ಧಾರವಾಡ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ. ಮಕ್ಕಳ ರಕ್ಷಣಾ ನಿರ್ದೆಶನಾಲಯ, ಬೆಂಗಳೂರು. ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಧಾರವಾಡ, ಇವರ ಸಹಯೋಗದಲ್ಲಿ ವಸತಿ ನಿಲಯದ ನಿಲಯ ಪಾಲಕರು ಹಾಗೂ ಬಿ.ಆರ್.ಪಿ., ಸಿ.ಆರ್.ಪಿ ಗಳಿಗೆ ಬಾಲನ್ಯಾಯ ಕಾಯ್ದೆ, ಪೊಕ್ಸೊ ಕಾಯ್ದೆ, ಬಾಲ್ಯ ವಿವಾಹ ನಿಷೇಧ ಕಾಯ್ದೆ ಹಾಗೂ ಮಕ್ಕಳಿಗೆ ಸಂಬಂಧಿಸಿದ ವಿವಿಧ ಕಾನೂನುಗಳ ಕುರಿತು ತರಬೇತಿ ಕಾರ್ಯಾಗಾರವನ್ನು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಭಾಂಗಣದ ಎ.ಡಿ.ಆರ್. ಕಟ್ಟಡದಲ್ಲಿ ಇಂದು (ಡಿ.18) ಜರುಗಿತು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಪರಶುರಾಮ ದೊಡ್ಡಮನಿ ಅವರು ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ಮಕ್ಕಳಿಗೆ ಇರುವ ಕಾನೂನು ಸೇವೆಗಳ ಕುರಿತು ಮಾಹಿತಿ ನೀಡಿದರು. ಇಂದಿನ ಮಕ್ಕಳು ಮುಂದಿನ ಪ್ರಜೆಗಳು ಆದ್ದರಿಂದ ಮಕ್ಕಳನ್ನು ಸುಸಂಸ್ಕøತರನ್ನಾಗಿ ಮಾಡುವುದು ನಮ್ಮ ನಿಮ್ಮೆಲ್ಲರ ಆಧ್ಯ ಕರ್ತವ್ಯವಾಗಿದೆ. ಮಕ್ಕಳ ಮೇಲೆ ದೌರ್ಜನ್ಯಗಳು ನಡೆದಲ್ಲಿ ತಕ್ಷಣ ಕಾನೂನು ಕ್ರಮಕೈಗೊಳ್ಳಬೇಕು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಾ ಸಾರ್ವಜನಿಕರ ಸೇವೆಗಾಗಿ ಇದ್ದು, ಇದರ ಸದುಪಯೋಗವನ್ನು ಪಡೆಯಬೇಕು ಎಂದು ಹೇಳಿದರು.
ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ರಾಜೇಶ್ವರಿ ಸಾಲಗಟ್ಟಿ ಅವರು ಮಾತನಾಡಿ, ಮಕ್ಕಳಿಗಾಗಿ ಹಲವಾರು ಕಾನೂನುಗಳಿವೆ. ಯಾವುದೇ ವಸತಿ ನಿಲಯಗಳಲ್ಲಿ ಮಕ್ಕಳಿಗೆ ಅನ್ಯಾಯವಾದಲ್ಲಿ ತಮ್ಮ ಮಕ್ಕಳೆಂದು ಭಾವಿಸಿ ಮಕ್ಕಳಿಗೆ ನ್ಯಾಯ ಒದಗಿಸುವಲ್ಲಿ ಕೆಲಸ ನಿರ್ವಹಿಸಬೇಕು. ಬಾಲನ್ಯಾಯ ಕಾಯ್ದೆಯಡಿ ಬಾಲನ್ಯಾಯ ಮಂಡಳಿ, ಮಕ್ಕಳ ಕಲ್ಯಾಣ ಸಮಿತಿ, ಮಕ್ಕಳ ವಿಶೇಷ ಪೊಲೀಸ್ ಘಟಕ, ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕಗಳು ಮುಖ್ಯವಾಗಿ 04 ಸ್ತಂಭವಾಗಿ ಕೆಲಸ ನಿರ್ವಸುತ್ತಿದ್ದು, ಪ್ರತಿಯೊಂದು ವಿಭಾಗಗಳು ಮಕ್ಕಳ ಹಕ್ಕುಗಳ ರಕ್ಷಣೆಯಲ್ಲಿ ಕೆಲಸ ಮಾಡುತ್ತಿವೆ. ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಶಾಲೆಗಳಲ್ಲಿ ಯಾವುದೇ ಮಗು ಸಂಕಷ್ಟಕ್ಕೀಡಾದಲ್ಲಿ ತಕ್ಷಣ ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ಅಥವಾ ಮಕ್ಕಳ ಸಹಾಯವಾಣಿ 1098 ಗೆ ಕರೆ ಮಾಡುವಂತೆ ಅವರು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನೀತಾ ವಾಡಕರ ಅವರು ಮಾತನಾಡಿ, ವಸತಿ ನಿಲಯದ ಪಾಲಕರು ಹಾಗೂ ಶಾಲಾ ಶಿಕ್ಷಕರು ಮಕ್ಕಳಿಗೆ ತಂದೆ-ತಾಯಿ ಇದ್ದಂತೆ. ನಿಲಯಗಳಲ್ಲಿ ವಾಸಿಸುತ್ತಿರುವ ಪ್ರತಿಯೊಂದು ಮಗುವಿನ ಹಕ್ಕನ್ನು ರಕ್ಷಿಸುವುದು ನಮ್ಮೆಲ್ಲರ ಆಧ್ಯ ಕರ್ತವ್ಯ. ಒಂದು ವಾರಕ್ಕಿಂತ ಹೆಚ್ಚು ದಿನ ಮಕ್ಕಳು ಶಾಲೆಗೆ ಗೈರಾದಲ್ಲಿ ಅಂತಹ ಮಗುವಿನ ಮನೆಗೆ ಭೇಟಿ ಮಾಡಿ ಮಗುವಿನ ವಾಸ್ತವಿಕ ಸ್ಥಿತಿಯನ್ನು ನಾವು ಅರಿತು, ಮಗುವಿನ ಹಕ್ಕನ್ನು ರಕ್ಷಿಸುವುದು ಮುಖ್ಯವಾಗಿರುತ್ತದೆ. ಯಾವುದೇ ಮಗು ಭಾವನಾತ್ಮಕವಾಗಿ ಬದಲಾವಣೆ ಕಂಡುಬಂದಲ್ಲಿ ಮಗುವಿನ ಮಾನಸಿಕ ಸ್ಥಿತಿಯನ್ನು ತಿಳಿದು ಸೂಕ್ತ ಮಾರ್ಗದರ್ಶನ ಹಾಗೂ ಆಪ್ತಸಮಾಲೋಚನೆಯನ್ನು ಒದಗಿಸಬೇಕು ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿಗಳು, ಜಿಲ್ಲೆಯ ವಿವಿಧ ವಸತಿ ನಿಲಯಗಳ ನಿಲಯ ಪಾಲಕರು, ಬಿಆರ್‍ಪಿ ಮತ್ತು ಸಿಆರ್‍ಪಿ ಅಧಿಕಾರಿಗಳು ಭಾಗವಹಿಸಿದ್ದರು.