Tuesday, April 22, 2025
Google search engine

Homeರಾಜ್ಯಸುದ್ದಿಜಾಲಗ್ರಾಹಕರು ತಮ್ಮ ಹಕ್ಕುಗಳ ಬಗ್ಗೆ ಜಾಗೃತರಾಗಿರಬೇಕು: ನ್ಯಾ. ಹುಲುವಾಡಿ ಜಿ. ರಮೇಶ್

ಗ್ರಾಹಕರು ತಮ್ಮ ಹಕ್ಕುಗಳ ಬಗ್ಗೆ ಜಾಗೃತರಾಗಿರಬೇಕು: ನ್ಯಾ. ಹುಲುವಾಡಿ ಜಿ. ರಮೇಶ್

ರಾಮನಗರ: ಗ್ರಾಹಕರು ತಮ್ಮ ಹಕ್ಕುಗಳ ಬಗ್ಗೆ ಜಾಗೃತರಾಗಿರಬೇಕು, ಗ್ರಾಹಕರ ಹಿತಾಸಕ್ತಿ ಕಾಯಲು ಸರ್ಕಾರ ಕಠಿಣ ಕಾನೂನುಗಳನ್ನು ಜಾರಿಗೊಳಿಸಿದ್ದು, ಪ್ರತಿಯೊಬ್ಬರು ಕಾನೂನು ತಿಳಿದುಕೊಳ್ಳುವುದು ಬಹಳ ಅವಶ್ಯ ಎಂದು ಕರ್ನಾಟಕ ರಾಜ್ಯ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ನ್ಯಾ. ಹುಲುವಾಡಿ ಜಿ. ರಮೇಶ್ ಅವರು ಅವರು ಹೇಳಿದರು. ಅವರು ಇಂದು ಚನ್ನಪಟ್ಟಣದ ಶತಮಾನೋತ್ಸವ ಭವನದಲ್ಲಿ ಜಿಲ್ಲಾಡಳಿತ, ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ, ಕನಕಪುರ ತಾಲ್ಲೂಕಿನ ಜಿಲ್ಲಾ ಗ್ರಾಹಕರ ಮಾಹಿತಿ ಕೇಂದ್ರ ಹಾಗೂ ಚನ್ನಪಟ್ಟಣದ ಗ್ರಾಹಕ ಮಾಹಿತಿ ಕೇಂದ್ರದ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಗ್ರಾಹಕ ಸಂರಕ್ಷಣಾ ಕಾಯ್ದೆ ೨೦೧೯ರ ಕಾನೂನು ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಡಿಸೆಂಬರ್ ೨೪ ಅನ್ನು ಭಾರತದಲ್ಲಿ ರಾಷ್ಟ್ರೀಯ ಗ್ರಾಹಕರ ದಿನವನ್ನಾಗಿ ಆಚರಿಸಲಾಗುತ್ತದೆ. ಗ್ರಾಹಕರಿಗೆ ತಮ್ಮ ಹಕ್ಕುಗಳ ಅರಿವಿನ ಮಹತ್ವವನ್ನು ಮನವರಿಕೆ ಮಾಡಿಕೊಡುವ ಹಾಗೂ ಇತರರಿಗೆ ಈ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ರಾಷ್ಟ್ರೀಯ ಗ್ರಾಹಕ ದಿನ ಆಚರಿಸಲಾಗುತ್ತದೆ ಎಂದರು. ತಾವು ಖರೀದಿಸಲಾದ ವಸ್ತು ಹಾಗೂ ಅದರ ಸೇವೆಗಳ ಗುಣಮಟ್ಟವಾಗಿದೆಯೋ, ಇಲ್ಲವೋ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು. ತಪ್ಪದೆ ಖರೀದಿಸಲಾದ ವಸ್ತುವಿನ ಬಿಲ್ ಅನ್ನು ಕಡ್ಡಾಯವಾಗಿ ಪಡೆಯಬೇಕು. ಸಾರ್ವಜನಿಕರು ಮಾರುಕಟ್ಟೆಯಲ್ಲಿ ಯಾವುದೇ ವಸ್ತುಗಳನ್ನು ಖರೀದಿಸುವಾಗ ಎಚ್ಚರವಹಿಸುವುದು ಅತ್ಯವಶ್ಯಕವಾಗಿದೆ. ಗ್ರಾಹಕರ ಹಕ್ಕುಗಳ ಬಗ್ಗೆ ಅರಿವು ಹೊಂದಿದರೆ ಮಾರುಕಟ್ಟೆಯಲ್ಲಿ ವಸ್ತುಗಳ ಖರೀದಿ ಕಲಬೆರಿಕೆ ಬಗ್ಗೆ ಎಚ್ಚರ ವಹಿಸಲು ಸಾಧ್ಯ ಎಂದು ಹೇಳಿದರು.

