕ್ಷಣಾ ವ್ಯವಸ್ಥೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. ತಹಶೀಲ್ದಾರ್ ಅಧ್ಯಕ್ಷತೆಯಲ್ಲಿ ತಾಲ್ಲೂಕು ಹಂತದಲ್ಲಿ ಮಕ್ಕಳ ಹಕ್ಕುಗಳು ಹಾಗೂ ರಕ್ಷಣಾ ವ್ಯವಸ್ಥೆಗೆ ಸಂಬಂಧಪಟ್ಟಂತೆ ಬಾಲ್ಯವಿವಾಹ ನಿಷೇಧ ಸಮಿತಿ, ಮಕ್ಕಳ ರಕ್ಷಣಾ ಸಮಿತಿ ಸೇರಿದಂತೆ ಹಲವಾರು ಸಮಿತಿಗಳಿದ್ದು, ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಸಮಿತಿಗಳ ಸದಸ್ಯ ಕಾರ್ಯದರ್ಶಿಗಳಾಗಿರುತ್ತಾರೆ. ಹಾಗಾಗಿ ತಾಲ್ಲೂಕು ಶಿಶುಅಭಿವೃದ್ಧಿ ಯೋಜನಾಧಿಕಾರಿಗಳು ಹೆಚ್ಚಿನ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಸೂಚನೆ ನೀಡಿದ ಅವರು, ತಹಶೀಲ್ದಾರ್ ನೇತೃತ್ವದಲ್ಲಿ ವಿವಿಧ ಇಲಾಖೆಗಳು ಸಮನ್ವಯದೊಂದಿಗೆ ಕಾರ್ಯನಿರ್ವಹಿಸಬೇಕು ಎಂದು ತಾಕೀತು ಮಾಡಿದರು. ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಮಕ್ಕಳ ಕೇಂದ್ರಿತ ಕಾಯ್ದೆ-ಕಾನೂನು, ಕಾರ್ಯಕ್ರಮಗಳ ಮೇಲ್ಚಿಚಾರಣೆ ನಡೆಸುವ ಜವಾಬ್ದಾರಿ ಹೊಂದಿದೆ ಎಂದು ತಿಳಿಸಿದರು.
ತಹಶೀಲ್ದಾರ್ ಗೈರಿಗೆ ಸದಸ್ಯರ ಅಸಮಾಧಾನ: ತಾಲ್ಲೂಕು ಹಂತದ ಮಕ್ಕಳ ಹಕ್ಕುಗಳ ಹಾಗೂ ರಕ್ಷಣಾ ವ್ಯವಸ್ಥೆಗಳ ಪ್ರಗತಿ ಪರಿಶೀಲನಾ ಸಭೆಗೆ ಜಿಲ್ಲೆಯ ಯಾವುದೇ ತಾಲ್ಲೂಕಿನ ತಹಶೀಲ್ದಾರರು ಸಭೆಗೆ ಬಾರದೇ ಇರುವುದರ ಬಗ್ಗೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದರು.
ಮಕ್ಕಳ ಸಹಾಯವಾಣಿ ಕಡ್ಡಾಯವಾಗಿ ಪ್ರಚುರಪಡಿಸಿ: ಸರ್ಕಾರದಿಂದ ಮಕ್ಕಳ ರಕ್ಷಣೆಗಾಗಿ ಸಹಾಯವಾಣಿ ಸಂಖ್ಯೆ 1098 ಹಾಗೂ 112 ಆರಂಭಿಸಲಾಗಿದ್ದು, ಶಾಲೆ, ಅಂಗನವಾಡಿ, ವಸತಿ ನಿಲಯ, ಸರ್ಕಾರಿ ಕಟ್ಟಡಗಳು, ಬಸ್‍ನಿಲ್ದಾಣಗಳಲ್ಲಿಯೂ ಸಹಾಯವಾಣಿ ಸಂಖ್ಯೆಯನ್ನು ಕಡ್ಡಾಯವಾಗಿ ಪ್ರಚುರ ಪಡಿಸಬೇಕು ಎಂದು ಆಯೋಗದ ಸದಸ್ಯರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿಯೂ ಮಹಿಳೆ ಮತ್ತು ಮಕ್ಕಳ ಕಾವಲು ಸಮಿತಿ, ಶಿಕ್ಷಣ ಕಾರ್ಯಪಡೆ ಸಮಿತಿ ಕಡ್ಡಾಯವಾಗಿ ರಚನೆ ಮಾಡಬೇಕು ಎಂದು ತಿಳಿಸಿದರು.