ಮಂಗಳೂರು(ದಕ್ಷಿಣ ಕನ್ನಡ): ರಾಜ್ಯಸಭೆ ಚುನಾವಣೆ ಫಲಿತಾಂಶ ಪ್ರಕಟದ ಸಂದರ್ಭ ವಿಜೇತ ಕಾಂಗ್ರೆಸ್ ಅಭ್ಯರ್ಥಿ ಡಾ.ಸೈಯದ್ ನಾಸಿರ್ ಹುಸೇನ್ ಬೆಂಬಲಿಗರೊಬ್ಬರು ಪಾಕ್ ಪರ ಘೋಷಣೆ ಕೂಗಿದ್ದಾರೆಂಬ ಆರೋಪದ ಹಿನ್ನೆಲೆಯಲ್ಲಿ ಬುಧವಾರ ಬಿಜೆಪಿಯ ದಕ್ಷಿಣ ಕನ್ನಡ ಜಿಲ್ಲಾ ಯುವ ಮೋರ್ಚಾ ಕಾರ್ಯಕರ್ತರು ಮಂಗಳೂರಿನಲ್ಲಿ ಪ್ರತಿಭಟನೆ ನಡೆಸಿದರು.

ಮೋರ್ಚಾ ಕಾರ್ಯಕರ್ತರು ಕಾಂಗ್ರೆಸ್ ವಿರುದ್ಧ ಘೋಷಣೆ ಕೂಗುತ್ತಾ ಮಲ್ಲಿಕಟ್ಟೆಯಲ್ಲಿರುವ ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಪೊಲೀಸರು ಅವರನ್ನು ವಶಕ್ಕೆ ಪಡೆದು ವಾಹನಗಳಲ್ಲಿ ಹತ್ತಿಸಿ ಕರೆದೊಯ್ದರು.
ಇದೇ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಕೂಡಾ ಸ್ಥಳದಲ್ಲಿ ಜಮಾಯಿಸಿ ಬಿಜೆಪಿ ವಿರುದ್ಧ ಘೋಷಣೆಗಳನ್ನು ಕೂಗಿದರು. ಬಳಿಕ ಪೊಲೀಸರು ಪರಿಸ್ಥಿತಿ ನಿಯಂತ್ರಿಸಿದರು.