ರಾಮನಗರ: ಜಿಲ್ಲೆಯಲ್ಲಿ ಮಾರ್ಚ್ ೩ ರಿಂದ ೬ ರವರೆಗೆ ಪಲ್ಸ್ ಪೋಲಿಯೋ ಅಭಿಯಾನವನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಚಿಕ್ಕಸುಬ್ಬಯ್ಯ ಅವರು ತಿಳಿಸಿದರು. ಅವರು ಡಿ. ೯ರ ಶುಕ್ರವಾರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಲಾಗಿದ್ದ ಜಿಲ್ಲಾ ಮಟ್ಟದ ಲಸಿಕಾ ಕಾರ್ಯಪಡೆ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯಲ್ಲಿರುವ ೦-೫ ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ಕಡ್ಡಾಯವಾಗಿ ಪಲ್ಸ್ ಪೋಲಿಯೋ ಲಸಿಕೆಯನ್ನು ಹಾಕುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಿದರು. ಪಲ್ಸ್ ಪೋಲಿಯೋ ಅಭಿಯಾನವನ್ನು ಸಾರ್ವಜನಿಕ ಸ್ಥಳಗಳಲ್ಲಿ ಆಯೋಜಿಸಬೇಕು ಹಾಗೂ ಮನೆ ಮನೆಗಳಿಗೆ ಭೇಟಿ ನೀಡಿ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆಯನ್ನು ಹಾಕುವಂತೆ ತಿಳಿಸಿದರು. ಶಾಲಾ ಶಿಕ್ಷಣ ಇಲಾಖೆ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಗಳಿಂದ ೦-೫ ವರ್ಷದೊಳಗಿನ ಮಕ್ಕಳ ಮಾಹಿತಿಯನ್ನು ಪಡೆದು ಯಾವುದೇ ಮಗು ಪಲ್ಸ್ ಪೋಲಿಯೋ ಲಸಿಕೆಯಿಂದ ವಂಚಿತರಾಗದಂತೆ ಕ್ರಮವಹಿಸಬೇಕು. ಒಂದು ವೇಳೆ ಲಸಿಕೆಯಿಂದ ವಂಚಿತರಾಗಿದ್ದ ಮಕ್ಕಳನ್ನು ಗುರುತಿಸಿ ಲಸಿಕೆ ನೀಡುವಂತೆ ಹೇಳಿದರು.
ಜಿಲ್ಲೆಯಲ್ಲಿ ವಲಸೆ ಬಂದ ಕಾರ್ಮಿಕರ ಮಕ್ಕಳು ಮತ್ತು ಕೊಳಚೆ ಪ್ರದೇಶಗಳಲ್ಲಿರುವ ಮಕ್ಕಳನ್ನು ಪತ್ತೇ ಹಚ್ಚಿ ಪಲ್ಸ್ ಪೋಲಿಯೋ ಲಸಿಕೆ ಹಾಕಬೇಕು ಎಂದರು. ತಾಲ್ಲೂಕು ಮಟ್ಟದಲ್ಲಿ ಕಾರ್ಯ ನಿರ್ವಾಹಕ ಅಧಿಕಾರಿ, ತಹಶೀಲ್ದಾರ್, ನಗರಸಭೆ ಮುಖ್ಯಾಧಿಕಾರಿಗಳು ಕ್ಷೇತ್ರ ಶಿಕ್ಷಣಾಧಿಕಾರಿಗಳು ಸೇರಿದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳ ಕಾರ್ಯ ಪಡೆ ಸಮಿತಿ (ಟಾಸ್ಕ್ ಪೋರ್ಸ್ ಸಮಿತಿ) ಸಭೆ ಸೇರಿ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನವನ್ನು ಯಶಸ್ವಿಗೊಳಿಸುವಂತೆ ತಿಳಿಸಿದರು.
ಸಭೆಯಲ್ಲಿ ಆರ್.ಸಿ.ಎಚ್ ಅಧಿಕಾರಿ ಡಾ. ರಾಜು, ಡಾ.ಕುಮಾರ್, ಡಾ.ಮಂಜುನಾಥ್ ತಾಲ್ಲೂಕು ಆರೋಗ್ಯಾಧಿಕಾರಿಗಳು, ರೋಟರಿ ಕ್ಲಬ್ ಅಧ್ಯಕ್ಷ ಕಾಂತರಾಜು ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.