Sunday, April 20, 2025
Google search engine

Homeರಾಜ್ಯಕರಸೇವಕರ ಬಂಧನ ಖಂಡಿಸಿ ನಾಳೆ ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ: ಶಾಸಕ ಬಿ ವೈ...

ಕರಸೇವಕರ ಬಂಧನ ಖಂಡಿಸಿ ನಾಳೆ ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ: ಶಾಸಕ ಬಿ ವೈ ವಿಜಯೇಂದ್ರ

ಬೆಂಗಳೂರು: ಕರಸೇವಕರ ಬಂಧನ ಖಂಡಿಸಿ ನಾಳೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ ವೈ ವಿಜಯೇಂದ್ರ ಅವರು ತಿಳಿಸಿದ್ದಾರೆ.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಮಾತನಾಡಿದ ಅವರು, ತಾನು ಹಿಂದೂ ವಿರೋಧಿ ಎಂಬುದನ್ನು ಈ ಸರ್ಕಾರವು ರಾಜ್ಯ ಮತ್ತು ದೇಶದ ಜನತೆಗೆ ಪದೇ ಪದೇ ನೆನಪು ಮಾಡುವ ಕೆಲಸ ಮಾಡುತ್ತಿದೆ. ಹುಬ್ಬಳ್ಳಿಯಲ್ಲಿ 31 ವರ್ಷದ ಹಳೆಯ ಕೇಸನ್ನು ರೀ ಓಪನ್ ಮಾಡಿ ಹಿಂದೂ ಕಾರ್ಯಕರ್ತ ಶ್ರೀಕಾಂತ ಪೂಜಾರಿ ಅವರನ್ನು ಬಂಧಿಸಿದ್ದನ್ನು ಬಿಜೆಪಿ ಬಲವಾಗಿ ಖಂಡಿಸುತ್ತದೆ ಎಂದರು.

ಜನವರಿ 22ರಂದು ಅಯೋಧ್ಯೆಯಲ್ಲಿ ಭಗವಾನ್ ಶ್ರೀರಾಮನ ಪ್ರತಿಷ್ಠಾಪನೆ ಆಗುವ ಶುಭ ಸಂದರ್ಭದಲ್ಲಿ ಇಡೀ ರಾಜ್ಯ ಮಾತ್ರವಲ್ಲದೆ ದೇಶಾದ್ಯಂತ ಕೋಟ್ಯಂತರ ಹಿಂದೂ ಕಾರ್ಯಕರ್ತರು ಸಂತಸದಲ್ಲಿದ್ದಾರೆ. ದೇಶದೆಲ್ಲೆಡೆ ಸಂಭ್ರಮದ ವಾತಾವರಣ ಇದೆ. ಇಂಥ ಸಂದರ್ಭವನ್ನು ಆಯ್ಕೆ ಮಾಡಿಕೊಂಡು ಕೈಗೊಂಡ ಕ್ರಮದ ಮೂಲಕ ತಮ್ಮದು ಹಿಂದೂ ವಿರೋಧಿ ಸರ್ಕಾರ ಎಂದು ದೇಶಕ್ಕೇ ತೋರಿಸಿಕೊಟ್ಟಿದ್ದಾರೆ ಎಂದು ವಿಜಯೇಂದ್ರ ಟೀಕಿಸಿದರು.

ಹಳೆಯ ಕೇಸನ್ನು ಮತ್ತೆ ಓಪನ್ ಮಾಡಿ ಶ್ರೀಕಾಂತ ಪೂಜಾರಿಯವರನ್ನು ಬಂಧಿಸಿರುವುದು ಖಂಡನೀಯ. ಈ ನಿಟ್ಟಿನಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬುಧವಾರ ಇಡೀ ರಾಜ್ಯಾದ್ಯಂತ ಹೋರಾಟ ಮಾಡಲು ಕರೆ ನೀಡುತ್ತಿದ್ದೇವೆ. ಬೆಂಗಳೂರಿನ ಫ್ರೀಡಂ ಪಾರ್ಕ್ ಮಾತ್ರವಲ್ಲದೆ, ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ ನಡೆಸುತ್ತೇವೆ ಎಂದು ಅವರು ಪ್ರಕಟಿಸಿದರು.

