ಧಾರವಾಡ : ಫೆ. 24 ರಂದು ಮಾನ್ಯ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ನವಲಗುಂದ ಪಟ್ಟಣಕ್ಕೆ ಆಗಮಿಸಿ, ನವಲಗುಂದ ಮತಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ, ಚಾಲನೆ ಹಾಗೂ ಲೋಕಾರ್ಪಣೆ ಕಾರ್ಯ ನೆರವೇರಿಸಲಿದ್ದಾರೆ. ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ತಮ್ಮ ಇಲಾಖೆಯ ಕಾಮಗಾರಿಗಳ ಕುರಿತು ವರದಿ ಸಲ್ಲಿಸುವಂತೆ ಶಾಸಕ ಎನ್.ಎಚ್.ಕೋನರಡ್ಡಿ ಅವರು ಹೇಳಿದರು.
ಅವರು ಇಂದು ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿಯ ನೂತನ ಸಭಾಂಗಣದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜರುಗಿದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ತಿಳಿಸಿದರು. ಧಾರವಾಡ ಜಿಲ್ಲೆಯ ನವಲಗುಂದ ವಿಧಾನಸಭಾ ಕ್ಷೇತ್ರದ ನವಲಗುಂದ, ಅಣ್ಣಿಗೇರಿ ಹಾಗೂ ಹುಬ್ಬಳ್ಳಿ ತಾಲ್ಲೂಕಿನ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನಾ ಕಾರ್ಯಕ್ರಮ ಹಾಗೂ ನವಲಗುಂದ ಮತ್ತು ಅಣ್ಣಿಗೇರಿ ಪುರಸಭೆ ವ್ಯಾಪ್ತಿಯಲ್ಲಿ ಮನೆ ಇಲ್ಲದ 2000 ಬಡ ಜನತೆಗೆ ಆಶ್ರಯ ಯೋಜನೆಯಡಿ ನಿವೇಶನ ರಹಿತರಿಗೆ ಹಕ್ಕುಪತ್ರ ವಿತರಣೆ ಹಾಗೂ ಎಲ್ಲ 5 ಗ್ಯಾರೆಂಟಿಗಳ ಫಲಾನುಭವಿಗಳ ಸಮಾವೇಶ ಕಾರ್ಯಕ್ರಮವನ್ನು ನವಲಗುಂದ ಪಟ್ಟಣದ ಮಾಡಲ್ ಹೈಸ್ಕೂಲ್ ಆವರಣದಲ್ಲಿ ಆಯೋಜಿಸಲಾಗಿದೆ ಎಂದು ಅವರು ತಿಳಿಸಿದರು.
ರಾಜ್ಯದಲ್ಲಿಯೇ ಗ್ರಾಮೀಣ ಭಾಗದ ರೈತರಿಗೆ ಹಾಗೂ ಸಾರ್ವಜನಿಕರಿಗೆ ಅನುಕೂಲ ಮಾಡಲು ಚಕ್ಕಡಿ ರಸ್ತೆಗಳನ್ನು ಅಗಲೀಕರಣ ಮಾಡಿ ಹೆದ್ದಾರಿ ತರಹ ಅಭಿವೃದ್ಧಿಪಡೆಸಿದ ಕಾಮಗಾರಿಗಳನ್ನು ಮುಖ್ಯಮಂತ್ರಿಗಳು ವೀಕ್ಷಣೆ ಮಾಡಲಿದ್ದಾರೆ. ಮುಖ್ಯಮಂತ್ರಿಗಳು ಭಾಗವಹಿಸಲಿರುವ ಈ ಕಾರ್ಯಕ್ರಮದಲ್ಲಿ ನವಲಗುಂದ ಪುರಸಭೆ ವ್ಯಾಪ್ತಿಯಲ್ಲಿ ನೂತನವಾಗಿ ನಿರ್ಮಿಸಿದ 41 ಎಕರೆ ಆಶ್ರಯ ಬಡಾವಣೆಯಲ್ಲಿ ಅಂದಾಜು 1 ಸಾವಿರ ನಿವೇಶನ ರಹಿತರಿಗೆ ಆಶ್ರಯ ಯೋಜನೆಯಡಿ ಹಕ್ಕುಪತ್ರ ವಿತರಣೆ ಕಾರ್ಯಕ್ರಮ, ರಹಿತರಿಗೆ ಆಶ್ರಯ ಯೋಜನೆಯಡಿ ಹಕ್ಕುಪತ್ರ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಶಾಸಕರು ತಿಳಿಸಿದರು.
ನವಲಗುಂದ ವಿಧಾನಸಭಾ ಕ್ಷೇತ್ರದ ನವಲಗುಂದ, ಹುಬ್ಬಳ್ಳಿ ಹಾಗೂ ಅಣ್ಣಿಗೇರಿ ತಾಲ್ಲೂಕುಗಳ ವಿವಿಧ ಗ್ರಾಮಗಳಲ್ಲಿ ಗ್ರಾಮೀಣಾಬಿವೃದ್ಧಿ ಹಾಗೂ ಪಂಚಾಯತ್‍ರಾಜ್ ಇಲಾಖೆಯಡಿ ರಾಜ್ಯದಲ್ಲೇ ಮಾದರಿ ಚಕ್ಕಡಿ ರಸ್ತೆಗಳನ್ನು ಹೆದ್ದಾರಿ ತರಹ ನಿರ್ಮಿಸುತ್ತಿರುವ ಕಾಮಗಾರಿಗಳಿಗೆ ಚಾಲನೆ ಹಾಗೂ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯತ ಹಂಚಿಕೆ ಮಾಡಿದ ಅನುದಾನದ ಕಾಮಗಾರಿಗಳಿಗೆ ಮುಖ್ಯಮಂತ್ರಿಗಳು ಚಾಲನೆ ನೀಡಲಿದ್ದಾರೆ.
ಸಭೆಯಲ್ಲಿ ನವಲಗುಂದ, ಅಣ್ಣಿಗೇರಿ, ಹುಬ್ಬಳ್ಳಿ ತಾಲೂಕಾ ಮಟ್ಟದ ಅಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.