ರಾಮನಗರ: ಸಾರ್ವಜನಿಕರು ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಜನತಾ ದರ್ಶನ ಕಾರ್ಯಕ್ರಮವನ್ನು ಆಯೋಜಿಸಿದೆ. ಸಾರ್ವಜನಿಕರು ಜನತಾ ದರ್ಶನ ಕಾರ್ಯಕ್ರಮವನ್ನು ಸದುಪಯೋಗಪಡಿಸಿಕೊಳ್ಳುವಂತೆ ಸಾರಿಗೆ, ಮುಜರಾಯಿ ಇಲಾಖೆ ಮತ್ತು ರಾಮನಗರ ಜಿಲ್ಲಾ ಉಸ್ತುವಾರಿ ಸಚಿವರಾದ ರಾಮಲಿಂಗಾ ರೆಡ್ಡಿ ಅವರು ತಿಳಿಸಿದರು.
ಅವರು ಇಂದು ಚನ್ನಪಟ್ಟಣ ತಾಲ್ಲೂಕಿನ ಶತಮಾನೋತ್ಸವ ಭವನದಲ್ಲಿ ನಡೆದ ಜನತಾ ದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಸಾರ್ವಜನಿಕರು ತಮ್ಮ ಯಾವುದೇ ಸಮಸ್ಯೆ ಅಥವಾ ಅಹವಾಲುಗಳಿದ್ದಲ್ಲಿ ಪ್ರತಿ ತಿಂಗಳು ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ನಡೆಯುವ ಜನತಾ ದರ್ಶನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ನೇರವಾಗಿ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಅರ್ಜಿ ಸಲ್ಲಿಸಬಹುದು. ಅವರು ಇತ್ಯರ್ಥ ಪಡಿಸಬಹುದಾದ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಪರಿಹಾರ ನೀಡುತ್ತಾರೆ. ವಿಳಂಬವಾದರೆ ಹಿಂಬರಹ ನೀಡಿ ಕಾಲಮಿತಿಯಲ್ಲಿ ಪೂರ್ಣಗೊಳಿಸಲಿದ್ದಾರೆ ಎಂದು ತಿಳಿಸಿದರು. ಜನತಾ ದರ್ಶನ ಕಾರ್ಯಕ್ರಮ ಜನರಿಗೆ ಸ್ಪಂದಿಸುವ ಕಾರ್ಯಕ್ರಮವಾಗಬೇಕು ಜನರ ಸಮಸ್ಯೆಗಳನ್ನು ಪರಿಶೀಲಿಸಿ ಕಾನೂನು ಚೌಕಟ್ಟಿನಲ್ಲಿ ಪರಿಹರಿಸುವಂತೆ ತಿಳಿಸಿದರು. ಜನರ ಸಮಸ್ಯೆಗಳಿಗೆ ಪರಿಹಾರ ದೊರೆತಾಗಲೇ ಜನತಾ ದರ್ಶನ ಕಾರ್ಯಕ್ರಮ ಯಶಸ್ವಿಯಾಗುತ್ತದೆ. ಎಲ್ಲಾ ಅಧಿಕಾರಿಗಳು ಜನರ ಸಮಸ್ಯೆಗಳನ್ನು ಆಲಿಸಲು ತಮ್ಮ ಸಮಯ ನೀಡಬೇಕು ಎಂದರು.
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸಂಸದ ಡಿ.ಕೆ. ಸುರೇಶ್ ಅವರು ಮಾತನಾಡಿ, ಜನರ ಸಮಸ್ಯೆಗಳನ್ನು ಬಗೆಹರಿಸಲು ಪ್ರತೀ ತಿಂಗಳು ಒಂದೊಂದು ತಾಲ್ಲೂಕುಗಳಲ್ಲಿ ಜನತಾ ದರ್ಶನ ಕಾರ್ಯಕ್ರಮಗಳನ್ನು ಆಯೋಜಿಸಿ, ಸಾರ್ವಜನಿಕರ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಒದಗಿಸಲು ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದರು. ಒಂದು ವೇಳೆ ಜಿಲ್ಲಾ ಮಟ್ಟದಲ್ಲಿ ಪರಿಹರಿಸಲಾಗದ ಸಮಸ್ಯೆಗಳಿಗೆ ರಾಜ್ಯ ಸರ್ಕಾರದೊಂದಿಗೆ ಚರ್ಚೆಯನ್ನು ಮಾಡಿ ಸಮಸ್ಯೆಗಳಿಗೆ ಪರಿಹಾರ ನೀಡಲು ಕಳೆದ ೪ ತಿಂಗಳಿಂದ ಜನತಾ ದರ್ಶನ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗುತ್ತಿದೆ. ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಲು ಪ್ರತ್ಯೇಕವಾಗಿ ಕೌಂಟರ್‌ಗಳನ್ನು ನಿರ್ಮಿಸಲಾಗಿದ್ದು, ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳಿಗೆ ಪರಿಹಾರ ಒದಗಿಸುವರು ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಕಳೆದ ೬ ತಿಂಗಳಿನಿಂದ ಸುಮಾರು ೭ ಜನ ಆನೆದಾಳಿಯಿಂದ ಮೃತಪಟ್ಪಿದ್ದಾರೆ, ಬೆಳೆ ನಾಶ, ಬೆಳೆ ಪರಿಹಾರ ಮೊತ್ತ ಹೆಚ್ಚಿಸುವ ಕುರಿತು ಹಾಗೂ ಇತರೆ ಸಮಸ್ಯೆಗಳ ಕುರಿತು ಅರ್ಜಿ ಸಲ್ಲಿಸಿದ್ದಾರೆ. ಈ ಕುರಿತು ಮುಖ್ಯಮಂತ್ರಿಗಳು ಹಾಗೂ ಉಪ ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗಿದೆ. ಆನೆದಾಳಿಯನ್ನು ನಿಯಂತ್ರಿಸಲು ಕ್ರಮವಹಿಸಲಾಗುವುದು ಎಂದರು. ಬೆಳೆ ಪರಿಹಾರದ ಮೊತ್ತವನ್ನು ಹೆಚ್ಚುವರಿ ಮಾಡಲು ಕಮಿಟಿಯೊಂದಿಗೆ ಈಗಾಗಲೇ ಚರ್ಚಿಸಲಾಗಿದೆ. ಶಕ್ತಿ ಯೋಜನೆಯಡಿ ಮಹಿಳೆಯರು ಹೆಚ್ಚಾಗಿ ಪ್ರಯಾಣ ಮಾಡುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಹೆಚ್ಚುವರಿ ಕೆ.ಎಸ್.ಆರ್.ಟಿ.ಸಿ ಬಸ್ಸುಗಳ ವ್ಯವಸ್ಥೆ ಮಾಡಲು ಸಾರ್ವಜನಿಕರಿಂದ ಬೇಡಿಕೆ ಬಂದಿದೆ. ಆದ್ದರಿಂದ ಹೆಚ್ಚುವರಿ ಬಸ್ಸುಗಳನ್ನು ಖರೀದಿಸಿ ಸಾರ್ವಜನಿಕರಿಗೆ ಬಸ್ಸುಗಳ ವ್ಯವಸ್ಥೆ ಮಾಡಲಾಗುವುದು ಹಾಗೂ ಇದರಿಂದ ನಿರುದ್ಯೋಗಿಗಳಿಗೆ ಉದ್ಯೋಗಗಳು ಸೃಷ್ಠಿಯಾಗುತ್ತದೆ ಎಂದು ತಿಳಿಸಿದರು.
ಪೋಡಿ, ಖಾತೆ ಸಮಸ್ಯೆಗಳ ಕುರಿತು ರೈತರು ಅರ್ಜಿ ಸಲ್ಲಿಸಿದ್ದು, ಈ ಸಮಸ್ಯೆಗಳನ್ನು ಶೀಘ್ರವಾಗಿ ಪರಿಹರಿಸುವಂತೆ ಅಧಿಕಾರಿಗಳಿಗೆ ತಿಳಿಸಲಾಗಿದೆ. ಜಿಲ್ಲೆಯ ಪ್ರತಿ ಹಳ್ಳಿಗೂ ಪೈಪ್‌ಗಳ ಮೂಲಕ ನೀರು ಪೂರೈಸಲು ಯೋಜನೆಯನ್ನು ರೂಪಿಸಲಾಗಿದೆ. ಅಧಿಕಾರಿಗಳು ಸರ್ಕಾರದ ಯೋಜನೆಗಳನ್ನು ಪ್ರತಿಯೊಂದು ಮನೆಗಳಿಗೂ ತಲುಪಿಸುವಂತೆ ತಿಳಿಸಿದರು.

ಜನತಾ ದರ್ಶನ ಕಾರ್ಯಕ್ರಮದಲ್ಲಿ ಇಂದು ಒಟ್ಟು ೨೪೦ ಅರ್ಜಿಗಳು ಸ್ವೀಕೃತವಾಯಿತು. ಅದರಲ್ಲಿ ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ೧೨೪ ಅರ್ಜಿಗಳು ಸ್ವೀಕೃತಗೊಂಡವು. ಕಾರ್ಯಕ್ರಮದಲ್ಲಿ, ರಾಮನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಇಕ್ಬಾಲ್ ಹುಸೇನ್, ವಿಧಾನ ಪರಿಷತ್ ಸದಸ್ಯರಾದ ಎಸ್. ರವಿ, ವಿಪತ್ತು ನಿರ್ವಹಣೆ, ಕಂದಾಯ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಹಾಗೂ ರಾಮನಗರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ರಶ್ಮಿ ಮಹೇಶ್, ಜಿಲ್ಲಾಧಿಕಾರಿ ಡಾ. ಅವಿನಾಶ್ ಮೆನನ್ ರಾಜೇಂದ್ರನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದಿಗ್ವಿಜಯ್ ಬೋಡ್ಕೆ, ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ, ಅಪರ ಜಿಲ್ಲಾಧಿಕಾರಿ ಶಿವಾನಂದ ಮೂರ್ತಿ, ಉಪವಿಭಾಗಾಧಿಕಾರಿ ಬಿನೋಯ್, ತಹಶೀಲ್ದಾರ ಮಹೇಂದ್ರ ಹಾಗೂ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.