ಬೆಂಗಳೂರು: ಹೊಸ ವರ್ಷಾಚರಣೆಗೆ ಅನುಕೂಲವಾಗುವಂತೆ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಡಿಸೆಂಬರ್ 31ರಂದು ರಾತ್ರಿಯಿಂದ ಬೆಳಗಿನ ಜಾವ 2 ಗಂಟೆಯವರೆಗೆ ನಮ್ಮ ಮೆಟ್ರೋ ರೈಲು ಸೇವೆಯನ್ನು ವಿಸ್ತರಿಸಿದೆ.
ಆದರೆ, ಪ್ರವಾಸಿಗರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಎಂಜಿ ರಸ್ತೆ ಮೆಟ್ರೋ ನಿಲ್ದಾಣಕ್ಕೆ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಪೊಲೀಸ್ ಇಲಾಖೆ ಸೂಚನೆ ಮೇರೆಗೆ ಎಂಜಿ ರಸ್ತೆಗೆ ಪ್ರವೇಶ ನಿರ್ಬಂಧಿಸಲಾಗಿದೆ. ಹೀಗಾಗಿ ವಿಸ್ತೃತ ರೈಲು ಸೇವೆಯನ್ನು ಬಳಸಲು ಮೆಟ್ರೋ ಪ್ರಯಾಣಿಕರು ಟ್ರಿನಿಟಿ ಅಥವಾ ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣಗಳಿಗೆ ತೆರಳಲು ಸೂಚಿಸಲಾಗಿದೆ.
ರಾತ್ರಿ 11.30ಕ್ಕೆ ಇದ್ದ ಕೊನೆಯ ರೈಲು ಸೇವೆಯನ್ನು ಡಿಸೆಂಬರ್ 31 ರಂದು ಬೆಳಗಿನ ಜಾವ 2 ಗಂಟೆಯವರೆಗೆ ವಿಸ್ತರಿಸಲಾಗಿದೆ. ಈ ಅವಧಿಯಲ್ಲಿ ರೈಲುಗಳು 15 ನಿಮಿಷಗಳ ಆವರ್ತನದಲ್ಲಿ ಸಂಚರಿಸಲಿವೆ.
ಟ್ರಿನಿಟಿ ಮತ್ತು ಕಬ್ಬನ್ ಪಾರ್ಕ್ ನಿಲ್ದಾಣಗಳಿಂದ ಪ್ರಯಾಣಿಕರಿಗೆ 50 ರೂಪಾಯಿಗೆ ಪೇಪರ್ ಟಿಕೆಟ್ ನೀಡಲಾಗುತ್ತದೆ. ಡಿಸೆಂಬರ್ 31 ರಂದು ಮಧ್ಯರಾತ್ರಿ ಟಿಕೆಟ್ ವಿತರಣೆ ಇರುವುದಿಲ್ಲವಾದ್ದರಿಂದ ಪೇಪರ್ ಟಿಕೆಟ್‌ಗಳನ್ನು ಮುಂಚಿತವಾಗಿ ಪಡೆಯಬೇಕು. ಸ್ಮಾರ್ಟ್ ಕಾರ್ಡ್ ಮತ್ತು ಕ್ಯೂಆರ್ ಕೋಡ್ ಟಿಕೆಟ್ ಹೊಂದಿರುವ ಪ್ರಯಾಣಿಕರು ಎಂದಿನಂತೆ ರಿಯಾಯಿತಿ ದರದಲ್ಲಿ ಪ್ರಯಾಣಿಸಬಹುದು ಎಂದು ಬಿಎಂಆರ್ ಸಿಎಲ್ ಅಧಿಕಾರಿಗಳು ತಿಳಿಸಿದ್ದಾರೆ.