ಮಂಗಳೂರು(ದಕ್ಷಿಣ ಕನ್ನಡ): ಮಂಡ್ಯದಲ್ಲಿ ಮುಸ್ಲಿಮ್ ಮಹಿಳೆಯರ ಬಗ್ಗೆ ಅತ್ಯಂತ ಅವಹೇಳನಕಾರಿ ಹೇಳಿಕೆ ನೀಡಿರುವ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ರನ್ನು ಯಾವುದೇ ವಿಳಂಬವಿಲ್ಲದೆ ಕೂಡಲೇ ಬಂಧಿಸಿ ಸೂಕ್ತ ಕಾನೂನಿನ ಕ್ರಮ ಕೈಗೊಳ್ಳುವಂತೆ ದಕ್ಷಿಣ ಕನ್ನಡ ಜಿಲ್ಲಾ ಜಾತ್ಯತೀತ ಪಕ್ಷಗಳ ಸಂಘಟನೆಗಳ ಜಂಟಿ ವೇದಿಕೆ ರಾಜ್ಯ ಸರಕಾರವನ್ನು ಆಗ್ರಹಿಸಿದೆ.
ಮಂಗಳೂರಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಂಟಿ ವೇದಿಕೆಯ ಅಧ್ಯಕ್ಷ, ಮಾಜಿ ಸಚಿವ ಬಿ.ರಮಾನಾಥ ರೈ ಕಲ್ಲಡ್ಕ ಪ್ರಭಾಕರ ಭಟ್ ಭಾಷಣದಲ್ಲಿ ಮುಸ್ಲಿಮ್ ಮಹಿಳೆಯರ ಬಗ್ಗೆ ಕೆಟ್ಟದ್ದಾಗಿ ಮಾತನಾಡಿದ್ದು ಮಾತ್ರವಲ್ಲ ಇಡೀ ಮಹಿಳಾ ಸಮೂಹಕ್ಕೆ ಅಪಮಾನ ಮಾಡಿದ್ದಾರೆ. ಮಹಿಳೆಯರ ಬಗ್ಗೆ ಕೆಟ್ಟ ರೀತಿಯಲ್ಲಿ ಮಾತನಾಡುವ ಚಾಳಿ ಮುಂದುವರಿಸಿರುವ ಪ್ರಭಾಕರ ಭಟ್ ವಿರುದ್ಧ ಈಗಾಗಲೇ ಶ್ರೀರಂಗಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅವರನ್ನು ಸರಕಾರ ತಕ್ಷಣ ಬಂಧಿಸಲಿ ಎಂದು ಒತ್ತಾಯಿಸಿದರು.