ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಸಂಸದ ಪ್ರತಾಪ ಸಿಂಹ ವಿರುದ್ಧ ದೇವರಾಜ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.
ಕಾಂಗ್ರೆಸ್ ಮುಖಂಡರು ನೀಡಿದ ದೂರಿನ ಮೇರೆಗೆ 1860ರ ಐಪಿಸಿ 504, 153ರ ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಸಂಸದ ಪ್ರತಾಪ ಸಿಂಹ ವಿರುದ್ಧ ಮಂಗಳವಾರ ರಾತ್ರಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಮೈಸೂರು-ಹುಣಸೂರು ರಸ್ತೆಯಲ್ಲಿ ವಾಹನಗಳನ್ನು ತಡೆದು ಪ್ರತಿಭಟನೆ ನಡೆಸಿದ್ದರು. ಜಲದರ್ಶಿನಿ ಅತಿಥಿಗೃಹದಲ್ಲಿರುವ ಪ್ರತಾಪ್ ಸಿಂಹ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದರು.
ಇತ್ತೀಚೆಗೆ ಹುಣಸೂರಿನಲ್ಲಿ ನಡೆದ ಹನುಮ ಜಯಂತಿ ಕಾರ್ಯಕ್ರಮದ ವೇಳೆ ಮಾಧ್ಯಮಗಳೊಂದಿಗೆ ಮಾತನಾಡುವಾಗ ಪ್ರತಾಪ ಸಿಂಹ ಅವರು, ಸಿಎಂ ಸಿದ್ದರಾಮಯ್ಯರಿಗೆ ಸೋಮಾರಿ ಸಿದ್ದನ ರೀತಿ ಎಂಬ ಪದ ಬಳಸಿದ್ದರು. ಅಲ್ಲದೇ ಸಿಎಂ ಸಿದ್ದರಾಮಯ್ಯ ಜಾತಿ ಜಾತಿಗಳ ನಡುವೆ ದ್ವೇಷ ಹರಡುತ್ತಿದ್ದಾರೆಂದು ಪ್ರತಾಪ್ ಸಿಂಹ ಹೇಳಿಕೆ ನೀಡಿದ್ದರು.
ಈ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಕಾಂಗ್ರೆಸ್ ಕಾರ್ಯಕರ್ತರು, ನಿನ್ನೆ(ಡಿಸೆಂಬರ್ 27) ರಾತ್ರಿ ಪ್ರತಾಪ್ ಸಿಂಹ ವಿರುದ್ಧ ಪ್ರತಿಭಟನೆ ನಡೆಸಿದ್ದರು. ಕೊನೆಗೆ ಪೊಲೀಸರು ಎಫ್ಐಆರ್ ದಾಖಲಿಸಿಕೊಳ್ಳುವುದಾಗಿ ಭರವಸೆ ನೀಡಿದ್ದರಿಂದ ಪ್ರತಿಭಟನೆ ವಾಪಸ್ ಪಡೆದುಕೊಂಡಿದ್ದರು.
ಪ್ರತಾಪ್ ಸಿಂಹರಿಂದ ಹಿಂದು ಮತ್ತು ಮುಸ್ಲಿಂ ನಡುವೆ ಕೋಮು ಗಲಭೆ ಸೃಷ್ಟಿಸಲು ನಿರಂತರ ಪ್ರಯತ್ನ ಎಂದು ಮೈಸೂರು ಗ್ರಾಮಾಂತರ ಕಾಂಗ್ರೆಸ್ ಅಧ್ಯಕ್ಷ ಬಿ.ಜೆ ವಿಜಯಕುಮಾರ್ ಲಿಖಿತ ದೂರು ನೀಡಿದ್ದರು. ಅದಂತೆ ಇದೀಗ ದೇವರಾಜ್ ಪೊಲೀಸ್ ಠಾಣೆಯಲ್ಲಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್ಐಆರ್ ದಾಖಲಾಗಿದೆ.