ಬೆಂಗಳೂರು: ಸಂವಿಧಾನ ದಿನಾಚರಣೆ ಅಂಗವಾಗಿ ಇಂದು ಬೆಂಗಳೂರಿನ ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಇತರರು ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಪುಷ್ಪ ನಮನ ಸಲ್ಲಿಸಿದರು.
ಬಳಿಕ ಮಾತನಾಡಿದ ಸಿಎಂ, ಇಂದು ಸಂವಿಧಾನ ಅಂಗೀಕಾರವಾದ ದಿನ. ೧೯೪೯ರ ನವೆಂಬರ್ ೨೬ರಂದು ಭಾರತದ ಸಂವಿಧಾನ ರಚನಾ ಸಭೆಯ ಅಧ್ಯಕ್ಷರಾಗಿದ್ದ ಡಾ.ಬಾಬುರಾಜೇಂದ್ರ ಪ್ರಸಾದ್ ಅವರಿಗೆ ಭಾರತದ ಸಂವಿಧಾನವನ್ನು ಸಲ್ಲಿಸಿದ ಬಳಿಕ ಸಂವಿಧಾನ ಅಂಗೀಕಾರವಾಯಿತು. ಆದ್ದರಿಂದ ಈ ದಿನವನ್ನು ಸಂವಿಧಾನ ದಿನವೆಂದು ಇಡೀ ದೇಶದಲ್ಲಿ ಆಚರಿಸಲಾಗುತ್ತದೆ. ಇಂದು ಡಾ.ಬಾಬು ರಾಜೇಂದ್ರ ಪ್ರಸಾದ್, ಡಾ.ಬಿ.ಆರ್. ಅಂಬೇಡ್ಕರ್ ಸೇರಿದಂತೆ ಸಂವಿಧಾನ ರಚನಾ ಸಮಿತಿಯ ಎಲ್ಲ ಸದಸ್ಯರನ್ನು ನೆನಪಿಸಿಕೊಳ್ಳಬೇಕು ಎಂದರು.
ಅಂಬೇಡ್ಕರ್ ಸಂವಿಧಾನ ರಚನಾ ಸಮಿತಿಯ ಅಧ್ಯಕ್ಷರಾಗಿದ್ದರು. ಭಾರತದ ಸಂವಿಧಾನ ಶ್ರೇಷ್ಠವಾದುದು. ಸಂವಿಧಾನ ಎಷ್ಟೇ ಶ್ರೇಷ್ಠವಾಗಿದ್ದರೂ, ಸರಿಯಾದ ಕೈಗಳಲ್ಲಿ ಸಂವಿಧಾನವಿರದಿದ್ದರೆ ಸಾರ್ಥಕವಾಗುವುದಿಲ್ಲ ಎಂದು ಅಂಬೇಡ್ಕರ್ ಅವರು ಎಚ್ಚರಿಕೆಯ ಮಾತುಗಳನ್ನು ನುಡಿದಿದ್ದರು. ಸಂವಿಧಾನದ ಪರವಾಗಿರುವ ಕೈಗಳಲ್ಲಿ ಅಧಿಕಾರ ಇದ್ದಾಗ ಮಾತ್ರ, ಸಂವಿಧಾನದ ಧ್ಯೇಯೋದ್ದೇಶಗಳನ್ನು ಸಾಧಿಸಿದಂತಾಗುತ್ತದೆ ಎಂದು ಹೇಳಿದರು.