ಮಡಿಕೇರಿ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ೬೭ ನೇ ‘ಮಹಾ ಪರಿನಿರ್ವಾಣ ದಿನ’ ಕಾರ್ಯಕ್ರಮವು ಬುಧವಾರ ನಡೆಯಿತು. ನಗರದ ಗಾಂಧಿ ಭವನದಲ್ಲಿ ನಡೆದ ಮಹಾ ಪರಿನಿರ್ವಾಣ ದಿನದ ಕಾರ್ಯಕ್ರಮದಲ್ಲಿ ಶ್ರೇಷ್ಠ ಮಾನವತಾವಾದಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ.ಪಂ.ಸಿಇಒ ವರ್ಣಿತ್ ನೇಗಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರರಾಜ್, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಶೇಖರ್, ಬಿಸಿಎಂ ಇಲಾಖೆ ಅಧಿಕಾರಿ ಎನ್.ಮಂಜುನಾಥ್, ಐಟಿಡಿಪಿ ಅಧಿಕಾರಿ ಎಸ್.ಹೊನ್ನೇಗೌಡ, ಜಿಲ್ಲಾ ಖಜಾನೆ ಅಧಿಕಾರಿ ಬಿ.ಎನ್.ರಘುನಾಥ್, ಪೌರಾಯುಕ್ತರಾದ ವಿಜಯ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಪುಟ್ಟರಾಜು, ತಹಶೀಲ್ದಾರ್ ಪ್ರವೀಣ್ ಕುಮಾರ್, ಶಿಕ್ಷಣಾಧಿಕಾರಿ ಮಹದೇವ ಸ್ವಾಮಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ಶರಣಬಸಪ್ಪ, ಲೋಕೋಪಯೋಗಿ ಇಲಾಖೆ ಇಇ ಸಿದ್ದೇಗೌಡ, ಜಿಲ್ಲಾ ನೋಂದಣಾಧಿಕಾರಿ ಸಿದ್ದೇಶ್, ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ನಾರಾಯಣ, ಪಶುಪಾಲನಾ ಇಲಾಖೆ ಉಪ ನಿರ್ದೇಶಕರಾದ ಲಿಂಗರಾಜು ದೊಡ್ಡಮನಿ, ಜಿಲ್ಲಾ ಕಾರ್ಮಿಕ ಅಧಿಕಾರಿ ಹರ್ಷವರ್ಧನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಬಸವರಾಜ, ಜಿಲ್ಲಾ ಆಯುಷ್ ಅಧಿಕಾರಿ ಡಾ.ರೇಣುಕಾ ದೇವಿ, ಸಣ್ಣ ನೀರಾವರಿ ಇಲಾಖೆಯ ಎಇಇ ಕುಮಾರಸ್ವಾಮಿ, ಅಲ್ಪಸಂಖ್ಯಾತರ ಇಲಾಖೆ ಅಧಿಕಾರಿ ದಿವಾಕರ, ಸಹಕಾರ ಇಲಾಖೆಯ ಉಪ ನಿಬಂಧಕರಾದ ಕೃಷ್ಣಪ್ರಸಾದ್ ಇತರರು ಪುಷ್ಪಾರ್ಚನೆ ಮಾಡಿ, ಗೌರವ ನಮನ ಸಲ್ಲಿಸಿದರು.
ಬಳಿಕ ಜಿಲ್ಲಾಧಿಕಾರಿ ವೆಂಕಟ್ ರಾಜ ಅವರು ಮಾತನಾಡಿ ಭಾರತ ರತ್ನ, ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಾಷ್ಟ್ರಕ್ಕೆ ನೀಡಿರುವ ಕೊಡುಗೆ ಬಗ್ಗೆ ಪ್ರತಿಯೊಬ್ಬರೂ ತಿಳಿದುಕೊಳ್ಳುವಂತಾಗಬೇಕು ಎಂದರು. ಭವಿಷ್ಯದಲ್ಲಿ ರಾಷ್ಟ್ರವನ್ನು ಯಾವ ರೀತಿ ಅಭಿವೃದ್ಧಿಯತ್ತ ಕೊಂಡೊಯ್ಯಬಹುದು ಎಂಬ ಬಗ್ಗೆ ಅವರ ಬರಹ ಮತ್ತು ಭಾಷಣಗಳಲ್ಲಿ ಕಾಣಬಹುದು, ಜೊತೆಗೆ ಅಂಬೇಡ್ಕರ್ ಅವರ ದೂರದೃಷ್ಟಿಯ ಚಿಂತನೆಗಳು ಇಂದಿಗೂ ಸಹ ಪ್ರಸ್ತುತವಾಗಿವೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಹೇಳಿದರು. ಡಾ.ಬಿ.ಆರ್.ಅಂಬೇಡ್ಕರ್ ಅವರ ಅಧ್ಯಯನಶೀಲತೆ, ಚಲನಶೀಲತೆ ಮತ್ತು ಕ್ರೀಯಾಶೀಲತೆ ಸ್ವಲ್ಪವನ್ನಾದರೂ ಅನುಸರಿಸಿದರೆ ಪ್ರತಿಯೊಬ್ಬರೂ ಬದಲಾವಣೆ ಕಾಣಬಹುದು, ಆ ನಿಟ್ಟಿನಲ್ಲಿ ಅಂಬೇಡ್ಕರ್ ಅವರು ಬರೆದಿರುವ ಪುಸ್ತಕಗಳನ್ನು ಅಧ್ಯಯನ ಮಾಡಬೇಕು ಎಂದು ಜಿಲ್ಲಾಧಿಕಾರಿ ಅವರು ನುಡಿದರು.