ಧಾರವಾಡ : ನಾಳೆ ನ.೨೬ ಭಾನುವಾರದಂದು ಸಂವಿಧಾನ ದಿನವನ್ನು ಜಿಲ್ಲೆಯಲ್ಲಿ ಅರ್ಥಪೂರ್ಣವಾಗಿ ಆಚರಿಸಲು ಸರ್ಕಾರ ಆದೇಶಿಸಿದ್ದು, ಅದರಂತೆ ಜಿಲ್ಲೆಯ ಎಲ್ಲ ಇಲಾಖೆಗಳಲ್ಲಿ ಹಾಗೂ ಶಿಕ್ಷಣ ಸಂಸ್ಥೆಗಳಲ್ಲಿ ಸಂವಿಧಾನ ದಿನವನ್ನು ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಇಲಾಖಾ ಮುಖ್ಯಸ್ಥರಿಗೆ ನಿರ್ದೇಶನ ನೀಡಿದ್ದಾರೆ.
ಜಿಲ್ಲೆಯಲ್ಲಿರುವ ಎಲ್ಲ ವಿಶ್ವವಿದ್ಯಾಲಯಗಳು, ಶಾಲಾ ಕಾಲೇಜುಗಳು, ನಿಗಮ ಮಂಡಳಿ, ಸ್ಥಳೀಯ ಸಂಸ್ಥೆಗಳ ಕಚೇರಿ, ಸರ್ಕಾರಿ ಅನುದಾನಿತ, ಅನುದಾನರಹಿತ ಶಾಲಾ ಕಾಲೇಜುಗಳು, ತಾಲೂಕಾ ಪಂಚಾಯತ್, ಗ್ರಾಮಪಂಚಾಯತ್ ಕಚೇರಿಗಳು ಮತ್ತು ಸರ್ಕಾರದ ಎಲ್ಲ ಇಲಾಖೆಗಳು ತಮ್ಮ ಹಾಗೂ ತಮ್ಮ ಅಧೀನದ ಎಲ್ಲಾ ಜಿಲ್ಲಾ ಮತ್ತು ತಾಲೂಕಾಮಟ್ಟದ ಕಚೇರಿಗಳಲ್ಲಿ ನವೆಂಬರ್ ೨೬ ರಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವುದರೊಂದಿಗೆ ಹಾಗೂ ಭಾರತದ ಸಂವಿಧಾನ ಪೀಠಿಕೆಯನ್ನು ಓದುವುದರ ಮೂಲಕ ಸಂವಿಧಾನ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲು ಕ್ರಮ ವಹಿಸುವಂತೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.