ಹಿಂದೂ ವಿರೋಧಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಹೋರಾಟ ನಡೆಯಲಿದೆ. ಪದೇಪದೇ ಅಲ್ಪಸಂಖ್ಯಾತರನ್ನು ಓಲೈಸುವ ರಾಜ್ಯದ ಕಾಂಗ್ರೆಸ್ ಸರ್ಕಾರ, ಬರಗಾಲದ ಸಂದರ್ಭದಲ್ಲಿ ಅಲ್ಪಸಂಖ್ಯಾತರ ತುಷ್ಟೀಕರಣ ಮಾಡುತ್ತಿದೆ. ಇಡೀ ದೇಶದಲ್ಲಿ ಸಂಭ್ರಮ ಇರುವಾಗ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಸರಕಾರವು ಹಿಂದೂಗಳ ಭಾವನೆಗೆ ಧಕ್ಕೆ ತರುವ ರೀತಿಯಲ್ಲಿ ನಡೆದುಕೊಂಡಿದೆ. ಇದಕ್ಕೆ ತಕ್ಕ ಶಾಸ್ತಿಯನ್ನು ಮತದಾರರು ಮುಂದಿನ ದಿನಗಳಲ್ಲಿ ಮಾಡುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಅಯೋಧ್ಯೆಯ ಮಂತ್ರಾಕ್ಷತೆಯನ್ನು ರಾಜ್ಯ ಮಾತ್ರವಲ್ಲದೆ, ದೇಶಾದ್ಯಂತ ಪ್ರತಿ ಮನೆಗೂ ತಲುಪಿಸುತ್ತಿದ್ದಾರೆ. ಅಲ್ಲಿ ಕೂಡ ಕಾಂಗ್ರೆಸ್ ಸರಕಾರ ಅಡ್ಡಿ ಮಾಡುತ್ತಿದೆ. ಪುಡಾರಿತನ ಮಾಡುತ್ತಿದೆ ಎಂದು ಗೊತ್ತಾಗಿದೆ. ಇದನ್ನೆಲ್ಲ ಗಮನಿಸಿ ಹೋರಾಟಕ್ಕೆ ಮುಂದಾಗಿದ್ದೇವೆ ಎಂದು ತಿಳಿಸಿದರು.

ದೇಶವೇ ಸಂಭ್ರಮದಲ್ಲಿ ಇರುವಾಗ ರಾಮಭಕ್ತನನ್ನು ಬಂಧಿಸುವುದಾದರೆ ನಿಮಗೆಷ್ಟು ಧೈರ್ಯ? ಕಾನೂನು- ಸುವ್ಯವಸ್ಥೆಗೆ ಭಂಗ ತರುವ ದುಸ್ಸಾಹಸಕ್ಕೆ ಮುಖ್ಯಮಂತ್ರಿಗಳೇ ಕೈ ಹಾಕುತ್ತಿದ್ದಾರೆ ಎಂದು ವಿಜಯೇಂದ್ರ ಅವರು ಆಕ್ಷೇಪ ವ್ಯಕ್ತಪಡಿಸಿದರು.ರಾಜ್ಯ ಸರ್ಕಾರಕ್ಕೆ ಆದ್ಯತೆ ಯಾವುದು? ಸಂದರ್ಭ ಮತ್ತು ನಿಮ್ಮ ಉದ್ದೇಶ ಏನು? ತಪ್ಪು ಮಾಡಿದ್ದಾರೆ ಅಥವಾ ಇಲ್ಲವೇ ಎಂದು ನೀವು ತೀರ್ಮಾನ ಮಾಡುವುದಲ್ಲ; 31 ವರ್ಷ ಹಳೆಯ ಕೇಸನ್ನು ಈಗಲೇ ರೀ ಓಪನ್ ಮಾಡಬೇಕಿತ್ತೇ ಎಂದು ಅವರು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದರು.

ಗೃಹ ಸಚಿವರಿಗೆ ಹಳೆಯ ಕೇಸುಗಳ ಬಗ್ಗೆ ಬಹಳ ಕಾಳಜಿ ಇದೆ; ತುಂಬ ಸಂತೋಷ. ಆದರೆ, ಮುಂದೆ ನಡೆಯುವ ಘಟನೆಗೆ ಮುಖ್ಯಮಂತ್ರಿಗಳು ಮತ್ತು ಗೃಹ ಸಚಿವರೇ ಹೊಣೆಗಾರರಾಗುತ್ತಾರೆ ಎಂದು ತಿಳಿಸಿದರು.

RELATED ARTICLES
- Advertisment -
Google search engine

Most Popular