ಅಪರ ಜಿಲ್ಲಾಧಿಕಾರಿ ಶಿವಾನಂದ ಮೂರ್ತಿ ಅವರು ಮಾತನಾಡಿ, ಸಮಾಜದಲ್ಲಿ ಒಬ್ಬರನ್ನೊಬ್ಬರು ಅವಲಂಬಿಸಿರುವುದರಿಂದ ದಿನನಿತ್ಯ ಜೀವನಕ್ಕೆ ಅಗತ್ಯವಾದ ವಸ್ತುಗಳನ್ನು ಖರೀದಿಸುವಾಗ ನಡೆಯುವ ಮೋಸ, ವಂಚನೆಗೆ ಒಳಗಾಗುವುದನ್ನು ತಡೆಯಲು ಜಾಗೃತವಾಗಿರಬೇಕು ಹಾಗೂ ಗ್ರಾಹಕರ ಹಕ್ಕುಗಳ ಬಗ್ಗೆ ತಿಳಿದುಕೊಳ್ಳಬೇಕು ಎಂದರು. ಗ್ರಾಹಕರು ಎಷ್ಟೇ ಜಾಗೃತರಾಗಿದ್ದರು ಒಂದೊಮ್ಮೆ ಮೋಸ ಹೋಗುವುದು ಸಹಜ ಇಂತಹ ಸಂದರ್ಭದಲ್ಲಿ ಮೋಸ ಹೋದ ಯಾವುದೇ ಗ್ರಾಹಕನು ತನಗಾದ ನಷ್ಟವನ್ನು ಹಿಂಪಡೆಯಲು ಗ್ರಾಹಕ ವೇದಿಕೆಗೆ ಲಿಖಿತ ರೂಪದಲ್ಲಿ ದೂರನ್ನು ಸಲ್ಲಿಸಬಹುದು ಎಂದು ತಿಳಿಸಿದರು.

ಗ್ರಾಹಕರಿಗೆ ಸುರಕ್ಷತೆಯ ಹಕ್ಕನ್ನು ನೀಡಲಾಗಿದೆ. ಅವರು ಖರೀದಿಸುವ ಯಾವುದೇ ವಸ್ತು, ಸರಕು, ಅಥವಾ ಪಡೆಯುವ ಸೇವೆಯು ಸುರಕ್ಷಿತವಾಗಿರಬೇಕೆಂದು ಈ ಹಕ್ಕು ಹೇಳುತ್ತದೆ. ಸುರಕ್ಷತೆಯ ಹಕ್ಕನ್ನು ಕೇವಲ ಗ್ರಾಹಕ ಸಂರಕ್ಷಣಾ ಕಾಯ್ದೆ ಮಾತ್ರವಲ್ಲ ಇನ್ನೂ ಅನೇಕ ಕಾನೂನುಗಳಲ್ಲಿ ಅವಕಾಶ ನೀಡಲಾಗಿದೆ ಎಂದು ಹೇಳಿದರು. ರಾಮನಗರ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಹೆಚ್. ಚನ್ನೇಗೌಡ ಅವರು ಗ್ರಾಹಕರ ಹಕ್ಕು ಸಮಸ್ಯೆಗಳ ಕುರಿತು ಮಾತನಾಡಿ, ಗ್ರಾಹಕರಿಗೆ ಅನಗತ್ಯವಾಗಿ ವಂಚಿಸುವ ಇ-ಕಾಮರ್ಸ್ ಮತ್ತು ಡಿಜಿಟಲ್ ವ್ಯವಹಾರ ಹಾಗೂ ಆನ್‌ಲೈನ್‌ನಲ್ಲಿ ಖರೀದಿಸುವ ಗ್ರಾಹಕರಿಗೆ ಎಷ್ಟು ಅನುಕೂಲವೋ ಅಷ್ಟೇ ವಂಚನೆ ಪ್ರಕರಣಗಳು ಕೂಡ ಹೆಚ್ಚು ಈ ಬಗ್ಗೆ ಗ್ರಾಹಕರು ಎಚ್ಚರಿಕೆಯಿಂದ ವ್ಯವಹಾರ ಮಾಡುವುದರ ಜೊತೆಗೆ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸುವುದು ಬಹಳ ಮುಖ್ಯ ಎಂದು ಹೇಳಿದರು.
ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗದ ಮಹಿಳಾ ಸದಸ್ಯರಾದ ರೇಣುಕಾದೇವಿ ದೇಶಪಾಂಡೆ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಉಪ ಪೊಲೀಸ್ ವರಿಷ್ಠಾಧಿಕಾರಿ ಸುರೇಶ್, ಕರ್ನಾಟಕ ರಾಜ್ಯ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗದ ರಿಜಿಸ್ಟ್ರಾರ್ ಮತ್ತು ಆಡಳಿತಾಧಿಕಾರಿ ವಿಜಯ್ ಕುಮಾರ್, ಆಹಾರ ನಾಗರೀಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರಾದ ರಮ್ಯ ಸಿ.ಆರ್., ಚನ್ನಪಟ್ಟಣ ತಾಲ್ಲೂಕು ತಹಶೀಲ್ದಾರರಾದ ಮಹೇಂದ್ರ ಎ.ಎಚ್. ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಗೂ ಗ್ರಾಹಕರು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular