ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಆಕ್ಷೇಪಾರ್ಹ ವಿಡಿಯೋ ಪೋಸ್ಟ್ ಮಾಡಿದ್ದ ಉತ್ತರ ಕನ್ನಡ ಜಿಲ್ಲೆಯ ಶಿರಸಿ ಮೂಲದ ವ್ಯಕ್ತಿಯೊಬ್ಬನನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ವ್ಯಕ್ತಿಯನ್ನು ಅನಿಲ್ ಕುಮಾರ್(೩೪) ಎಂದು ಗುರುತಿಸಲಾಗಿದ್ದು, ಕಳೆದ ೧೨ ವರ್ಷಗಳಿಂದ ಇಲ್ಲಿನ ಸುರತ್ಕಲ್‌ನಲ್ಲಿ ಕ್ಯಾಬ್ ಚಾಲಕನಾಗಿ ಕೆಲಸ ಮಾಡುತ್ತಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಸರ್ಕಾರಿ ಯೋಜನೆಗಳ ಲಾಭ ಪಡೆಯಲು ಪಡಿತರ ಚೀಟಿಯಲ್ಲಿ ಹೆಸರು ಸೇರಿಸಲು ಸಾಧ್ಯವಾಗದ ಕಾರಣ ಆಕ್ರೋಶಗೊಂಡು ಈ ವಿಡಿಯೋ ಮಾಡಿರುವುದಾಗಿ ಆರೋಪಿ ವಿಚಾರಣೆ ವೇಳೆ ಪೊಲೀಸರಿಗೆ ತಿಳಿಸಿದ್ದಾನೆ.
ಅತ್ತಾವರದ ಸುಹಾನ್ ಆಳ್ವ ಎಂಬ ವ್ಯಕ್ತಿ ಈ ವಿಡಿಯೋ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.