ಬೆಂಗಳೂರು: ಬಿಜೆಪಿ ಅಧಿಕಾರದಲ್ಲಿರುವಾಗ ಶಾಸಕರಾಗಿದ್ದ ಡಿ.ಕೆ. ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ವಿಧಾನಸಭಾಧ್ಯಕ್ಷರಿಂದ ಯಾವುದೇ ಅನುಮತಿ ಪಡೆದಿರಲಿಲ್ಲ ಅಡ್ವಕೇಟ್ ಜನರಲ್ ಅವರ ಅಭಿಪ್ರಾಯವನ್ನು ಕೂಡ ಪರಿಗಣಿಸಲಿಲ್ಲ. ಹೀಗೆ ಸರ್ಕಾರದ ಮುಖ್ಯಮಂತ್ರಿಗಳು ತನಿಖೆಗೆ ಆದೇಶ ನೀಡಿರುವುದು ಕಾನೂನು ಬಾಹಿರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಡಿಸಿಎಂ ಡಿಕೆಶಿ ವಿರುದ್ಧದ ತನಿಖೆ ವಾಪಸ್ ಪಡೆದಿರುವ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.
ಮಾಧ್ಯಮದವರೊಂದಿಗೆ ಸಿಎಂ ಮಾತನಾಡಿದರು. ೨೦೧೯ ರಲ್ಲಿ ಡಿ.ಕೆ.ಶಿವಕುಮಾರ್ ಅವರ ವಿರುದ್ಧ ಬಿಜೆಪಿ ಸರ್ಕಾರ ತನಿಖೆಗೆ ಅನುಮತಿಸಿದಾಗ ಅವರು ಶಾಸಕರಾಗಿದ್ದರು. ಇವರ ವಿರುದ್ಧ ತನಿಖೆಗೆ ಕಾನೂನು ರೀತ್ಯವಾಗಿ ವಿಧಾನ ಸಭಾಧ್ಯಕ್ಷರಿಂದ ಅನುಮತಿ ಪಡೆದು ನಂತರ ಮುಖ್ಯಮಂತ್ರಿಗಳು ತನಿಖೆ ಕೈಗೊಳ್ಳಲು ಆದೇಶಿಸಬೇಕಿತ್ತು. ಆದರೆ ವಿಧಾನಸಭಾಧ್ಯಕ್ಷರಿಂದ ಯಾವುದೇ ಅನುಮತಿ ಪಡೆದಿಲ್ಲ ಹಾಗೂ ಅಡ್ವಕೇಟ್ ಜನರಲ್ ಅವರ ಅಭಿಪ್ರಾಯವನ್ನು ಪರಿಗಣಿಸಿರಲಿಲ್ಲ. ಅಂದಿನ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮೌಖಿಕವಾಗಿ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿದ್ದರು. ಮೌಖಿಕ ಆದೇಶದ ಮೇರೆಗೆ ಮುಖ್ಯ ಕಾರ್ಯದರ್ಶಿಗಳು ಸಿಬಿಐ ತನಿಖೆಗೆ ವಹಿಸಿದ್ದಾರೆ. ಈ ರೀತಿ ಮಾಡುವುದು ಕಾನೂನಿನ ರೀತ್ಯ ಸರಿಯಲ್ಲ ಎಂದರು.
ನ್ಯಾಯಾಲಯದ ತೀರ್ಮಾನದ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ಕಾನೂನುಬಾಹಿರವಾಗಿ ತನಿಖೆಗೆ ಆದೇಶ ನೀಡಿರುವುದರಿಂದ ವಾಪಸ್ ತೆಗೆದುಕೊಳ್ಳುತ್ತೇವೆ ಎಂದು ತೀರ್ಮಾನಿಸಿರುವುದಾಗಿ ಸಿಎಂ ತಿಳಿಸಿದರು.