ಬೆಂಗಳೂರು: ಸರ್ಕಾರದ ಐದನೆಯ ಮತ್ತು ಕೊನೆಯ ಗ್ಯಾರಂಟಿಗೆ ಮುಹೂರ್ತ ನಿಗದಿಯಾಗಿದೆ. ಇದೇ ಡಿ. 26ರಿಂದ ಮಹತ್ವಾಕಾಂಕ್ಷಿ ಯುವನಿಧಿ ಯೋಜನೆಗೆ ನೋಂದಣಿ ಪ್ರಕ್ರಿಯೆಗೆ ಚಾಲನೆ ದೊರೆಯಲಿದ್ದು, ಸ್ವಾಮಿ ವಿವೇಕಾನಂದ ಜನ್ಮದಿನದಂದು ಅಂದರೆ ಜ. 12ಕ್ಕೆ ನಿರುದ್ಯೋಗಿ ಫಲಾನುಭವಿಗಳ ಖಾತೆಗೆ ನೇರ ನಗದು ವರ್ಗಾವಣೆ ಮೂಲಕ ಹಣ ಜಮೆ ಆಗಲಿದೆ ಎಂದು ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಶರಣಪ್ರಕಾಶ ಪಾಟೀಲ ತಿಳಿಸಿದರು.
ಈ ಕುರಿತು ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ಶರಣಪ್ರಕಾಶ್ ಪಾಟೀಲ್, ಡಿಸೆಂಬರ್ 26 ರಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಲೋಗೋ ಅನಾವರಣ ಮಾಡಲಿದ್ದಾರೆ.ಜನವರಿ 12 ರಂದು ವಿವೇಕಾನಂದ ಜಯಂತಿ ದಿನ ನೇರ ನಗದು ವರ್ಗಾವಣೆ ಮೂಲಕ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆಯಾಗಲಿದೆ ಎಂದರು.
ಜ. 12ರಂದು ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದಲ್ಲಿ ‘ಯುವನಿಧಿ’ಗೆ ಚಾಲನೆ ನೀಡಲು ನಿರ್ಧರಿಸಲಾಗಿದೆ. 5.30ಲಕ್ಷ ಫಲಾನುಭವಿಗಳು ಇರುವುದಾಗಿ ಅಂದಾಜಿಸಲಾಗಿದ್ದು, ಇದರಲ್ಲಿ 4.81 ಲಕ್ಷ ಪದವೀಧರರು ಮತ್ತು 48,153 ಡಿಪ್ಲೊಮಾ ತೇರ್ಗಡೆಯಾದವರು ಆಗಿದ್ದಾರೆ.ಪದವಿ, ಡಿಪ್ಲೋಮಾ ಮುಗಿಸಿ ಆರು ತಿಂಗಳು ಆಗಿದ್ದರೆ ಅವರು ಈ ಯುವನಿಧಿಗೆ ಅರ್ಹರಾಗಿರುತ್ತಾರೆ. ಪದವಿ ಪಾಸ್ ಆದವರೆಗೆ 3 ಸಾವಿರ ರೂ., ಡಿಪ್ಲೋಮಾ ಪಾಸ್ ಆದವರಿಗೆ 1500 ಸಾವಿರ ರೂ. ನೀಡುತ್ತೇವೆ ಎಂದು ಮಾಹಿತಿ ನೀಡಿದರು. 2023- 24ನೇ ಸಾಲಿನಲ್ಲಿ ಪಾಸಾದವರು ಈ ನಿರುದ್ಯೋಗ ಭತ್ಯೆಗೆ ಅರ್ಹರಾಗಿರುತ್ತಾರೆ ಎಂದು ಅವರು ಮಾಹಿತಿ ನೀಡಿದರು.