ಚಿತ್ರದುರ್ಗ : ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣಾ ಕಾರ್ಯ ನಡೆದಿದ್ದು, 17 ವರ್ಷ ಹಾಗೂ 18 ವರ್ಷ ತುಂಬಿರುವ ಎಲ್ಲ ಯುವ ಮತದಾರರನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ಹಮ್ಮಿಕೊಳ್ಳಲಾಗುವ ಕಾರ್ಯಗಳ ಕುರಿತು ಕ್ರಿಯಾ ಯೋಜನೆ ರೂಪಿಸಿ ಸಲ್ಲಿಸಬೇಕು ಎಂದು ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ ಕಾರ್ಯದರ್ಶಿ ಹಾಗೂ ಚಿತ್ರದುರ್ಗ ಜಿಲ್ಲೆಗೆ ಮತದಾರರ ಪಟ್ಟಿ ವೀಕ್ಷಕರಾಗಿರುವ ಡಾ. ಶಮ್ಲಾ ಇಕ್ಬಾಲ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಮತದಾರರ ಪಟ್ಟಿ ಸಂಕ್ಷಿಪ್ತ ಪರಿಷ್ಕರಣೆ ಕಾರ್ಯಕ್ರಮ ಸಂಬಂಧ ಎಲ್ಲ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಹಾಗೂ ವಿವಿಧ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಜರುಗಿದ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ರಮದ ವೇಳಾಪಟ್ಟಿಯಂತೆ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ, ತಿದ್ದುಪಡಿ, ಸ್ಥಳಾಂತರ ಸೇರಿದಂತೆ ವಿವಿಧ ಹಕ್ಕು ಮತ್ತು ಆಕ್ಷೇಪಣೆ ಸಂಬಂಧದ ಅರ್ಜಿ ನಮೂನೆ ಸಲ್ಲಿಸಲು ಡಿ. 09 ರವರೆಗೂ ಕಾಲಾವಕಾಶ ನೀಡಲಾಗಿದೆ. ಕಳೆದ ಜ. 01 ರಿಂದ ಅ.27 ರವರೆಗಿನ ಅಂಕಿ ಅಂಶದ ಪ್ರಕಾರ ಜಿಲ್ಲೆಯಲ್ಲಿ ಒಟ್ಟು 46906 ಯುವ ಮತದಾರರನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲಾಗಿದೆ. ಅ. 27 ರಿಂದ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ರಮ ಪ್ರಾರಂಭಗೊಂಡಿದ್ದು, 2006 ರ ಡಿ. 31 ರವರೆಗೆ ಜನಿಸಿದವರು ಮತದಾರರ ಪಟ್ಟಿಗೆ ಹೆಸರು ಸೇರಿಸಲು ಅರ್ಜಿ ಸಲ್ಲಿಸಲು ಅರ್ಹರಿದ್ದು, ಅಧಿಕಾರಿಗಳು ಕೇವಲ 18 ವರ್ಷ ಪೂರ್ಣಗೊಂಡವರಿಗೆ ಆದ್ಯತೆ ನೀಡುವುದರ ಜೊತೆ ಜೊತೆಗೆ 17 ವರ್ಷ ಪೂರ್ಣಗೊಂಡವರನ್ನೂ ಕೂಡ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೊಳಿಸಲು ನಮೂನೆ-06 ಅರ್ಜಿ ಪಡೆದು, ಪ್ರಕ್ರಿಯೆ ಪ್ರಾರಂಭಿಸಬೇಕು.
ಇದಕ್ಕಾಗಿ ಜಿಲ್ಲೆಯ ಎಲ್ಲ ಕಾಲೇಜುಗಳು, ಐಟಿಐ, ಪಾಲಿಟೆಕ್ನಿಕ್, ಇಂಜಿನಿಯರಿಂಗ್, ಪದವಿ, ಸ್ನಾತಕೋತ್ತರ ಪದವಿ ಸೇರಿದಂತೆ ಎಲ್ಲ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಬೇಕು, ಹಾಗೂ ಆಯಾ ಕಾಲೇಜುಗಳ ಹಂತದಲ್ಲಿಯೇ ಅರ್ಜಿಗಳನ್ನು ವಿದ್ಯಾರ್ಥಿಗಳಿಂದ ಪಡೆಯಲು ಕ್ರಮ ಕೈಗೊಳ್ಳಬೇಕು. ಜಿಲ್ಲೆಗೆ ಪ್ರಸಕ್ತ ಪರಿಷ್ಕರಣಾ ಅವಧಿಯಲ್ಲಿ 22 ಸಾವಿರ ಯುವ ಮತದಾರರನ್ನು ಸೇರ್ಪಡೆಗೊಳಿಸುವ ಗುರಿ ಇದ್ದು, ಇದನ್ನು ಸಾಧಿಸಲು ಆಯಾ ತಾಲ್ಲೂಕು ಪಂಚಾಯತಿ ಕಾರ್ಯ ನಿರ್ವಾಹಕ ಅಧಿಕಾರಿಗಳನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಿಸಲಾಗಿದೆ. ಹೀಗಾಗಿ ಗುರಿ ಸಾಧನೆಗೆ ಕೈಗೊಳ್ಳಲಾಗುವ ಕಾರ್ಯಕ್ರಮಗಳ ಕುರಿತು ಕ್ರಿಯಾ ಯೋಜನೆ ರೂಪಿಸಿ, ಕೂಡಲೆ ಸಲ್ಲಿಸಬೇಕು, ನಿರ್ಲಕ್ಷ್ಯ ತೋರಿದಲ್ಲಿ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಡಾ. ಶಮ್ಲಾ ಇಕ್ಬಾಲ್ ಅವರು ಎಚ್ಚರಿಕೆ ನೀಡಿದರು.