ಚಾಮರಾಜನಗರ: ಚಾಮರಾಜನಗರ ಜಿಲ್ಲೆಯಲ್ಲಿ ಜಾನುವಾರಗಳಿಗೆ ಮೇವು ಕೊರತೆ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಬೆಳೆದಿರುವ ಹಾಗೂ ಹಾಲಿ ಲಭ್ಯವಿರುವ ಮೇವನ್ನು ಹೊರ ಜಿಲ್ಲೆ ಮತ್ತು ಹೊರ ರಾಜ್ಯಗಳಿಗೆ ಸಾಗಾಣಿಕೆ ಮಾಡುವುದನ್ನು ನಿರ್ಬಂಧಿಸಿ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯ ಗಡಿಭಾಗದಲ್ಲಿರುವ ಪೊಲೀಸ್ ಠಾಣೆಗಳ ಅಧಿಕಾರಿಗಳು, ಅರಣ್ಯ ಇಲಾಖಾ ವ್ಯಾಪ್ತಿಯ ಚೆಕ್‌ಪೋಸ್ಟ್ ಅಧಿಕಾರಿಗಳು ಈ ಕುರಿತು ಅತ್ಯಂತ ಜಾಗರೂಕರಾಗಿ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು. ಜಿಲ್ಲೆಯಿಂದ ಹೊರ ಜಿಲ್ಲೆ ಹೊರ ರಾಜ್ಯಗಳಿಗೆ ಮೇವು ಸಾಗಾಣಿಕೆ ಮಾಡುತ್ತಿರುವುದು ಕಂಡುಬಂದಲ್ಲಿ ನಿಯಮಾನುಸಾರ ಕಾನೂನು ಪ್ರಕಾರ ಕ್ರಮ ಕೈಗೊಳ್ಳಬೇಕು. ತಪ್ಪಿದಲ್ಲಿ ವಿಪತ್ತು ನಿರ್ವಹಣಾ ಕಾಯ್ದೆ ೨೦೦೫ರ ಪ್ರಕಾರ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಆದೇಶದಲ್ಲಿ ತಿಳಿಸಿದ್ದಾರೆ.