ಧಾರವಾಡ : ಜಿಲ್ಲೆಯ ಬರಗಾಲ ಪೀಡಿತ ಪ್ರದೇಶಗಳಲ್ಲಿ ಪ್ರಸ್ತುತ ಯಾವುದೇ ರೀತಿಯ ಮೂಲಭೂತ ಸೌಕರ್ಯಗಳ ಕೊರತೆ ಕಾಣದಿದ್ದರೂ ಮುಂಬರುವ ದಿನಗಳಲ್ಲಿ ಸಮರ್ಪಕವಾಗಿ ಬರ ನಿರ್ವಹಣೆ ಮಾಡಲು ಅಗತ್ಯ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಗ್ರಾಮಗಳಲ್ಲಿ ಕುಡಿಯುವ ನೀರು, ದನ, ಕರುಗಳಿಗೆ ಮೇವು ಹಾಗೂ ಕೂಲಿ ಕಾರ್ಮಿಕರ ಕೈಗೆ ಕೆಲಸ ನೀಡುವ ಉದ್ಯೋಗಕ್ಕೆ ಆಧ್ಯತೆ ನೀಡಲಾಗಿದೆ ಎಂದು ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಹೇಳಿದರು.
ಅವರು ಇಂದು (ನ.೨೪) ಮುಂಜಾನೆ ಕೃಷಿ ವಿಶ್ವವಿದ್ಯಾಲಯದ ರೈತ ಜ್ಞಾನಾಭಿವೃದ್ಧಿ ಕೇಂದ್ರದಲ್ಲಿ ಧಾರವಾಡ ಜಿಲ್ಲೆಯ ಬರಗಾಲ ಪೀಡಿತ ಪ್ರದೇಶಗಳ ವಿವಿಧ ಅಭಿವೃದ್ಧಿ ಯೋಜನೆಗಳನ್ನು ತುರ್ತಾಗಿ ಅನುಷ್ಠಾನಗೊಳಿಸುವ ಕುರಿತು ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಜಿಲ್ಲೆಯ ಎಲ್ಲ ಗ್ರಾಮಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷ, ಪಿಡಿಓ ಮತ್ತು ಕಾರ್ಯದರ್ಶಿಗಳ ಸಭೆ ಜರುಗಿಸಿ ಮಾತನಾಡಿದರು.
ಜಿಲ್ಲೆಯಲ್ಲಿ ಬರ ಪರಿಹಾರ ಕಾಮಗಾರಿ ಹಾಗೂ ಕಾರ್ಯಕ್ರಮಗಳು ನಿರೀಕ್ಷಿತ ಮಟ್ಟದಲ್ಲಿ ಅನುಷ್ಠಾನಗೊಳ್ಳುತ್ತಿಲ್ಲ. ಅಧಿಕಾರಿಗಳು ಪರಸ್ಪರ ಸಮನ್ವಯತೆಯಿಂದ ಕೂಡಿ ಕೆಲಸ ಮಾಡಿದರೆ ಮಾತ್ರ ನಿಗದಿತ ಅಭಿವೃದ್ಧಿ ಸಾಧಿಸಲು ಸಾಧ್ಯವಾಗುತ್ತದೆ. ವಿಶೇಷವಾಗಿ ಗ್ರಾಮಪಂಚಾಯತ್ ಅಧ್ಯಕ್ಷರಾದಿಯಾಗಿ ಸದಸ್ಯರು ಮತ್ತು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಗ್ರಾಮದ ಅಭಿವೃದ್ಧಿಗೆ ಮತ್ತು ಉದ್ಯೋಗ ಚೀಟಿ ಹೊಂದಿರುವ ಕೂಲಿ ಕಾರ್ಮಿಕರಿಗೆ ಅಗತ್ಯ ಕೆಲಸವನ್ನು ನೀಡಲು ಬದ್ಧರಾಗಿರಬೇಕು. ಗ್ರಾಮದ ಸಮಗ್ರ ಅಭಿವೃದ್ಧಿಗೆ ಅಗತ್ಯವಿರುವ ನೀಲನಕ್ಷೆಯನ್ನು ರೂಪಿಸಿ, ನರೇಗಾ ಯೋಜನೆಯ ಆಶಯದಂತೆ ನೈಸರ್ಗಿಕ ಸಂಪನ್ಮೂಲಗಳನ್ನು ಸಂರಕ್ಷಿಸಿ, ಬೆಳೆಸಲು ಆಧ್ಯತೆ ನೀಡಬೇಕೆಂದು ಸಚಿವರು ತಿಳಿಸಿದರು.
ಬರಗಾಲದ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ನರೇಗಾ ಯೋಜನೆಯಡಿ ನೋಂದಾಯಿತ ಕೂಲಿ ಕಾರ್ಮಿಕರಿಗೆ ಉದ್ಯೋಗ ನೀಡಲು ಮಾನವ ದಿನಗಳ ಸಂಖ್ಯೆಯನ್ನು ಹೆಚ್ಚಿಸಬೇಕು. ಗ್ರಾಮಪಂಚಾಯತಿಗಳು ನರೇಗಾ ಯೋಜನೆಯ ಗುರಿ ಸಾಧಿಸುವಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲು ಅನುಕೂಲವಾಗುವಂತೆ ನರೇಗಾ ಯೋಜನೆಯ ಅನುದಾನ ಗ್ರಾಮ ಪಂಚಾಯಿತಿಗಳಿಗೆ ಸರಳವಾಗಿ ಸಿಗುವಂತೆ ಮಾಡಬೇಕು ಎಂದು ಸಚಿವರು ಹೇಳಿದರು.

ಜಿಲ್ಲೆಯಲ್ಲಿ ನರೇಗಾ ಯೋಜನೆಯಡಿ ಉದ್ಯೋಗ ಚೀಟಿ ಪಡೆದಿರುವ ಕೂಲಿ ಕಾರ್ಮಿಕರಿಗೆ ಬೇಡಿಕೆಯಷ್ಟು ಉದ್ಯೋಗ ನೀಡಬೇಕು. ಜಿಲ್ಲೆಯಲ್ಲಿ ೧.೬೯ ಲಕ್ಷ ಉದ್ಯೋಗ ಚೀಟಿಗಳಿದ್ದು, ಪ್ರತಿ ಉದ್ಯೋಗ ಚೀಟಿದಾತನಿಗೆ ನೂರು ದಿನಗಳ ಕೂಲಿ ನೀಡಿದರೆ ಅಂದಾಜು ರೂ. ೫೪೧ ಕೋಟಿ ರೂ.ಗಳ ಅನುದಾನ ಇಡೀ ಜಿಲ್ಲೆಗೆ ಅನ್ವಯಿಸುತ್ತದೆ. ಆದ್ದರಿಂದ ಗ್ರಾಮಗಳ ಮಟ್ಟದಲ್ಲಿ ನೋಂದಾಯಿತ ಕೂಲಿ ಕಾರ್ಮಿಕರಿಗೆ ವಿಶೇಷವಾಗಿ ಮಹಿಳೆಯರಿಗೆ ಮತ್ತು ಕಾಡಿನ ಅಂಚಿನಲ್ಲಿ, ದೂರದ ಊರುಗಳಲ್ಲಿ ಇರುವ ಜನರಿಗೆ ನರೇಗಾ ಯೋಜನೆ ಕುರಿತು ತಿಳುವಳಿಕೆ ನೀಡಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.