ವಿಧಾನಸಭೆ: ರಾಜ್ಯದಲ್ಲಿ ಹೆಚ್ಚು ಬೇಡಿಕೆ ಇರುವ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಸಂಖ್ಯಾಬಲವನ್ನು ಶೇ.೨೫ರಷ್ಟು ಹೆಚ್ಚಿಸಿ ೩೦ ಸಾವಿರ ವಿದ್ಯಾರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರು ಹೇಳಿದರು. ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿ ಶಾಸಕ ಬಿ.ಪಿ.ಹರೀಶ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಇಲಾಖೆಯಲ್ಲಿ ಒಟ್ಟು ೨೪೪೩ ವಿದ್ಯಾರ್ಥಿ ನಿಲಯಗಳು ಕಾರ್ಯ ನಿರ್ವಹಿಸುತ್ತಿದ್ದು, ಒಟ್ಟು ೨,೨೮,೪೧೧ ವಿದ್ಯಾರ್ಥಿಗಳಿಗೆ ಪ್ರವೇಶಾವಕಾಶದ ಸೌಲಭ್ಯ ಕಲ್ಪಿಸಲಾಗಿದೆ.
ಹರಿಹರ ವಿಧಾನಸಭಾ ಕ್ಷೇತ್ರದ ೯ ವಿದ್ಯಾರ್ಥಿನಿಲಯಗಳಲ್ಲಿ ೭೪೫ ವಿದ್ಯಾರ್ಥಿಗಳಿಗೆ ಪ್ರವೇಶಾತಿ ಕಲ್ಪಿಸಲಾಗಿದೆ. ವಿದ್ಯಾರ್ಥಿನಿಲಯಗಳ ಪ್ರವೇಶ ಪ್ರಕ್ರಿಯೆ ಮುಗಿದ ಬಳಿಕ ಜಿಲ್ಲೆಯಲ್ಲಿ ಆಯಾ ತಾಲ್ಲೂಕಿನ ವಿದ್ಯಾರ್ಥಿ ನಿಲಯಗಳಿಗೆ ತಾತ್ಕಲಿಕವಾಗಿ ಸ್ಥಾನಗಳನ್ನು ಆಂತರಿಕ ವರ್ಗಾವಣೆ ಮಾಡಿಕೊಂಡು ಹೆಚ್ಚುವರಿ ವಿದ್ಯಾರ್ಥಿಗಳಿಗೆ ಪ್ರವೇಶಾವಕಾಶವನ್ನು ಕಲ್ಪಿಸಲಾಗಿದೆ ಎಂದರು. ವಿದ್ಯಾರ್ಥಿ ನಿಲಯಗಳಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿ ಪ್ರವೇಶ ದೊರಕದ ಅರ್ಹ ಹಿಂದುಳಿದ ವಿದ್ಯಾರ್ಥಿಗಳಿಗೆ ಪರ್ಯಾಯವಾಗಿ ಅನುದಾನದ ಲಭ್ಯತೆಯ ಅನುಸಾರ ವಿದ್ಯಾಸಿರಿ ಯೋಜನೆಯಡಿ ಪ್ರತಿ ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳು ೧೫೦೦ ರೂ.ನಂತೆ ಗರಿಷ್ಠ ೧೦ ತಿಂಗಳಿಗೆ ೧೫ ಸಾವಿರ ರೂ.ನಂತೆ ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದರು. ಇದೇ ವೇಳೆ ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಅವರು, ಭವಿಷ್ಯದ ದೃಷ್ಟಿಯಿಂದ ಹಾಸ್ಟೆಲ್ ಗಳ ಸಂಖ್ಯೆಯನ್ನು ಹೆಚ್ಚಿಸಿ. ಪ್ರಸ್ತುತ ಸಮಸ್ಯೆಗೆ ಮಾತ್ರವಲ್ಲ. ಭವಿಷ್ಯದ ದೃಷ್ಟಿಯಿಂದ ಯೋಜನೆ ರೂಪಿಸಿ ಎಂದು ಸಲಹೆ ನೀಡಿದರು.
ನೂತನ ಹಾಸ್ಟೆಲ್ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಕೆ: ರಾಜ್ಯದಲ್ಲಿ ಹಾಸ್ಟೆಲ್ ಸಮಸ್ಯೆಗಳಿದ್ದು, ಬೆಂಗಳೂರು, ಮೈಸೂರು, ಧಾರವಾಡ, ಬೆಳಗಾವಿ ಸೇರಿದಂತೆ ಹಲವು ಕಡೆ ಹೆಚ್ಚಿನ ಹಾಸ್ಟೆಲ್ ನಿರ್ಮಾಣ ಮಾಡುವ ಸಂಬಂಧ ಮುಖ್ಯಮಂತ್ರಿಗಳಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರು ಹೇಳಿದರು.
ಇನ್ನು ಕೊರೋನಾದಿಂದ ಶೈಕ್ಷಣಿಕ ವರ್ಷದಲ್ಲಿ ಏರುಪೇರಾಗಿದೆ. ಪದವಿ, ತಾಂತ್ರಿಕ ಹಾಗೂ ವೃತ್ತಿಪರ ವಿದ್ಯಾರ್ಥಿಗಳಿಗೆ ಬೇರೆ ತಿಂಗಳಲ್ಲಿ ಕಾಲೇಜು ಪ್ರಾರಂಭವಾಗುತ್ತವೆ. ಇದರಿಂದ ತೊಂದರೆಯಾಗಿದ್ದು, ಸಂಬಂಧಪಟ್ಟ ಇಲಾಖೆಗೆ ಪತ್ರ ಬರೆಯಲಾಗಿದೆ ಎಂದು ಉತ್ತರಿಸಿದರು.