ಬೆಂಗಳೂರು: ಸ್ಕೂಟರ್‌ಗೆ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದು ಕಾಲೇಜು ವಿದ್ಯಾರ್ಥಿನಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಲ್ಲೇಶ್ವರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಹರಿಶ್ಚಂದ್ರ ಘಾಟ್ ಬಳಿ ಇಂದು ಬೆಳಿಗ್ಗೆ ೮.೩೦ರ ಸುಮಾರಿಗೆ ನಡೆಯಿತು. ಕುಸುಮಿತಾ (೨೧) ಮೃತಪಟ್ಟ ಯುವತಿ ಎಂದು ಗುರುತಿಸಲಾಗಿದೆ.
ಖಾಸಗಿ ಕಾಲೇಜಿನಲ್ಲಿ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ಕುಸುಮಿತಾ ಎಂದಿನಂತೆ ತಮ್ಮ ನಿವಾಸದಿಂದ ಕಾಲೇಜಿಗೆ ಸ್ಕೂಟರ್ ನಲ್ಲಿ ತೆರಳುತ್ತಿದ್ದರು. ಈ ವೇಳೆ ಬಿಎಂಟಿಸಿ ಬಸ್ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಕುಸುಮಿತಾ ಕೆಳಗೆ ಬಿದ್ದಿದ್ದಾರೆ. ಈ ವೇಳೆ ಬಸ್ ಹರಿದು ಸ್ಥಳದಲ್ಲೇ ಸಾವಿಗೀಡಾದರು ಎಂದು ತಿಳಿದುಬಂದಿದೆ. ಮಗಳನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಮಲ್ಲೇಶ್ವರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಿಎಂಟಿಸಿ ಚಾಲಕ ಘಟನೆಯ ನಂತರ ವಾಹನ ಬಿಟ್ಟು ಪರಾರಿಯಾಗಿದ್ದಾನೆ. ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.