ಹೊಸದಿಲ್ಲಿ : ಯೋಗ ಗುರು ಬಾಬಾ ರಾಮ್‌ದೇವ್ ಮಾಲೀಕತ್ವದ ಪತಂಜಲಿ ಆರ್ಯುವೇದ ಕಂಪನಿಯ ಜಾಹಿರಾತು ಜನರನ್ನು ದಾರಿ ತಪ್ಪಿಸುತ್ತಿದ್ದು, ಸುಳ್ಳಿನಿಂದ ಕೂಡಿದೆ. ತಪ್ಪುದಾರಿಗೆಳೆಯುವ ಮಾಹಿತಿ ನೀಡುವ ಔಷಧಗಳ ಎಲ್ಲ ಎಲೆಕ್ಟ್ರಾನಿಕ್ ಮತ್ತು ಮುದ್ರಣ ಜಾಹೀರಾತುಗಳನ್ನು ತಕ್ಷಣವೇ ಜಾರಿಗೆ ಬರುವಂತೆ ನಿಲ್ಲಿಸಬೇಕು ಎಂದು ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದೆ.
ಈ ಬಗ್ಗೆ ಕೇಂದ್ರ ಸರ್ಕಾರ ಯಾವುದೇ ಕ್ರಮ ಕೈಗೊಳ್ಳದೇ ಇರುವ ಬಗ್ಗೆ ಸುಪ್ರೀಂ ಕೋರ್ಟ್ ಇಂದು ಕಿಡಿಕಾರಿದ್ದು, ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳಾದ ಹಿಮಾ ಕೊಹ್ಲಿ ಮತ್ತು ಅಹ್ಸಾನುದ್ದೀನ್ ಅಮಾನುಲ್ಲಾ ಅವರಿದ್ದ ಪೀಠವು ಈ ಆದೇಶ ಹೊರಡಿಸಿದೆ. ಅಲೋಪತಿ ಮತ್ತು ವೈದ್ಯರನ್ನು ಕಳಪೆ ಎನ್ನುವ ರೀತಿಯಲ್ಲಿ ಬಿಂಬಿಸುವ ಹಲವಾರು ಜಾಹೀರಾತುಗಳನ್ನು ಬಾಬಾ ರಾಮ್‌ದೇವ್‌ರ ಪತಂಜಲಿ ಸಂಸ್ಥೆ ಪ್ರಕಟಿಸಿತ್ತು. ಇದರ ವಿರುದ್ಧ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದು, ಅದರ ವಿಚಾರಣೆಯ ಬಳಿಕ ಈ ತಾತ್ಕಾಲಿಕ ಆದೇಶ ಹೊರಡಿಸಿದೆ.