ಬೆಂಗಳೂರು: ನಮ್ಮ ಸಂವಿಧಾನಕ್ಕೆ ಇದುವರೆಗೆ ೧೦೬ ತಿದ್ದುಪಡಿಗಳಾಗಿವೆ. ಅದರಲ್ಲಿ ೮೦ಕ್ಕೂ ಹೆಚ್ಚು ತಿದ್ದುಪಡಿ ಮಾಡಿರುವುದು ಕಾಂಗ್ರೆಸ್ ಅಧಿಕಾರದ ಅವಧಿಯಲ್ಲಿ. ಅದರಲ್ಲೂ ವಿಶೇಷವಾಗಿ ತುರ್ತು ಪರಿಸ್ಥಿತಿ ಹೇರಿಕೆ ಸಂದರ್ಭದಲ್ಲಿ, ಎಲ್ಲ ವಿರೋಧ ಪಕ್ಷಗಳ ನಾಯಕರನ್ನು ಜೈಲಿನಲ್ಲಿ ಇಟ್ಟ ಸಂದರ್ಭದಲ್ಲಿ, ನಾಗರಿಕ ಹಕ್ಕುಗಳ ದಮನ ಆದಾಗ, ೧೯೭೫-೭೭ರ ತುರ್ತು ಪರಿಸ್ಥಿತಿ ಅವಧಿಯಲ್ಲೇ ಸಂವಿಧಾನದ ೪೫ ತಿದ್ದುಪಡಿ ಮಾಡಲಾಗಿತ್ತು ಎಂದು ಸಿ.ಟಿ.ರವಿ ಅವರು ತಿಳಿಸಿದರು.
ಇಂದು ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಗರದ ಅರಮನೆ ಮೈದಾನದಲ್ಲಿ ಸರಕಾರಿ ಖರ್ಚಿನಲ್ಲಿ ಕರ್ನಾಟಕ ಸರಕಾರದ ವತಿಯಿಂದ ಆಯೋಜಿಸಿದ್ದ ಸಂವಿಧಾನ ಜಾಗೃತಿ ದಿನದಲ್ಲಿ ಸಂವಿಧಾನ ಜಾಗೃತಿ ಬಗ್ಗೆ ಮಾತನಾಡಿದ್ದು ಕಡಿಮೆ. ಬದಲಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಟೀಕಿಸಿದ್ದು, ಸುಳ್ಳು ಆರೋಪ ಹೊರಿಸಿದ್ದು, ತಪ್ಪು ಭಾವನೆ ಬರುವಂತೆ ಸುಳ್ಳು ಸುದ್ದಿಯನ್ನು ಹರಡಿಸಿದ್ದು, ಇದು ಸಂವಿಧಾನಕ್ಕೆ ಮಾಡಿದ ಅಪಚಾರ ಎಂದು ಅಭಿಪ್ರಾಯಪಟ್ಟರು.
ಸಂವಿಧಾನ ಜಾಗೃತಿ ದಿನದ ಹೆಸರಿನಲ್ಲಿ ಸಂವಿಧಾನಕ್ಕೇ ಅಪಮಾನ ಮಾಡುವ ಕೆಲಸವನ್ನು ಕರ್ನಾಟಕದ ಕಾಂಗ್ರೆಸ್ ಸರಕಾರ ಮಾಡಿದೆ ಎಂದು ಬಿಜೆಪಿ ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಮಾಜಿ ಸಚಿವ ಸಿ.ಟಿ.ರವಿ ಅವರು ಆಕ್ಷೇಪ ವ್ಯಕ್ತಪಡಿಸಿದರು.